ಹೊಸಪೇಟೆ: ಬೆಂಗಳೂರಿನಲ್ಲಿ ಕಾಲ್ತುಳಿತ ದುರಂತದಲ್ಲಿ 11 ಜನರು ದುರ್ಮರಣ ಹೊಂದಿದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಪಕ್ಷದಿಂದ ನಗರದ ಅಂಬೇಡ್ಕರ್ ವೃತ್ತದಲ್ಲಿ ಶುಕ್ರವಾರ ಸಂಜೆ ಪ್ರತಿಭಟನೆ ನಡೆಯಿತು.
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಕ್ರೀಡಾಪಟುಗಳಿಗೆ ಆಯೋಜಿಸಿದ ಸನ್ಮಾನ ಕಾರ್ಯಕ್ರಮದಲ್ಲಿ ಲಕ್ಷಾಂತರ ಜನ ಹರಿದು ಬಂದಿದ್ದು, ಅದನ್ನು ನಿಭಾಯಿಸುವಲ್ಲಿ ಸರ್ಕಾರ ಯಾವುದೇ ಪೂರ್ವ ಸಿದ್ಧತೆ ಮಾಡಿಕೊಂಡಿಲ್ಲ. ಅಮಾಯಕರ ಸಾವಿಗೆ ಸರ್ಕಾರವೇ ನೇರ ಹೊಣೆ ಎಂದು ಆರೋಪಿಸಿದರು.
ಸಮಾರಂಭಕ್ಕೂ ಮುನ್ನವೇ ಕಾಲ್ತುಳಿತದಿಂದ ಸಾವು-ನೋವಾಗಿರುವ ಸುದ್ದಿ ತಲುಪಿದರೂ, ಸನ್ಮಾನ ಕಾರ್ಯಕ್ರಮವನ್ನು ಮುಗಿಸಿದ್ದಾರೆ. ನೈತಿಕ ಜವಾಬ್ದಾರಿಯನ್ನು ಮರೆತು, ಜನರ ಆಕ್ರೋಶವನ್ನು ತಣ್ಣಗಾಗಿಸಬಹುದೆಂಬ ದುರಾಲೋಚನೆಯಿಂದ ಪೊಲೀಸ್ ಅಧಿಕಾರಿಗಳ ಅಮಾನತು ಮಾಡಿರುವುದು ನಾಚಿಕೆಗೇಡಿನ ಸಂಗತಿ ಆಗ್ರಹಿಸಿದರು
ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರಿಗೆ ಕನಿಷ್ಠ ನೈತಿಕತೆ ಇದ್ದರೆ ಈ ದುರಂತ ಘಟನೆಯ ಜವಾಬ್ದಾರಿ ಹೊತ್ತು ಈ ಕೂಡಲೇ ರಾಜಿನಾಮೆ ನೀಡಲಿ ಎಂದು ಒತ್ತಾಯಿಸಿದ್ದಾರೆ.
ನಗರಸಭೆ ಅಧ್ಯಕ್ಷ ರೂಪೇಶ್ ಕುಮಾರ್, ಉಪಾಧ್ಯಕ್ಷ ರಮೇಶ್ ಗುಪ್ತ, ಬಿಜೆಪಿ ಮಂಡಲ ಅಧ್ಯಕ್ಷ ಶಂಕರ್ ಮೇಟಿ, ಪ್ರಮುಖರಾದ ಅಶೋಕ್ ಜಿರೆ, ಮಂಡಲ ಯುವ ಮೋರ್ಚಾ ಅಧ್ಯಕ್ಷ ರಾಘವೇಂದ್ರ, ಪ್ರಮುಖರಾದ ನಾಗೇಂದ್ರ, ಮಧುರ ಚೆನ್ನಶಾಸ್ತ್ರಿ, ಗೌಳಿ ರುದ್ರಪ್ಪ, ಹೊನ್ನೂರಪ್ಪ, ಗೌಳಿ ಬಸವರಾಜ್ ವಿಜಯೇಂದ್ರ ಇತರರಿದ್ದರು.