ಬಳ್ಳಾರಿಯ ಬಿಡಿಡಿಎಸ್ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ತರಬೇತಿ ಕಾರ್ಯಕ್ರಮವನ್ನು ಉಪನಿರ್ದೇಶಕ ಡಾ.ಎಚ್.ವಿಜಯಕುಮಾರ ಉದ್ಘಾಟಿಸಿದರು. ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ ವಿಜಯಲಕ್ಷ್ಮೀ ಮೈದೂರು, ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಮಾಜಿ ಸದಸ್ಯ ಎಚ್.ಸಿ.ರಾಘವೇಂದ್ರ, ವಕೀಲೆ ಶಿವಲೀಲಾ ಇತರರಿದ್ದರು. 
ಜಿಲ್ಲೆ

ಗೃಹಪಾಲಕರು ಮಕ್ಕಳ ಮೇಲೆ ನಿಗಾ ವಹಿಸಿ

ಗಾಯತ್ರಿ ಮಾಲಿಪಾಟೀಲ್

ಬಳ್ಳಾರಿ: ಮಕ್ಕಳ ಪಾಲನಾ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಆಪ್ತಸಮಾಲೋಚಕರು, ಗೃಹಪಾಲಕರು ಹಾಗೂ ಸಿಬ್ಬಂದಿ ಮಕ್ಕಳ ಭವಿಷ್ಯಕ್ಕೆ ಉತ್ತಮವಾಗಿ ಕಾರ್ಯನಿರ್ವಹಿಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಕೆ.ಎಚ್.ವಿಜಯ ಕುಮಾರ ಹೇಳಿದರು.

ನಗರದ ಬಿಡಿಡಿಎಸ್ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಪಂ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಮತ್ತು ನೋಂದಾಣಿ ಇಲಾಖೆ ಸಹಯೋಗದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಬಾಲನ್ಯಾಯ ಕಾಯ್ದೆ, ದತ್ತು ಪ್ರಕ್ರಿಯೆ ಮತ್ತು ಮಕ್ಕಳ ರಕ್ಷಣೆ ಕುರಿತ ತರಬೇತಿ ಕಾರ್ಯಕ್ರಮದಲ್ಲಿ ಮಾತನಾಡಿದರು. ಮಕ್ಕಳನ್ನು ಸಕರಾತ್ಮಕ ಚಟುವಟಿಕೆಗಳಲ್ಲಿ ತೊಡಗಿಸಬೇಕು. ಯಾವಾಗಲೂ ಮಕ್ಕಳ ಮೇಲೆ ನಿಗಾ ವಹಿಸಬೇಕು ಎಂದು ತಿಳಿಸಿದರು.

ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಎಳೆನಾಗಪ್ಪ ಮಾತನಾಡಿ, ಮಕ್ಕಳ ಪಾಲನಾ ಸಂಸ್ಥೆಗಳಲ್ಲಿ ಮಕ್ಕಳ ರಕ್ಷಣೆ ಹಾಗೂ ಪೋಷಣೆಯಲ್ಲಿ ಸಿಬ್ಬಂದಿ ಪಾತ್ರ ಮುಖ್ಯವಾಗಿದೆ. ಮಕ್ಕಳ ವೈಯಕ್ತಿಕ ಕಡತ ನಿರ್ವಹಣೆ, ಮಕ್ಕಳೊಂದಿಗೆ ಸಮಲೋಚನೆ ಮತ್ತು ಕಾರ್ಯಕ್ಷಮತೆ ಹೆಚ್ಚಿಸಬೇಕಾಗಿದೆ ಆದ್ದರಿಂದ ತರಬೇತಿ ಪಡೆಯಬೇಕು ಎಂದು ಹೇಳಿದರು.

ಮಹಿಳಾ ಮತ್ತು ಮಕ್ಕಳ ಕಲ್ಯಾಣಾಧಿಕಾರಿ ಜಲಾಲಪ್ಪ ಮಾತನಾಡಿ, ದೈನಂದಿನ ಚಟುವಟಿಕೆಗಳಲ್ಲಿ ಕಂಡುಬರುವ ಸಮಸ್ಯೆಗಳ ಕುರಿತು ಚರ್ಚಿಸಿ ಸಂಪನ್ಮೂಲ ವ್ಯಕ್ತಿಗಳಿಂದ ಮಾಹಿತಿ ಪಡೆಯಬೇಕು. ಮಕ್ಕಳ ರಕ್ಷಣೆ ಮತ್ತು ಪೋಷಣೆಯಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು ಎಂದರು. ಮಕ್ಕಳ ಸಹಾಯವಾಣಿ, ಮಕ್ಕಳ ಪಾಲನಾ ಸಂಸ್ಥೆಗಳ ಸಿಬ್ಬಂದಿ ಹಾಗೂ ಶಿಬಿರಾರ್ಥಿಗಳು ಇದ್ದರು.