ಉಡುಪಿ: ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಜಿಲ್ಲೆಯ ಗಡಿಭಾಗಗಳಾದ ಬೈಂದೂರು ತಾಲೂಕಿನ ಶಿರೂರು ಟೋಲ್ ಗೇಟ್ ನಿಂದ ಕಾಪು ತಾಲೂಕಿನ ಹೆಜಮಾಡಿ ಸೇತುವೆವರೆಗೆ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಸುಮಾರು 107 ಕಿ.ಮೀ ಉದ್ದದ ಮಾನವ ಸರಪಳಿ ರಚಿಸಿ ಜನಜಾಗೃತಿ ಮೂಡಿಸಲಾಯಿತು.
ಕಿನ್ನಿಮೂಲ್ಕಿ ಸ್ವಾಗತ ಗೋಪುರದ ಬಳಿ ಜಿಲ್ಲಾ ಮಟ್ಟದ ಕಾರ್ಯಕ್ರಮಕ್ಕೆ ಚಂಡೆ ಬಾರಿಸುವ ಮೂಲಕ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಚಾಲನೆ ನೀಡಿದರು. ನಂತರ ಸಂವಿಧಾನದ ಪೀಠಿಕೆಯನ್ನು ಓದಿದರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ವತಿಯಿಂದ ರಚಿಸಿದ ಪ್ರಜಾಪ್ರಭುತ್ವ ಆಶಯ ಕಿರು ಹೊತ್ತಿಗೆಯನ್ನು ಬಿಡುಗಡೆಗೊಳಿಸಲಾಯಿತು.ಕಾರ್ಯಕ್ರಮದಲ್ಲಿ ಯಕ್ಷಗಾನ, ಚಂಡೆ ಹಾಗೂ ಕಂಗೀಲು ನೃತ್ಯ ಪ್ರದರ್ಶನ ನಡೆಯಿತು. ವಿವಿಧ ಕಲಾ ತಂಡಗಳು ಭಾಗವಹಿಸಿದ್ದವು. ಶಾಲಾ-, ಕಾಲೇಜಿನ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಔಷಧೀಯ ಸಸ್ಯಗಳನ್ನು ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತಿಕ್ ಬಾಯಲ್, ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಅರುಣ್ ಕೆ, ಡಿ.ಎಫ್.ಒ ಗಣಪತಿ, ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್., ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಅನಿತಾ ಮಡ್ಲೂರು, ನಗರಸಭೆಯ ಅಧ್ಯಕ್ಷ ಪ್ರಭಾಕರ್ ಪೂಜಾರಿ, ರೋಟರಿ ಗರ್ವನರ್ ದೇವಾನಂದ್, ಬಡಗಬೆಟ್ಟು ಸೊಸೈಟಿ ಅಧ್ಯಕ್ಷ ಜಯಕರ್ ಶೆಟ್ಟಿ ಇಂದ್ರಾಳಿ, ಸ್ವಾತಂತ್ರ$್ಯ ಹೋರಾಟಗಾರ ಮಲ್ಪೆ ರಾಘವೇಂದ್ರ ಮೊದಲಾದವರು ಉಪಸ್ಥಿತರಿದ್ದರು. ಮರವಂತೆ, ಕುಂದಾಪುರ, ಬ್ರಹ್ಮಾವರ ಹಾಗೂ ಉಚ್ಚಿಲದಲ್ಲಿ ತಾಲೂಕು ಮಟ್ಟದ ಕಾರ್ಯಕ್ರಮ ನಡೆಯಿತು. ಲಾಂತರ ಮಂದಿ ಪರಸ್ಪರ ಕೈಯನ್ನು ಹಿಡಿದುಕೊಂಡು ಮಾನವ ಸರಪಳಿ ರಚಿಸಿದರು.
ಸಂವಿಧಾನದ ಮೌಲ್ಯಗಳನ್ನು ಎಲ್ಲೆಡೆ ಪಸರಿಸುವ ಉದ್ದೇಶದಿಂದ ವಿನೂತನ ಮಾನವ ಸರಪಳಿ ಕಾರ್ಯಕ್ರಮವನ್ನು ರಾಜ್ಯ ಸರ್ಕಾರ ಆಯೋಜಿಸಿದ್ದು, ಪ್ರಜಾಪ್ರಭುತ್ವವು ಇನ್ನಷ್ಟು ಗಟ್ಟಿಗೊಂಡು ಪ್ರತಿಯೊಬ್ಬರ ಬದುಕಿಗೆ ಭದ್ರ ಬುನಾದಿಯಾಗಲಿದೆ.ಡಾ.ಕೆ.ವಿದ್ಯಾಕುಮಾರಿ, ಜಿಲ್ಲಾಧಿಕಾರಿ
ನಾಗರಿಕರು ಜವಾಬ್ದಾರಿಗಳನ್ನು ಅರಿತಾಗ ಮಾತ್ರ ಹಕ್ಕುಗಳಿಗೆ ಅರ್ಥ ಬರುತ್ತದೆ. ಜವಾಬ್ದಾರಿಯುತ ನಡವಳಿಕೆಯಿಂದ ದೇಶದ ಶಾಂತಿ&ಸುವ್ಯವಸ್ಥೆ ಚೆನ್ನಾಗಿರುತ್ತದೆ. ಸಂವಿಧಾನದ ಆಶಯಗಳನ್ನು ನಮ್ಮ ನಡವಳಿಕೆಯಲ್ಲಿ ತೋರಿಸಬೇಕು. ಸಂವಿಧಾನದ ವಿಚಾರಗಳನ್ನು ನಿತ್ಯ ಜೀವನದಲ್ಲಿ ಅಳವಡಿಸಿಕೊಂಡಾಗ ಸ್ವಾತಂತ್ರ್ಯ ದೊರಕಿಸಿಕೊಟ್ಟ ಮಹಾತ್ಮರ ಬಲಿದಾನ ಸಾರ್ಥಕವಾಗುತ್ತದೆ.ಕಿರಣ್ ಎಸ್. ಗಂಗಣ್ಣವರ್, ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ