ಹೊಸಪೇಟೆ: ವಿಮುಕ್ತ ದೇವದಾಸಿಯರಿಗೆ ಮಾಸಿಕ 3 ಸಾವಿರ ರೂ.ಸಹಾಯಧನ ಹೆಚ್ಚಳ ಸೇರಿ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ದೇವದಾಸಿ ಮಹಿಳೆಯರ ವಿಮೋಚನಾ ಸಂಘ ಜಿಲ್ಲಾ ಘಟಕ ಡಿಸಿ ಕಚೇರಿ ಎದುರು ಗುರುವಾರ ಪ್ರತಿಭಟನೆ ನಡೆಸಿದರು.
ರಾಜ್ಯದಲ್ಲಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ ನಡೆಸಬೇಕು. ವಿಮುಕ್ತ ದೇವದಾಸಿಯರಿಗೆ ಪುನರ್ವಸತಿ ಕಲ್ಪಿಸಲು ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕು. ರಾಜ್ಯದಲ್ಲಿ ಎರಡು ಬಾರಿ ವಿಮುಕ್ತ ದೇವದಾಸಿಯರ ಸಮೀಕ್ಷೆ ನಡೆಸಿದ್ದರೂ, ಸುಮಾರು 25 ಸಾವಿರ ದೇವದಾಸಿಯರು ಸಮೀಕ್ಷೆ ಯಿಂದ ಹೊರಗುಳಿದಿದ್ದಾರೆ. ಈ ಹಿನ್ನೆಲೆಯಲ್ಲಿ ವಯೋಮಿತಿ ಭೇದವಿಲ್ಲದೇ ಎಲ್ಲ ದೇವದಾಸಿ ಮಹಿಳೆಯರಿಗೂ ಮಾಸಿಕ ಸಹಾಯಧನ, ಪಿಂಚಣಿ ಒದಗಿಸ ಬೇಕು. ದೇವದಾಸಿ ಮಹಿಳೆಯರ ಮಕ್ಕಳ ಮತ್ತು ದೇವದಾಸಿ ಮಹಿಳೆಯರ ಪರಿತ್ಯಕ್ತ ಹೆಣ್ಣು ಮಕ್ಕಳ ಗಣತಿಯಲ್ಲಿ ಗುರುತಿಸಬೇಕು. ಮುಂಬರುವ ಬಜೆಟ್‌ನಲ್ಲಿ 1 ಸಾವಿರ ಕೋಟಿ ರೂ. ಮೀಸಲಿಡಬೇಕು ಎಂದು ಒತ್ತಾಯಿಸಿದರು.
ದೇವದಾಸಿ ಮಹಿಳೆಯರ ಮಕ್ಕಳ ಮದುವೆಗೆ ನೀಡುವ ಪ್ರೋತ್ಸಾಹ ಧನದ ಷರತ್ತುಗಳನ್ನು ಮುಕ್ತಗೊಳಿಸಬೇಕು. ಒಳ ಮೀಸಲಾತಿ ಆಧಾರದಲ್ಲಿ ಶಿಕ್ಷಣ, ಉದ್ಯೋಗಕ್ಕೆ ಅವಕಾಶ ನೀಡಬೇಕು. ಉದ್ಯೋಗ ದೊರೆಯುವವರೆಗೆ ಮಾಸಿಕ 10 ಸಾವಿರ ರೂ. ನಿರುದ್ಯೋಗ ಭತ್ಯೆ ಒದಗಿಸಬೇಕು. ಎಲ್ಲ ದೇವದಾಸಿ ಮಹಿಳೆಯರು ಹಾಗೂ ಅವರ ಮಕ್ಕಳಿಗೆ ತಲಾ 5 ಎಕರೆ ನೀರಾವರಿ ಜಮೀನು ಒದಗಿಸಬೇಕು. ಲಾಟರಿ ಮೂಲಕ ಫಲಾನುಭವಿಗಳನ್ನು ಆಯ್ಕೆ ಮಾಡಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.