ಮದ್ದೂರು: ಸರ್ಕಾರ ಆರನೇ ಗ್ಯಾರಂಟಿಯನ್ನು ಘೋಷಣೆ ಮಾಡುತ್ತದೆ ಎಂದು ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಇತ್ತೀಚೆಗೆ ಹೇಳಿಕೆ ನೀಡಿರುವುದು ನನಗೆ ಗೊತ್ತಿಲ್ಲ ಎಂದು ಕೃಷಿ ಸಚಿವ ಎನ್.ಚಲಯವರಾಯಸ್ವಾಮಿ ಹೇಳಿದರು.
ಕೌಡ್ಲೆ ಗ್ರಾಮದಲ್ಲಿ ಮಂಗಳವಾರ ಜನಸಂಪರ್ಕ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಸಂಪುಟದಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ಅವರೂ ಇದ್ದು ಅವರ ಹೇಳಿಕೆ ಬಗ್ಗೆ ಅವರಿಗೆ ಗೊತ್ತಿರಬೇಕು ಎಂದು ಚುಟುಕಾಗಿ ಉತ್ತರಿಸಿದರು.
ಇತ್ತೀಚೆಗೆ ನಡೆದ ರಾಜ್ಯಸಭಾ ಚುನಾವಣಾ ಸಂದರ್ಭದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಎಂಬ ಘೋಷಣೆ ಕೂಗಿರುವ ಕುರಿತು ಕೇಳಲಾದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಈ ವಿಷಯದಲ್ಲಿ ಆರೋಪಿಗಳಿಗೆ ತಕ್ಕ ಕಾನೂನು ಕ್ರಮವಾಗುತ್ತದೆ. ಯಾರೇ ಆಗಲಿ ಇಂತಹ ದೇಶದ್ರೋಹಿ ಘೋಷಣೆಗಳನ್ನು ಕೂಗಿರುವುದು ಸರಿಯಲ್ಲ ಎಂದರು.
ರಾಮೇಶ್ವರಂ ಕೆಫೆಯಲ್ಲಿ ನಡೆದ ಬಾಂಬ್ ಸ್ಫೋಟದ ಆರೋಪಿ ಪತ್ತೆಗೆ ಶೋಧ ನಡೆಸಲಾಗುತ್ತಿದೆ. ಕೂಡಲೇ ಆರೋಪಿಯನ್ನು ಬಂಧಿಸಲಾಗುವುದು ಎಂದು ಎಂದು ಹೇಳಿದರು.
ಬೇಸಿಗೆ ತಾಪ ದಿನೇ ದಿನೆ ಹೆಚ್ಚಾಗುತ್ತಿದ್ದು, ಬೆಳೆಗಳಿಗೆ ನೀರು ಹರಿಸುವ ಸಂಬಂಧ ಮತ್ತೊಮ್ಮೆ ಅಧಿಕಾರಿಗಳೊಂದಿಗೆ ಚರ್ಚಿಸಿ ನೀರು ಬಿಡಲು ಪ್ರಯತ್ನ ಮಾಡಲಾಗುವುದು ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.