ಹುಬ್ಬಳ್ಳಿ: ಇಲ್ಲಿಯ ವಿಮಾನ ನಿಲ್ದಾಣದಲ್ಲಿ ನೂತನ ಟರ್ಮಿನಲ್ ನಿರ್ಮಾಣವಾದ ನಂತರ ಸುಮಾರು 4 ವಿಮಾನಗಳನ್ನು ಪಾರ್ಕಿಂಗ್ ಮಾಡಲು ಸಾಧ್ಯವಾಗಲಿದೆ. ನಿತ್ಯ 2400 ಪ್ರಯಾಣಿಕರಿಗೆ ಸೇವೆ ಒದಗಿಸಬಹುದಾಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು.
ಹುಬ್ಬಳ್ಳಿ ವಿಮಾನ ನಿಲ್ದಾಣದ ಹೊಸ ಟರ್ಮಿನಲ್ ಕಟ್ಟಡಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರ ಪ್ರದೇಶದ ಆಜಂಗಡದಿಂದ ವರ್ಚುವಲ್ ಆಗಿ ಭಾನುವಾರ ಶಂಕುಸ್ಥಾಪನೆ ನೆರವೇರಿಸಿದರು.
ಈ ವೇಳೆ ಸ್ಥಳಿಯವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವ ಜೋಶಿ, ವಿಮಾನ ನಿಲ್ದಾಣದಲ್ಲಿ ನಾಲ್ಕು ಏರೋ ಬ್ರಿಜ್ ಗಳನ್ನು ಸ್ಥಾಪಿಸಲಾಗುತ್ತಿದೆ. ಈಗಿರುವ ಸೌಲಭ್ಯಗಳು ಮೂರು ಪಟ್ಟು ಹೆಚ್ಚಳವಾಗಲಿವೆ. ಮೆಗಾ ಸಿಟಿ ಆಗುವಂತೆ ಹು-ಧಾ ಅವಳಿ ನಗರಗಳನ್ನು ಅಭಿವೃದ್ಧಿಪಡಿಸಿ ಹೆಚ್ಚಿನ ಉದ್ಯೋಗಾವಕಾಶ ಕಲ್ಪಿಸುವ ಸಂಕಲ್ಪ ಮಾಡಲಾಗಿದೆ ಎಂದರು.
320 ಕೋಟಿ ರೂ. ವೆಚ್ಚದಲ್ಲಿ ಹೊಸ ಟರ್ಮಿನಲ್ ಕಟ್ಟಡ ಬರಲಿದೆ. ಎರಡು ವರ್ಷದಲ್ಲಿ ಕಾಮಗಾರಿ ರ್ಪೂಣಗೊಳ್ಳಲಿದೆ. ವಿಶ್ವದರ್ಜೆಯ ವಿಮಾನ ನಿಲ್ದಾಣ ಇದಾಗಲಿದೆ ಎಂದು ಹೇಳಿದರು.
ವಿಧಾನಸಭೆ ವಿರೋಧ ಪಕ್ಷದ ಉಪನಾಯಕ ಅರವಿಂದ ಬೆಲ್ಲದ ಮಾತನಾಡಿ, ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ತಮ್ಮ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದ್ದಾರೆ. ಅನೇಕ ಅಸಾಧ್ಯ ಕೆಲಸಗಳನ್ನು ಸಹ ಅವರು ಮಾಡಿ ತೋರಿಸಿದ್ದಾರೆ. ಅವರ ಕ್ಷೇತ್ರ ವ್ಯಾಪ್ತಿಯಲ್ಲಿ ನಮ್ಮ ವಿಧಾನಸಭಾ ಕ್ಷೇತ್ರವಿರುವುದು ಹಾಗೂ ಹಲವು ಅಭಿವೃದ್ಧಿ ಕಾರ್ಯಗಳು ನಮ್ಮಲ್ಲಿಯೂ ನಡೆದಿರುವುದು ನಮಗೆ ಹೆಮ್ಮೆಯ ಸಂಗತಿ ಎಂದರು.
ವಿಮಾನ ನಿಲ್ದಾಣ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಸಂಜೀವ ಜಿಂದಾಲ ಮಾತನಾಡಿ, ದೇಶದ ವಿವಿಧ ರಾಜ್ಯಗಳ 15 ವಿಮಾನ ನಿಲ್ದಾಣಗಳ ಅಭಿವೃದ್ಧಿಗೆ 9800 ಕೋಟಿ ರೂ. ಯೋಜನೆ ರೂಪಿಸಲಾಗಿದೆ. ಹುಬ್ಬಳ್ಳಿಯಲ್ಲಿ 320 ಕೋಟಿ ರೂ. ವೆಚ್ಚದಲ್ಲಿ 5 ಸ್ಟಾರ್ ರೇಟಿಂಗ್ ಉತ್ತಮ ಕಟ್ಟಡ ತಲೆ ಎತ್ತಲಿದೆ. ಸುಸ್ಥಿರ ಬಿಲ್ಡಿಂಗ್ ಇದಾಗಿರಲಿದೆ ಎಂದರು.
ಶಾಸಕರಾದ ಮಹೇಶ ಟೆಂಗಿನಕಾಯಿ, ಎಂ.ಆರ್ ಪಾಟೀಲ್, ಪ್ರಸಾದ ಅಬ್ಬಯ್ಯ, ಮೇಯರ್ ವೀಣಾ ಬರದ್ವಾಡ, ಜಿಲ್ಲಾಧಿಕಾರಿ ದಿವ್ಯಪ್ರಭು, ಎಸ್ಪಿ ಗೋಪಾಲ ಬ್ಯಾಕೋಡ, ಪೊಲೀಸ್ ಆಯುಕ್ತೆ ರೇಣುಕಾ ಸುಕುಮಾರ, ಪದ್ಮಾ ಅಗ್ನಿಹೋತ್ರಿ, ವಿಮಾನ ನಿಲ್ದಾಣದ ಅಧಿಕಾರಿಗಳು ಉಪಸ್ಥಿತರಿದ್ದರು.
15 ವಿಮಾನ ನಿಲ್ದಾಣ: ಆಜಂಗಡ ಸೇರಿ ದೇಶದ 15 ವಿಮಾನ ನಿಲ್ದಾಣಗಳ ಅಭಿವೃದ್ಧಿಗೆ ಪ್ರಧಾನಿ ಮೋದಿ ಅವರು ವರ್ಚುವಲ್ ಮೂಲಕ ಚಾಲನೆ ನೀಡಿದರು. ಇದರಲ್ಲಿ ರಾಜ್ಯದ ಹುಬ್ಬಳ್ಳಿ, ಬೆಳಗಾವಿ ನಿಲ್ದಾಣಗಳು ಸೇರಿವೆ.