ಬೆಳಗಾವಿ: ಬೆಳಗಾವಿ ನಗರದ ಬಿಮ್ಸ್ ಆವರಣದಲ್ಲಿ ನಿರ್ಮಾಣಗೊಂಡಿರುವ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಸಿಬ್ಬಂದಿ ನೇಮಕಾತಿ, ಸಲಕರಣೆಗಳ ಖರೀದಿ ಪ್ರಕ್ರಿಯೆ ಅಂತಿಮ ಹಂತದಲ್ಲಿದ್ದು, ಎರಡು ತಿಂಗಳಲ್ಲಿ ಆಸ್ಪತ್ರೆ ಉದ್ಘಾಟನೆಗೊಳ್ಳಲಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ ಪಾಟೀಲ ತಿಳಿಸಿದರು.
ನಗರದ ಬಿಮ್ಸ್ ಆಸ್ಪತ್ರೆಗೆ ಶುಕ್ರವಾರ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಬಿಮ್ಸ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಕಟ್ಟಡ ಪೂರ್ಣಗೊಂಡಿದ್ದು, ವಿವಿಧ ತಜ್ಞ ವೈದ್ಯರು, ನರ್ಸಿಂಗ್ ಸ್ಟಾಪ್, ಡಿ ದರ್ಜೆ ಸಿಬ್ಬಂದಿ ಸೇರಿ ವಿವಿಧ ವಿಭಾಗಗಳ ಸಿಬ್ಬಂದಿ ನೇಮಕಾತಿ ಪ್ರಕ್ರಿಯೆ ಆರಂಭಗೊಳಿಸಲಾಗಿದೆ. ಅಲ್ಲದೆ, ವೈದ್ಯಕೀಯ ಸಲಕರಣೆಗಳ ಖರೀದಿಗೆ ಟೆಂಡರ್ ಕರೆಯಲಾಗಿದೆ. ಎರಡು ತಿಂಗಳಲ್ಲಿ ಸಾರ್ವಜನಿಕರ ಸೇವೆಗೆ ಆಸ್ಪತ್ರೆ ಮುಕ್ತವಾಗಲಿದೆ ಎಂದು ಹೇಳಿದರು.
ಬಿಮ್ಸ್ ಸಮಸ್ಯೆ ಬಗ್ಗೆ ಮುನ್ನೆಚ್ಚರಿಕೆ ಇರಲಿ: ರಾಜ್ಯದ ಬೇರೆ ಜಿಲ್ಲೆಗಳಿಗೆ ಹೋಲಿಕೆ ಮಾಡಿದರೆ ಬೆಳಗಾವಿ ದೊಡ್ಡ ಜಿಲ್ಲೆಯಾಗಿದ್ದು, ತಾಲೂಕು ಮಟ್ಟದ ಆಸ್ಪತ್ರೆಗಳಲ್ಲಿ ಹೆರಿಗೆ ಹೆಚ್ಚಿನ ಸಂಖ್ಯೆಯಲ್ಲಿ ಆಗುತ್ತಿವೆ. ಜತೆಗೆ ಜಿಲ್ಲಾಸ್ಪತ್ರೆಯಲ್ಲಿ ಹೆರಿಗೆ ಸಂಖ್ಯೆ ಪ್ರಮಾಣ ಹೆಚ್ಚಿದೆ. ವೈದ್ಯರು, ಸಿಬ್ಬಂದಿ ನಿರಂತರವಾಗಿ ಕೆಲಸ ಮಾಡುತ್ತಿದ್ದಾರೆ. ಹಾಗಾಗಿ ಆಸ್ಪತ್ರೆಯಲ್ಲಿ ಕುಂದು ಕೊರತೆ ಉಂಟಾಗದಂತೆ ಮುನ್ನೆಚ್ಚರಿಕೆ ಕ್ರಮವಹಿಸುವಂತೆ ಬಿಮ್ಸ್ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾತನಾಡಿ, ಬಾಣಂತಿಯರು ಹಾಗೂ ಹಸುಗೂಸುಗಳ ಬಗ್ಗೆ ಹೆಚ್ಚಿನ ನಿಗಾವಹಿಸಿ, ಬಿಮ್ಸ್ ಗೆ ಉತ್ತಮ ಹೆಸರು ತರಲು ಎಲ್ಲರೂ ಪ್ರಯತ್ನಿಸಬೇಕು. ಗರ್ಭಿಣಿ, ಬಾಣಂತಿ ಹಾಗೂ ಶಿಶುಗಳ ಆರೋಗ್ಯದಲ್ಲಿ ಏರುಪೇರು ಆಗದಂತೆ ಮುನ್ನೆಚ್ಚರಿಕೆ ವಹಿಸಬೇಕು.
ಬಿಮ್ಸ್‌ನಲ್ಲಿ ಸಮಸ್ಯೆ ಕಂಡು ಬಂದಲ್ಲಿ ಕೂಡಲೇ ಸರ್ಕಾರದ ಗಮನಕ್ಕೆ ತರುವ ಕೆಲಸ ಮಾಡಬೇಕು ಎಂದು ಸೂಚಿಸಿದರು.
ವೈದ್ಯಕೀಯ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮೊಹಮ್ಮದ್ ಮೊಸಿನ್, ಬಿಮ್ಸ್ ನಿರ್ದೇಶಕ ಡಾ.ಅಶೋಕ ಶೆಟ್ಟಿ, ಅಧೀಕ್ಷಕರಾದ ಡಾ.ವೀರಣ್ಣ ಪಲ್ಲೆದ, ಮುಖ್ಯ ಆಡಳಿತಾಧಿಕಾರಿ ಸಿದ್ದು ಹುಲ್ಲೋಳ್ಳಿ, ಜಿಲ್ಲಾ ಸರ್ಜನ ಡಾ.ವಿಠ್ಠಲ ಶಿಂಧೆ, ಶಿಲ್ಪಾ ವಾಲಿ, ಡಾ.ಸರೋಜ ತಿಗಡಿ, ಡಾ.ಉಮೇಶ ಕುಲಕರ್ಣಿ ಇತರರಿದ್ದರು.
ನಾಲ್ಕು ವರ್ಷಗಳ ಹಿಂದೆ 188 ಕೋಟಿ ರೂ. ವೆಚ್ಚದಲ್ಲಿ ಬಿಮ್ಸ್ ಆವರಣದಲ್ಲಿ ನಿರ್ಮಾಣಗೊಂಡ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಉದ್ಘಾಟನೆಗೊಳ್ಳದೆ ಇರುವ ಬಗ್ಗೆ ವಿಜಯವಾಣಿಯಲ್ಲಿ ನ.29ರಂದು ‘ಜನರಿಗೆ ಸೂಪರ್ ಸೇವೆ ಯಾವಾಗ? ಎಂಬ ಶೀರ್ಷಿಕೆಯಡಿಯಲ್ಲಿ ವರದಿ ಪ್ರಕಟಿಸಿ ಸರ್ಕಾರದ ಗಮನ ಸೆಳೆದಿತ್ತು. ಇದ್ದರಿಂದ ಎಚ್ಚೆತ್ತುಕೊಂಡ ಸರ್ಕಾರ ಇದೀಗ ಎರಡು ತಿಂಗಳಿನಲ್ಲಿ ಆಸ್ಪತ್ರೆ ಉದ್ಘಾಟನೆ ಮಾಡಲು ಮುಂದಾಗಿದೆ. ಈಗಾಗಲೇ ಸೂಕ್ತ ಸಿಬ್ಬಂದಿಗಳ ಭರ್ತಿ ಪ್ರಕ್ರಿಯೆ ಯನ್ನೂ ಆರಂಭಿಸಿದೆ.