ಹುಬ್ಬಳ್ಳಿ: ಹುಬ್ಬಳ್ಳಿ-ಅಂಕೋಲಾ ರೈಲು ಮಾರ್ಗ ಯೋಜನೆ ಪ್ರಸ್ತಾಪವನ್ನು ತಿರಸ್ಕರಿಸಿದ್ದ ರಾಜ್ಯ ವನ್ಯಜೀವಿ ಮಂಡಳಿ ಸಭೆಯ ನಿರ್ಣಯ ಅಮಾನತಿನಲ್ಲಿಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್ ತಿಳಿಸಿದ್ದಾರೆ.
ಮಾ.9ರಂದು ನಡೆದ ಮಂಡಳಿ ಸಭೆಯಲ್ಲಿ ಯೋಜನೆಯ ಪ್ರಸ್ತಾಪವನ್ನು ತಿರಸ್ಕರಿಸಿ ನಿರ್ಣಯ ಕೈಗೊಳ್ಳಲಾಗಿತ್ತು. ಮುಖ್ಯಮಂತ್ರಿ ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ನಡೆದ ಅಂದಿನ ಸಭೆಯಲ್ಲಿ ಕೆಲ ಪರಿಸರವಾದಿಗಳು, ಅಧಿಕಾರಿಗಳು ಯೋಜನೆಗೆ ವಿರೋಧ ವ್ಯಕ್ತಪಡಿಸಿದ್ದರು. ‘ಅಂದಿನ ಸಭೆಯಲ್ಲಿ ಒಮ್ಮತದ ನಿರ್ಣಯವಾಗಿಲ್ಲ. ಈ ಭಾಗದ ಜನಪ್ರತಿನಿಧಿಗಳು, ವಾಣಿಜ್ಯೋದ್ಯಮಿಗಳು ಹಾಗೂ ಪ್ರಮುಖರ ಉಪಸ್ಥಿತಿ ಇರಲಿಲ್ಲ. ಕೆಲ ಪರಿಸರವಾದಿಗಳು ಮತ್ತು ಅಧಿಕಾರಿಗಳು ಭಾಗವಹಿಸಿದ್ದ ಸಭೆಯ ನಿರ್ಣಯ ಒಪ್ಪುವಂಥದಲ್ಲ’ ಎಂದು ಶೆಟ್ಟರ್ ಹೇಳಿದ್ದಾರೆ.
ವನ್ಯಜೀವಿ ಮಂಡಳಿ ಸಭೆಯ ನಿರ್ಣಯಕ್ಕೆ ಸಾರ್ವಜನಿಕರಿಂದ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ರೈಲು ಹೋರಾಟ ಸಮಿತಿ, ವಾಣಿಜ್ಯೋದ್ಯಮ ಸಂಸ್ಥೆ, ಧಾರವಾಡ ಹಾಗೂ ಉತ್ತರ ಕನ್ನಡ ಜಿಲ್ಲೆಯ ಚುನಾಯಿತ ಪ್ರತಿನಿಧಿಗಳು, ಉದ್ದಿಮೆದಾರರು ವಿರೋಧ ವ್ಯಕ್ತಪಡಿಸಿದ್ದರು.
ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಕಾಲದಲ್ಲೇ ಹುಬ್ಬಳ್ಳಿ- ಅಂಕೋಲಾ ರೈಲು ಮಾರ್ಗ ಯೋಜನೆಗೆ ಚಾಲನೆ ನೀಡಲಾಗಿತ್ತು. ಯಾರದ್ದೋ ಒತ್ತಡಕ್ಕೆ ಮಣಿದು ವನ್ಯಜೀವಿ ಮಂಡಳಿ ವ್ಯತಿರಿಕ್ತ ನಿರ್ಣಯ ಕೈಗೊಂಡಿದೆ ಎಂಬ ಆಕ್ಷೇಪ ವ್ಯಕ್ತವಾಗಿತ್ತು. ನಾಶವಾಗುವ 138 ಹೆಕ್ಟೇರ್ ಅರಣ್ಯ ಪ್ರದೇಶದ ಬದಲು ನಾಲ್ಕು ಪಟ್ಟು ಅರಣ್ಯ ಬೆಳೆಸುವ ಜವಾಬ್ದಾರಿಯೊಂದಿಗೆ ಅನುಷ್ಠಾನಗೊಳಿಸಲು ಒಪ್ಪಿಗೆ ಸೂಚಿಸಲಾಗಿತ್ತು. ಯೋಜನೆ ಜಾರಿಯಿಂದ ಕರಾವಳಿ ಹಾಗೂ ಉತ್ತರ ಕರ್ನಾಟಕದ ನಡುವಿನ ಸಂಪರ್ಕದಿಂದ ಅಭಿವೃದ್ಧಿಗೆ ಪೂರಕವಾಗಲಿದೆ. ಆಮದು-ರಫ್ತಿಗೆ ಈಗಿರುವ ಕರಾವಳಿ ಬಂದರುಗಳಾದ ಬೇಲೆಕೇರಿ, ಕಾರವಾರ ಇವುಗಳನ್ನು ಸಮರ್ಪಕವಾಗಿ ಬಳಕೆ ಮಾಡಿಕೊಂಡರೆ ಅಭಿವೃದ್ಧಿಯಾಗಿ ಉದ್ಯೋಗಾವಕಾಶ ಸೃಷ್ಟಿಯಾಗಲಿವೆ ಎಂದು ಭಾವಿಸಲಾಗಿದೆ.