ಜಿಲ್ಲೆ

ಮಾ.2 ಮತ್ತು 3ರಂದು ಹೊಸಬೂದನೂರು ಉತ್ಸವ: ಶಾಸಕ ರವಿಕುಮಾರ್ ಗಣಿಗ ಅಧ್ಯಕ್ಷತೆಯಲ್ಲಿ ಸಭೆ

ಮಂಡ್ಯ: ತಾಲೂಕಿನ ಹೊಸ ಬೂದನೂರು ಗ್ರಾಮದಲ್ಲಿ ಮಾ.2 ಮತ್ತು 3ರಂದು ಉತ್ಸವವನ್ನು ಅದ್ಧೂರಿಯಾಗಿ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ ಎಂದು ಅಧಿಕಾರಿಗಳಿಗೆ ಶಾಸಕ ರವಿಕುಮಾರ್ ಗಣಿಗ ಸೂಚನೆ ನೀಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಇದೇ ಮೊದಲ ಬಾರಿಗೆ ಜಿಲ್ಲಾಡಳಿತದ ವತಿಯಿಂದ ಗ್ರಾಮಮಟ್ಟದಲ್ಲಿ ಉತ್ಸವ ಮಾಡಲಾಗುತ್ತಿದೆ. ಹೆಚ್ಚಿನ ಸಾರ್ವಜನಿಕರು ಭಾಗವಹಿಸುವಂತೆ ವೈವಿದ್ಯಮಯ ಕಾರ್ಯಕ್ರಮಗಳನ್ನು ಆಯೋಜಿಸಬೇಕು. ಹೊಸ ಬೂದನೂರಿನಲ್ಲಿ ಹೊಯ್ಸಳ ಕಾಲದ ದೇವಾಲಯಗಳಿದ್ದು, ಐತಿಹಾಸಿಕ ಹಾಗೂ ಪುರಾತನ ದೇವಲಯವನ್ನು ಸಂರಕ್ಷಿಸಿ ಜನರಿಗೆ ಪರಿಚಯಿಸಿಕೊಡುವುದು ಉತ್ಸವದ ಉದ್ದೇಶವಾಗಿದೆ ಎಂದರು.

ಜಿಲ್ಲಾಧಿಕಾರಿ ಡಾ.ಕುಮಾರ ಮಾತನಾಡಿ, ಉತ್ಸವವನ್ನು ಅಚ್ಚುಕಟ್ಟಾಗಿ ನಡೆಸಲು ಸಾಂಸ್ಕೃತಿಕ, ಸ್ವಾಗತ, ಆಹಾರ, ಆರೋಗ್ಯ, ಸ್ವಚ್ಛತೆ, ಸೇರಿದಂತೆ ವಿವಿಧ ಸಮಿತಿಗಳನ್ನು ರಚಿಸಲಾಗುವುದು. ಉತ್ಸವ ಹೊಸ ಬೂದನೂರಿಗೆ ಸೀಮಿತ ಮಾಡದೇ ಸುತ್ತಮುತ್ತಲ ಗ್ರಾಮಗಳನ್ನು ಸೇರಿಸಿಕೊಂಡು ಕಾರ್ಯಕ್ರಮ ಆಯೋಜಿಸಿ ಎಂದರು.

ಅಪರ ಜಿಲ್ಲಾಧಿಕಾರಿ ಡಾ.ಎಚ್.ಎಲ್.ನಾಗರಾಜು ಮಾತನಾಡಿ, ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಸ್ಥಳೀಯ ಕಲಾತಂಡದವರಿಗೂ ಆದ್ಯತೆ ನೀಡಲಾಗುವುದು ಎಂದು ಹೇಳಿದರು.

ಸಭೆಯಲ್ಲಿ ಮಂಡ್ಯ ಉಪವಿಭಾಗಾಧಿಕಾರಿ ಶಿವಮೂರ್ತಿ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಕೆ.ಮೋಹನ್, ಆಹಾರ ಇಲಾಖೆ ಜಂಟಿ ನಿರ್ದೇಶಕ ಕೃಷ್ಣಕುಮಾರ್, ತಹಸೀಲ್ದಾರ್ ಡಾ.ಶಿವಕುಮಾರ್ ಬಿರಾದರ್, ತಾಪಂ ಇಒ ವೀಣಾ, ಕನ್ನಡ ಮತ್ತು ಸಾಂಸ್ಕೃತಿಕ ಇಲಾಖೆ ಸಹಾಯಕ ನಿರ್ದೇಶಕ ಉದಯ್, ಪ್ರವಾಸೋದ್ಯಮ ಇಲಾಖೆಯ ಅಧಿಕಾರಿ ಕಿರಣ್ ಇತರರಿದ್ದರು.