ಕಾರ್ಮಿಕರಿಗೆ ಕರೊನಾ ಪರಿಹಾರ ಘೋಷಿಸುವಂತೆ ಒತ್ತಾಯಿಸಿ ಹೊಸಪೇಟೆಯಲ್ಲಿ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಷನ್ ಪದಾಧಿಕಾರಿಗಳು ಕಾರ್ಮಿಕ ಇಲಾಖೆ ನಿರೀಕ್ಷಕ ಅಶೋಕಗೆ ಗುರುವಾರ ಮನವಿ ಸಲ್ಲಿಸಿದರು. 
ಜಿಲ್ಲೆ

ಕಟ್ಟಡ ಕಾರ್ಮಿಕರಿಗೆ ಕೋವಿಡ್ ಪರಿಹಾರ ಘೋಷಿಸುವಂತೆ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಷನ್ ಒತ್ತಾಯ

ಹೊಸಪೇಟೆ: ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ಕೋವಿಡ್ ಪರಿಹಾರ ಘೋಷಿಸುವಂತೆ ಒತ್ತಾಯಿಸಿ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಷನ್ ತಾಲೂಕು ಸಮಿತಿ ಪದಾಧಿಕಾರಿಗಳು ನಗರದಲ್ಲಿ ಕಾರ್ಮಿಕ ಇಲಾಖೆ ನಿರೀಕ್ಷಕ ಅಶೋಕಗೆ ಗುರುವಾರ ಮನವಿ ಸಲ್ಲಿಸಿದರು.

ಕರೊನಾ ಎರಡನೇ ಅಲೆ ಹಿನ್ನೆಲೆಯಿಂದ ಘೋಷಿಸಿದ ಲಾಕ್‌ಡೌನ್‌ನಿಂದಾಗಿ ಕಟ್ಟಡ ನಿರ್ಮಾಣ ವಲಯದ ಕಾರ್ಮಿಕರು ನಿರುದ್ಯೋಗಿಗಳಾಗಿದ್ದಾರೆ. ಇತ್ತೀಚೆಗೆ ಪುನಶ್ಚೇತನಗೊಳ್ಳುತ್ತಿದ್ದ ಕಟ್ಟಡ ನಿರ್ಮಾಣ ಕಾಮಗಾರಿಗಳು ಲಾಕ್‌ಡೌನ್‌ನಿಂದ ಮತ್ತೆ ಸ್ಥಗಿತಗೊಂಡು ಸಂಕಷ್ಟಕ್ಕೆ ಸಿಲುಕಿರುವ ಸಾವಿರಾರು ವಲಸೆ ಕಾರ್ಮಿಕರು ಪುನಃ ತಮ್ಮ ಊರುಗಳತ್ತ ತೆರಳುತ್ತಿದ್ದಾರೆ.

ಈಗಾಗಲೆ ಕಷ್ಟದಲ್ಲಿ ಜೀವನ ಸಾಗಿಸುತ್ತಿರುವ ಕಾರ್ಮಿಕ ಕುಟುಂಬಗಳು ಮತ್ತಷ್ಟು ತೊಂದರೆಗೆ ಸಿಲುಕಲಿವೆ. ಕೂಡಲೇ ಮಂಡಳಿಯ ನೋಂದಾಯಿತವಾದ ಎಲ್ಲಾ ಕಾರ್ಮಿಕರಿಗೆ ಕೋವಿಡ್ ಎರಡನೇ ಅಲೆಯ ಪರಿಹಾರವೆಂದು ವಾರಕ್ಕೆ ತಲಾ 2000 ರೂ.ಯಂತೆ ತಿಂಗಳಿಗೆ 8000 ರೂ. ಪರಿಹಾರ ಹಣವನ್ನು ಅವರ ಬ್ಯಾಂಕ್ ಖಾತೆಗೆ ವರ್ಗಾವಣೆ ಮಾಡಬೇಕು. ಕಳೆದ ವರ್ಷ ಘೋಷಿಸಲಾದ ಕೋವಿಡ್ ಪರಿಹಾರ ಹಣ ಬಾಕಿ ಇರುವ 1.20 ಲಕ್ಷ ಕಾರ್ಮಿಕರಿಗೆ ಕೂಡಲೇ ವರ್ಗಾವಣೆ ಮಾಡಬೇಕು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿದರು.