ಶಿವಮೊಗ್ಗ: ಪತ್ನಿಗೆ ವರದಕ್ಷಿಣೆ ಕಿರುಕುಳ ನೀಡಿ ಚಾಕುವಿನಿಂದ ಚುಚ್ಚಿ ಕೊಲೆ ಮಾಡಿದ್ದ ಪತಿಗೆ ಶಿವಮೊಗ್ಗದ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ಮತ್ತು 1.85 ಲಕ್ಷ ರೂ. ದಂಡ ವಿಧಿಸಿ ಆದೇಶಿಸಿದೆ.
ತಾಲೂಕಿನ ದುಮ್ಮಳ್ಳಿಯ ಕರುಣಾಕರ(36) ಜೀವಾವಧಿ ಶಿಕ್ಷೆಗೆ ಗುರಿಯಾದವ. ಈತ 2022ರ ಸೆ.20ರಂದು ಪತ್ನಿ ಅಮಿತಾ(27) ಅವರನ್ನು ಕೊಲೆ ಮಾಡಿದ್ದ. ವರದಕ್ಷಿಣೆ ವಿಚಾರದಲ್ಲಿ ಚಿತ್ರಹಿಂಸೆ ನೀಡಿ, ಕೌಟುಂಬಿಕ ಕಿರುಕುಳ ನೀಡಿ ಕೊಲೆ ಮಾಡಿದ್ದ ಎಂದು ಅಮಿತಾ ತಾಯಿ ತುಂಗಾನಗರ ಠಾಣೆಗೆ ದೂರು ನೀಡಿದ್ದರು.
ತುಂಗಾನಗರ ಠಾಣೆ ಇನ್‌ಸ್ಪೆಕ್ಟರ್ ಪ್ರಕರಣದ ಆಗಿನ ತನಿಖಾಧಿಕಾರಿ ಬಿ.ಮಂಜುನಾಥ್, ಶಿವಮೊಗ್ಗ ಉಪವಿಭಾಗದ ಡಿವೈಎಸ್‌ಪಿ ಬಾಲರಾಜ್ ಅವರು ಪ್ರಕರಣದ ತನಿಖೆ ಪೂರೈಸಿ ಕರುಣಾಕರ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಈ ಬಗ್ಗೆ ವಿಚಾರಣೆ ನಡೆಸಿದ ನ್ಯಾಯಾಧೀಶೆ ಬಿ.ಆರ್.ಪಲ್ಲವಿ ಅವರು ಆರೋಪ ಸಾಬೀತಾಗಿದ್ದರಿಂದ ಕರುಣಾಕರನಿಗೆ ಜೀವಾವಧಿ ಶಿಕ್ಷೆ ಮತ್ತು ದಂಡ ವಿಧಿಸಿದ್ದಾರೆ. ಸರ್ಕಾರಿ ಅಭಿಯೋಜಕಿ ಪಿ.ಓ.ಪುಷ್ಪಾ ಅವರು ಸರ್ಕಾರದ ಪರವಾಗಿ ವಾದ ಮಂಡಿಸಿದ್ದರು.