ಹೂವಿನಹಡಗಲಿ: ಪಠ್ಯಕ್ರಮ ಮುಗಿದ ನಂತರ ಫಲಿತಾಂಶ ಸುಧಾರಣೆಗೆ ವಿಷಯ ಶಿಕ್ಷಕರು ವಿದ್ಯಾರ್ಥಿಗಳಿಗೆ ಪುನರಾವರ್ತನೆ ಮಾಡಬೇಕು ಎಂದು ಬಿಇಒ ಮಹೇಶ ಪೂಜಾರ ಹೇಳಿದರು.
ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆ ನಿಮಿತ್ತ ಪಟ್ಟಣದ ಜಿಪಿಜಿ ಸರ್ಕಾರಿ ಪ್ರೌಢಶಾಲೆಯಲ್ಲಿ ಶಾಲಾ ಶಿಕ್ಷಣ ಇಲಾಖೆ ಹಾಗೂ ಕನ್ನಡ ಮತ್ತು ಗಣಿತ ವಿಷಯ ಶಿಕ್ಷಕರ ವೇದಿಕೆಯಿಂದ ಶಿಕ್ಷಕರಿಗೆ ಆಯೋಜಿಸಿದ್ದ ಕಾರ್ಯಾಗಾರ ಉದ್ಘಾಟಿಸಿ ಮಂಗಳವಾರ ಮಾತನಾಡಿದರು.
ಈ ವರ್ಷ ನಡೆಯಲಿರುವ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಹೆಚ್ಚಿನ ಅಂಕಗಳಿಸುವಂತೆ ಶಿಕ್ಷಕರು ಪ್ರೇರೇಪಿಸಬೇಕು. ಪ್ರಸಕ್ತ ಶೈಕ್ಷಣಿಕ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ವಿದ್ಯಾರ್ಥಿಗಳನ್ನು ಸಿದ್ಧಗೊಳಿಸಲು ವಿಷಯ ಶಿಕ್ಷಕರ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ. 2023-24 ನೇ ಸಾಲಿನಲ್ಲಿ ಎಸ್ಸೆಸ್ಸೆಲ್ಸಿ ಮಕ್ಕಳಿಗೆ ಇಲಾಖೆಯಿಂದ ಮೂರು ಪರೀಕ್ಷೆ ನಡೆಸಲಾಗುತ್ತದೆ. ಕಲಿಕೆಯಲ್ಲಿ ಹಿಂದುಳಿದಿರುವ ವಿದ್ಯಾರ್ಥಿಗಳು ಪಾಸಾಗಲು ಕನಿಷ್ಠ ಅಂಕ ತೆಗೆಯುವ ಹಾಗೆ ಸೂಕ್ತ ಮಾರ್ಗದರ್ಶನ ನೀಡಬೇಕು ಎಂದು ಸಲಹೆ ನೀಡಿದರು.
ಕ್ಷೇತ್ರ ಸಮನ್ವಯಾಧಿಕಾರಿ ಎ.ಕೋಟೆಪ್ಪ ಮಾತನಾಡಿ, ಎಸ್ಸೆಸ್ಸೆಲ್ಸಿ ಮಕ್ಕಳು ಶಾಲೆಗೆ ಗೈರಾಗದಂತೆ ಮುಖ್ಯಶಿಕ್ಷಕರು ಮತ್ತು ತರಗತಿ ಶಿಕ್ಷಕರು ಕ್ರಮ ಕೈಗೊಳ್ಳಬೇಕು ಎಂದರು. ಸಂಪನ್ಮೂಲ ವ್ಯಕ್ತಿ ಸಿರಗುಪ್ಪದ ಆರ್.ರವಿ, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ವಿ.ಹನುಮಂತಪ್ಪ, ತಾಲೂಕು ಪ್ರೌಢಶಾಲಾ ಮುಖ್ಯಶಿಕ್ಷಕರ ಸಂಘದ ಅಧ್ಯಕ್ಷ ಪಿ.ಪ್ರಕಾಶ್, ಎಸ್ಸೆಸ್ಸೆಲ್ಸಿ ನೋಡಲ್ ಅಧಿಕಾರಿ ಎಚ್.ಮಲ್ಲಿಕಾರ್ಜುನ ಇತರರಿದ್ದರು.