ಹೂವಿನಹಡಗಲಿ: ದೇಶಕ್ಕೆ ಉತ್ತಮ ಪ್ರಜೆಗಳನ್ನು ರೂಪಿಸುವವರು ಗುರುಗಳು. ಶಿಕ್ಷಕ ವೃತ್ತಿಯಲ್ಲಿರುವ ಪ್ರತಿಯೊಬ್ಬರೂ ಉತ್ತಮ ಸಮಾಜ ಕಟ್ಟುವ ಕೆಲಸ ಮಾಡುತ್ತಿದ್ದಾರೆ ಎಂದು ಶಾಸಕ ಕೃಷ್ಣನಾಯ್ಕ ಹೇಳಿದರು.
ಪಟ್ಟಣದ ಪಂಚಮಸಾಲಿ ಸಮುದಾಯ ಭವನದಲ್ಲಿ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ವೈಯಕ್ತಿಕ ಕೆಲಸ ಬಿಟ್ಟು ಮಕ್ಕಳ ಭವಿಷ್ಯಕ್ಕಾಗಿ ಶಿಕ್ಷಕರು ಶ್ರಮಿಸುತ್ತಿದ್ದಾರೆ. ಜೀವನ ಮೌಲ್ಯ ಕಲಿಸುವ ಮೂಲಕ ಉತ್ತಮ ನಾಯಕರನ್ನಾಗಿಸಿದ್ದಾರೆ. ಕ್ಷೇತ್ರದಲ್ಲಿ ಅಭಿವೃದ್ಧಿ ಕೆಲಸಗಳಿಗೆ ಸರ್ಕಾರ ಅನುದಾನ ನೀಡುತ್ತಿಲ್ಲ.
ಬೇರೆ ಹಣದಲ್ಲಿ ಗುರುಭವನ ನಿರ್ಮಾಣ ಮಾಡಲು ಯೋಜನೆ ರೂಪಿಸಲಾಗಿದೆ. ಶಿಕ್ಷಕರಿಲ್ಲದೆ ಯಾವುದೇ ಕ್ಷೇತ್ರ ಅಭಿವೃದ್ದಿ ಹೊಂದಲು ಸಾಧ್ಯವಿಲ್ಲ. ತಾಲೂಕಿನ ಸರ್ಕಾರಿ ಶಾಲೆಗಳಲ್ಲಿ ಆಧುನಿಕ ಸೌಲಭ್ಯಗಳನ್ನು ಕಲ್ಪಿಸಲು ಯೋಜನೆ ರೂಪಿಸಲಾಗಿದೆ ಎಂದರು.
ತಾಪಂ ಇಒ ಉಮೇಶ್ ಮೈನಹಳ್ಳಿ ಮಾತನಾಡಿ, ಮಕ್ಕಳ ಉತ್ತಮ ಭವಿಷ್ಯ ನಿರ್ಮಾಣ ಮಾಡುವುದರಲ್ಲಿ ಶಿಕ್ಷಕರು ಶ್ರಮಿಸುತ್ತಿದ್ದಾರೆ ಎಂದರು.
ಇತ್ತೀಚೆಗೆ ಸೇವೆಯಿಂದ ನಿವೃತ್ತರಾದ ಶಿಕ್ಷಕರನ್ನು ಸನ್ಮಾನಿಸಲಾಯಿತು. ಮಾಜಿ ಶಾಸಕ ನಂದಿಹಳ್ಳಿ ಹಾಲಪ್ಪ, ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಆನಂದ, ಕ್ಷೇತ್ರ ಸಮನ್ವಯಾಧಿಕಾರಿ ಎ.ಕೋಟೆಪ್ಪ, ತಾಲೂಕು ದೈಹಿಕ ಶಿಕ್ಷಣ ಅಧೀಕ್ಷಕ ರಫಿ ಕೆ, ಕಸಾಪ ತಾಲೂಕು ಅಧ್ಯಕ್ಷ ವೀರೇದ್ರ ಪಾಟೀಲ್ ಇತರರಿದ್ದರು.