ಜಿಲ್ಲೆ

ಸಿದ್ದರಾಮಯ್ಯ ಮುಂದಿನ ಚುನಾವಣೆಯಲ್ಲಿ ಎಲ್ಲಿಂದ ಸ್ಪರ್ಧಿಸುತ್ತಾರೆ?; ಗುಟ್ಟು ಬಿಟ್ಟುಕೊಟ್ಟರಾ ಅವರ ಆಪ್ತ?

ಜಗನ್ನಾಥ್ ಕಾಳೇನಹಳ್ಳಿ

ತುಮಕೂರು (ಹುಳಿಯಾರು): ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಚಿಕ್ಕನಾಯಕನಹಳ್ಳಿ ಕ್ಷೇತ್ರದಿಂದ ವಿಪಕ್ಷ ನಾಯಕ ಸಿದ್ದರಾಮಯ್ಯ ಸ್ಪರ್ಧಿಸಲಿದ್ದಾರೆ ಎಂದು ಡಿಸಿಸಿ ಬ್ಯಾಂಕ್ ಅಧ್ಯಕ್ಷ ಕೆ.ಎನ್. ರಾಜಣ್ಣ ಸುಳಿವು ನೀಡಿದರು.

ಚಿಕ್ಕನಾಯಕನಹಳ್ಳಿ ತಾಲೂಕು ಹುಳಿಯಾರು ಪಟ್ಟಣ ಪಂಚಾಯತ್ ಚುನಾವಣೆ ಅಂಗವಾಗಿ ಪಟ್ಟಣದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪರವಾಗಿ ಪ್ರಚಾರ ನಡೆಸಿದ ನಂತರ ಇಂದು ಸುದ್ದಿಗಾರರ ಜತೆ ಮಾತನಾಡಿ ನೀಡಿದ ಹೇಳಿಕೆ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಮುಂದಿನ ಚುನಾವಣೆಯಲ್ಲಿ ಸಿದ್ದರಾಮಯ್ಯ ಕ್ಷೇತ್ರ ಬದಲಾವಣೆ ಬಗ್ಗೆ ಊಹಾಪೋಹ ಹರಿದಾಡುತ್ತಿರುವ ಸಂದರ್ಭದಲ್ಲಿ ಅವರ ಆಪ್ತ ವಲಯದಲ್ಲಿರುವ ರಾಜಣ್ಣ ನೀಡಿರುವ ಹೇಳಿಕೆ ಮಹತ್ವ ಪಡೆದಿದೆ.

ಮುಂಬರುವ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಚುನಾವಣೆಗೆ ಹುಳಿಯಾರು ಪಟ್ಟಣ ಪಂಚಾಯತ್​ ಚುನಾವಣೆ ದಿಕ್ಸೂಚಿಯಾಗಲಿದ್ದು ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವಿಗೆ ಎಲ್ಲರೂ ಹೋರಾಡಬೇಕು. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ದುರಾಡಳಿತದಿಂದ ಜನಸಾಮಾನ್ಯರ ದಿನಬಳಕೆ ವಸ್ತುಗಳು, ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆಯಾಗಿವೆ, ಬಿಜೆಪಿಗೆ ಪಾಠ ಕಲಿಸಲು ಈ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಬೇಕು ಎಂದು ಅವರು ಹೇಳಿದರು.