ಉಡುಪಿ: ಜಿಲ್ಲಾಸ್ಪತ್ರೆ ಮೇಲ್ದರ್ಜೆಗೇರಿಸುವ 150 ಕೋಟಿ ರೂ. ಅಂದಾಜು ವೆಚ್ಚದ ಪ್ರಸ್ತಾವನೆಗೆ ಸಂಪುಟದಲ್ಲಿ ಅನುಮೋದನೆ ಲಭಿಸಿದ್ದು, 250 ಬೆಡ್‌ಗಳ ಸುಸಜ್ಜಿತ ಕಟ್ಟಡದ ನೀಲಿ ನಕ್ಷೆ ತಯಾರಿಸಲಾಗುತ್ತಿದೆ. ಟೆಂಡರ್ ಪ್ರಕ್ರಿಯೆ ನಂತರ 20 ತಿಂಗಳಲ್ಲಿ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.
ಗುರುವಾರ ನಗರದ ಅಜ್ಜರಕಾಡು ಜಿಲ್ಲಾಸ್ಪತ್ರೆ ಆವರಣದಲ್ಲಿ ನೂತನ ಕಟ್ಟಡ ನಿರ್ಮಾಣ ಸ್ಥಳ ಪರಿಶೀಲನೆ ನಡೆಸಿ, ಅವರು ಮಾತನಾಡಿದರು.
ನೂತನ ಆಸ್ಪತ್ರೆ ಯೋಜನೆಯಲ್ಲಿ ಹಳೆಯ ಆಸ್ಪತ್ರೆಯ ಕಟ್ಟಡ ಹಾಗೂ ಎ.ಎನ್.ಎಂ. ತರಬೇತಿ ಸಂಸ್ಥೆ ಕಟ್ಟಡ ಉಳಿಸಿಕೊಂಡು ಉಳಿದಿರುವ ಜಾಗವನ್ನು ಬಳಸಿಕೊಂಡು ಹೊಸ ಆಸ್ಪತ್ರೆ ಕಟ್ಟಡ ನಿರ್ಮಿಸಲು ಸಾಧ್ಯವೇ ಎಂಬುದನ್ನು ಪರಿಶೀಲಿಸಲು ಅಧಿಕಾರಿಗಳಿಗೆ ಸಚಿವರು ಸೂಚಿಸಿದರು.
ಲಿಕ್ವಿಡ್ ಆಕ್ಸಿಜನ್ ಪ್ಲಾಂಟ್ ಉದ್ಘಾಟನೆ: ಅಜ್ಜರಕಾಡು ಜಿಲ್ಲಾಸ್ಪತ್ರೆ ಆವರಣದಲ್ಲಿ ಸ್ಥಾಪಿಸಲಾಗಿರುವ ದ್ರವರೂಪದ ಆಮ್ಲಜನಕದ ಸ್ಥಾವರ (ಲಿಕ್ವಿಡ್ ಆಕ್ಸಿಜನ್ ಪ್ಲಾಂಟ್)ವನ್ನು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ಗುರುವಾರ ಉದ್ಘಾಟಿಸಿದರು.
ಶಾಸಕರಾದ ರಘುಪತಿ ಭಟ್, ಲಾಲಾಜಿ ಆರ್. ಮೆಂಡನ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಜಿ.ಪಂ. ಅಧ್ಯಕ್ಷ ದಿನಕರ ಬಾಬು, ಉಡಾ ಅಧ್ಯಕ್ಷ ರಾಘವೇಂದ್ರ ಕಿಣಿ, ನಗರಸಭೆ ಅಧ್ಯಕ್ಷೆ ಸುಮಿತ್ರಾ ನಾಯಕ್, ನಗರಸಭಾ ಸದಸ್ಯೆ ರಶ್ಮಿ ಚಿತ್ತರಂಜನ್ ಭಟ್, ಜಿಲ್ಲಾಧಿಕಾರಿ ಜಿ. ಜಗದೀಶ, ಜಿ.ಪಂ. ಸಿಇಒ ಡಾ. ನವೀನ್ ಭಟ್ ವೈ., ಡಿಎಚ್‌ಒ ಡಾ. ಸುಧೀರ್‌ಚಂದ್ರ ಸೂಡ, ಜಿಲ್ಲಾ ಸರ್ಜನ್ ಡಾ.ಮಧುಸೂದನ್ ನಾಯಕ್, ಡಾ. ಪ್ರಶಾಂತ್ ಭಟ್ ಮೊದಲಾದವರು ಉಪಸ್ಥಿತರಿದ್ದರು.