ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಬಾಲ್ಯ ವಿವಾಹ, ಪೋಕ್ಸೋ ಮತ್ತು ಮಾನವ ಕಳ್ಳ ಸಾಗಾಣಿಕೆ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆ ಕಂಡು ಬಂದಿದ್ದು ಇವುಗಳೆಲ್ಲವನ್ನೂ ಪರಿಣಾಮಕಾರಿಯಾಗಿ ತಡೆಗಟ್ಟುವ ನಿಟ್ಟಿನಲ್ಲಿ ಸಂಬಂಧಪಟ್ಟ ಕಾವಲು ಪಡೆ ಸಮಿತಿಗಳನ್ನು ಬಲಪಡಿಸುವ ಅಗತ್ಯವಿದೆ ಎಂದು ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ತಿಳಿಸಿದ್ದಾರೆ.
ಚಿಕ್ಕಬಳ್ಳಾಪುರ ನಗರದ ಕನ್ನಡ ಭವನದಲ್ಲಿ ಜಿಲ್ಲಾಡಳಿತ, ಜಿ.ಪಂ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ, ಪೊಲೀಸ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಮತ್ತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಗುರುವಾರ ಕೈಗೊಂಡಿದ್ದ ಮಾನವ ಕಳ್ಳ ಸಾಗಾಣಿಕೆ ತಡೆ ದಿನಾಚರಣೆ ಹಾಗೂ ಬಾಲ್ಯ ವಿವಾಹ ನಿಷೇಧ ಕಾಯ್ದೆ, ಪೋಕ್ಸೋ ಕಾಯ್ದೆ ಮತ್ತು ಮಕ್ಕಳ ರಕ್ಷಣೆಯ ಕುರಿತು ಜಿಲ್ಲಾ ಮಟ್ಟದ ಒಂದು ದಿನದ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.
ಈಗಲೂ ಗ್ರಾಮೀಣ ಭಾಗದಲ್ಲಿ ನಾನಾ ಕಾರಣಗಳ ಹಿನ್ನೆಲೆಯಲ್ಲಿ ಬಾಲ್ಯ ವಿವಾಹ ಮತ್ತು ಪೋಕ್ಸೋ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ ಎಂದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷೆ ನೇರಳೆ ವೀರಭದ್ರಯ್ಯ ಭವಾನಿ ಮಾತನಾಡಿ, ದೇಶದಲ್ಲಿ ಮಹಿಳೆಯರು ಮತ್ತು ಮಕ್ಕಳ ರಕ್ಷಣೆಗಾಗಿ ಹಲವಾರು ಕಾನೂನುಗಳಿವೆ. ಆದರೂ ನಿರಂತರವಾಗಿ ದೌರ್ಜನ್ಯ, ಕಿರುಕುಳ, ಹಕ್ಕುಗಳ ಉಲ್ಲಂಘನೆ ಪ್ರಕರಣಗಳು ನಡೆಯುತ್ತಲೇ ಇವೆ ಎಂದರು.
ಬಾಲ್ಯ ವಿವಾಹ ಮಾಡಿಸುವುದು ಅಪರಾಧ. ಇದರಲ್ಲಿ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಭಾಗಿಯಾದವರು ತಪ್ಪಿತಸ್ಥರಾಗಿರುತ್ತಾರೆ ಎಂದರು.
ಈ ಸಂದರ್ಭದಲ್ಲಿ ಜಿ.ಪಂ.ಸಿಇಒ ಡಾ ವೈ.ನವೀನ್ ಭಟ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಶಾಲ್ ಚೌಕ್ಸೆ, ಅಪರ ಜಿಲ್ಲಾಧಿಕಾರಿ ಡಾ. ಎನ್. ಭಾಸ್ಕರ್, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಕೆ.ವಿ.ಅಭಿಲಾಷ್, ಅಪರ ಪೊಲೀಸ್ ಅಧೀಕ್ಷಕ ಜಗನ್ನಾಥ್ ರೈ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಆರ್.ವೆಂಕಟೇಶರೆಡ್ಡಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಮಹೇಶ್ ಕುಮಾರ್, ಮಕ್ಕಳ ರಕ್ಷಣಾಧಿಕಾರಿ ಬಿ. ನೌತಾಜ್ ಮತ್ತಿತರರು ಇದ್ದರು.
*ಕಾವಲು ಸಮಿತಿ ನಿಗಾ
ಬಾಲ್ಯ ವಿವಾಹ ಪ್ರಕರಣಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಸರ್ಕಾರವು 2018 ರಲ್ಲಿ ಕಾವಲು ಸಮಿತಿಗಳನ್ನು ರಚಿಸಿದೆ. ಇವು ಜಿಲ್ಲೆಯಲ್ಲಿ ಮತ್ತಷ್ಟು ನಿಗಾ ವಹಿಸಿ ಕಾರ್ಯ ನಿರ್ವಹಿಸಲು ಸೂಚಿಸಲಾಯಿತು.
ಇದೇ ವೇಳೆ ಬಾಲ್ಯ ವಿವಾಹ ನಡೆಯುವ ಬಗ್ಗೆ ಮಾಹಿತಿ ಗಮನಕ್ಕೆ ಬಂದ ಕೂಡಲೇ ಉಚಿತ ಸಹಾಯವಾಣಿ ಸಂಖ್ಯೆ 1908 ಗೆ ಕರೆ ಮಾಡಿ ಮಾಹಿತಿ ನೀಡಲು ಜಿಲ್ಲಾಡಳಿತ ಮನವಿ ಮಾಡಿತು.
*ಧ್ವನಿ ಸುರುಳಿ ಬಿಡುಗಡೆ
ಕಾರ್ಯಕ್ರಮದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಬಿ. ಶಿಲ್ಪಾ ಬಾಲ್ಯ ವಿವಾಹ ನಿಯಂತ್ರಣ ಕುರಿತು ಜಾಗೃತಿ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು. ಇದೇ ವೇಳೆ ನಿರ್ಗತಿಕರು, ಅನಾಥ ಮಕ್ಕಳಿಗೆ ಆಧಾರ್ ಕಾರ್ಡ್ ಹಾಗೂ ಜನನ ಪ್ರಮಾಣ ಪತ್ರ ವಿತರಿಸಲಾಯಿತು. ಬಾಲ್ಯ ವಿವಾಹ ನಿಯಂತ್ರಣದ ಕುರಿತು ಜಾಗೃತಿ ಗೀತೆಗಳನ್ನು ರಚಿಸಿ ವ್ಯಾಪಕವಾಗಿ ಗಾಯನದ ಮೂಲಕ ಅರಿವು ಮೂಡಿಸುತ್ತಿರುವ ರಾಜ್ಯ ಪ್ರಶಸ್ತಿ ಪುರಸ್ಕೃತ ಗ.ನ.ಅಶ್ವತ್ ರನ್ನ ಸನ್ಮಾನಿಸಲಾಯಿತು. ಬಾಲ್ಯ ವಿವಾಹ ನಿಯಂತ್ರಣದ ಜಾಗೃತಿ ಕುರಿತ ಕರಪತ್ರಗಳು, ಭಿತ್ತಿ ಪತ್ರಗಳು ಹಾಗೂ ಗ.ನ.ಅಶ್ವತ್ ಗಾಯನದ ಧ್ವನಿ ಸುರಳಿಯನ್ನು ಗಣ್ಯರು ಬಿಡುಗಡೆಗೊಳಿಸಿದರು.