ವಿಜಯಪುರ ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಡಾ.ಆನಂದ ಕೆ. ಪ್ರಧಾನಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮಗಳ ಪರಿಶೀಲನಾ ಸಮಿತಿಯ ಪ್ರಥಮ ತ್ರೈಮಾಸಿಕ ಸಭೆ ನಡೆಸಿದರು. ಜಿಪಂ ಉಪ ಕಾರ್ಯದರ್ಶಿ ವಿಜಯಕುಮಾರ ಆಜೂರ, ಮುಖ್ಯ ಯೋಜನಾಧಿಕಾರಿ ಸಿ.ಬಿ. ಕುಂಬಾರ, ಕೃಷಿ ಜಂಟಿ ನಿರ್ದೇಶಕ ಶಿವನಗೌಡ ಮತ್ತಿತರರಿದ್ದಾರೆ.  
ಜಿಲ್ಲೆ

ಅಲ್ಪಸಂಖ್ಯಾತ ಮಕ್ಕಳ ಶಾಲಾ ದಾಖಲಾತಿ ಪ್ರಮಾಣ ಹೆಚ್ಚಿಸಿ; ಜಿಲ್ಲಾಧಿಕಾರಿ ಡಾ.ಆನಂದ ಕೆ.ಸೂಚನೆ

ವಿಜಯಪುರ: ಪ್ರಧಾನಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮವನ್ನು ಜಿಲ್ಲೆಯಲ್ಲಿ ಸಮರ್ಪಕವಾಗಿ ಅನುಷ್ಟಾನಗೊಳಿಸಿ ವಿವಿಧ ಇಲಾಖೆಯಡಿ ಒದಗಿಸುವ ಯೋಜನೆಗಳ ಲಾಭವನ್ನು ಅರ್ಹ ಅಲ್ಪಸಂಖ್ಯಾತ ಫಲಾನುಭವಿಗಳಿಗೆ ಒದಗಿಸಲು ಕ್ರಮ ವಹಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ ಕೆ. ಸೂಚನೆ ನೀಡಿದರು.

ನಗರದ ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಶನಿವಾರ ನಡೆದ ಪ್ರಧಾನಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮಗಳ ಪರಿಶೀಲನಾ ಸಮಿತಿಯ ಪ್ರಥಮ ತ್ರೈಮಾಸಿಕ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಪ್ರಧಾನಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮದಡಿ ಅಲ್ಪಸಂಖ್ಯಾತ ಮಕ್ಕಳ ಶಿಕ್ಷಣಕ್ಕೆ ಒತ್ತು ನೀಡಬೇಕು. ಗುಣಮಟ್ಟದ ಶಿಕ್ಷಣ ದೊರೆಯುವಂತೆ ನೋಡಿಕೊಳ್ಳಬೇಕು. ಅಲ್ಪಸಂಖ್ಯಾತ ಮಕ್ಕಳ ಶೈಕ್ಷಣಿಕ ದಾಖಲಾತಿ ಹೆಚ್ಚಿಸಲು ಕ್ರಮ ವಹಿಸಿ, ಮನೆ-ಮನೆಗೆ ಹೋಗಿ ನೋಂದಣಿ ಮಾಡುವ ಮೂಲಕ ಮಕ್ಕಳು ಶಾಲೆಯಿಂದ ಹೊರಗುಳಿಯದಂತೆ ನೋಡಿಕೊಳ್ಳಬೇಕು ಎಂದರು.

ಮಕ್ಕಳ ಸಮಗ್ರ ಅಭಿವೃದ್ಧಿ ಯೋಜನೆಯಡಿ ಅಲ್ಪಸಂಖ್ಯಾತರು ಹೆಚ್ಚಿನ ಸಂಖ್ಯೆಯಲ್ಲಿ ವಾಸಿಸುವ ಪ್ರದೇಶದಲ್ಲಿ ಕಾರ್ಯನಿರ್ವಹಿಸುತ್ತಿರುವ ಅಂಗನವಾಡಿ ಕೇಂದ್ರಗಳಲ್ಲಿ ಅಗತ್ಯ ಮೂಲ ಸೌಲಭ್ಯ ಕಲ್ಪಿಸಬೇಕು. ಕಟ್ಟಡಗಳ ಸ್ಥಿತಿಗತಿ ಕುರಿತು ಪರಿಶೀಲನೆ ನಡೆಸಬೇಕು. ಬಾಡಿಗೆ ಕಟ್ಟಡ ಅವಶ್ಯವಿದ್ದಲ್ಲಿ ಮಾಹಿತಿ ಒದಗಿಸಿ ಅಂಗನವಾಡಿ ಕಟ್ಟಡ ಒದಗಿಸಲು ಕ್ರಮ ವಹಿಸುವಂತೆ ಅವರು ಸೂಚನೆ ನೀಡಿದರು.

ಅಲ್ಪಸಂಖ್ಯಾತರು ವಾಸಿಸುವ ಪ್ರದೇಶಗಳಲ್ಲಿ ಸರ್ವ ಶಿಕ್ಷಣ ಅಭಿಯಾನ ಕಾರ್ಯಕ್ರಮದ ಮೂಲಕ ಶಾಲಾ ಶಿಕ್ಷಣದಲ್ಲಿ ಸುಧಾರಣೆ ತರಲು ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ಉರ್ದು ಶಾಲೆಗಳಲ್ಲಿ ಕೊಠಡಿಗಳು- ಶಿಕ್ಷಕರ ಕೊರತೆ ಸೇರಿದಂತೆ ವಿವಿಧ ಕೊರತೆಗಳನ್ನು ನಿವಾರಿಸಿಕೊಂಡು ಮಕ್ಕಳ ಶಿಕ್ಷಣಕ್ಕೆ ಗಮನ ಹರಿಸಬೇಕು. ಕಲಿಕೆಯಲ್ಲಿ ಹಿಂದುಳಿದ ವರ್ಗಗಳಿಗೆ ಪರಿಹಾರ ಬೋಧನೆ ಮಾಡಬೇಕು. ಫಲಿತಾಂಶದಲ್ಲಿ ಪ್ರತಿಶತ ಹೆಚ್ಚಿಸಲು ಮುಖ್ಯವಾಗಿ ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡಿ, ಎಸ್‌ಎಸ್‌ಎಲ್‌ಸಿ ಫಲಿತಾಂಶ ಸುಧಾರಣೆಗೆ ಪ್ರಾಥಮಿಕ ಹಂತದಲ್ಲಿಯೇ 5ನೇ ತರಗತಿಯಿಂದಲೇ ಶಿಕ್ಷಣಕ್ಕೆ ಒತ್ತು ನೀಡಲು ಕ್ರಮ ವಹಿಸುವಂತೆ ಅವರು ಸೂಚನೆ ನೀಡಿದರು.

ಸರ್ಕಾರ ಹಲವಾರು ಯೋಜನೆಗಳನ್ನು ಶಿಕ್ಷಣಕ್ಕಾಗಿ ಜಾರಿಗೊಳಿಸಿದೆ. ಶಿಕ್ಷಣದ ಗುಣಮಟ್ಟಕ್ಕೆ ಒತ್ತು ನೀಡಲಾಗುತ್ತಿದೆ. ಅಗತ್ಯ ಮೂಲ ಸೌಲಭ್ಯ, ಶಿಕ್ಷಕರ ನಿಯೋಜನೆ ಸೇರಿದಂತೆ ಎಲ್ಲ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲಾಗಿದ್ದರೂ ಸಮುದಾಯದ ಮಕ್ಕಳು ಶಿಕ್ಷಣಕ್ಕೆ ಹಿಂದೇಟು ಹಾಕುತ್ತಿರುವುದೇಕೆೆ ಎಂಬುದನ್ನು ಪತ್ತೆ ಹಚ್ಚಬೇಕು. ಇದರಿಂದ ಪರಿಹಾರ ಕಲ್ಪಿಸಲು ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ಯಾವ ಶಾಲೆಗಳಲ್ಲಿ ದಾಖಲಾತಿ ಪ್ರಮಾಣ ಕಡಿಮೆ ಅಂತಹ ಶಾಲೆಗಳ ದಾಖಲಾತಿ ಕಡಿಮೆಯಾಗಲು ಇರುವ ಮೂಲಕ ಕಾರಣವನ್ನು ಡಿಆರ್‌ಪಿ, ಸಿಆರ್‌ಪಿ ಮೂಲಕ ಕಂಡು ಹಿಡಿಯಬೇಕು. ಮಕ್ಕಳ ಶಿಕ್ಷಣ ಹೆಚ್ಚಿಸುವಲ್ಲಿ ಪಾಲಕರು, ಶಿಕ್ಷಕರು, ಸಮುದಾಯ ಸಹಭಾಗಿತ್ವ ಬಹುಮುಖ್ಯವಾಗಿದೆ. ಈ ನಿಟ್ಟಿನಲ್ಲಿ ಗ್ರಾಮ ಪಂಚಾಯತ್ ಮಟ್ಟದಲ್ಲಿ ಸಭೆ ನಡೆಸಿ, ಅಲ್ಪಸಂಖ್ಯಾತ ಸಮುದಾಯ ಜನ ಇರುವಲ್ಲಿ ತಿಳಿವಳಿಕೆ ನೀಡಿ, ಶಾಲಾ ದಾಖಲಾತಿ ಹೆಚ್ಚಿಸಲು ಕ್ರಮ ವಹಿಸಬೇಕು ಎಂದರು.

ಅನುದಾನಿತ ಶಾಲೆಗಳಲ್ಲಿ ಕಳಪೆ ಫಲಿತಾಂಶ ಬಂದಿದೆ. ಈ ಕುರಿತು ವಿಶೇಷ ತನಿಖಾ ವರದಿ ತಯಾರಿಸಿ ಸಲ್ಲಿಸಬೇಕು. ಸರ್ಕಾರಿ ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷರು ಸೇರಿದಂತೆ ಶಾಲೆಯ ಮುಖ್ಯಾಧ್ಯಾಪಕರಿಗೆ ತರಬೇತಿ ನೀಡಬೇಕು. ಶಾಲೆಗಳಲ್ಲಿ ಅಲ್ಪಸಂಖ್ಯಾತ ಮಕ್ಕಳ ದಾಖಲಾತಿ ಹೆಚ್ಚಿಸಲು ಸ್ಥಳೀಯ ಸಂಪನ್ಮೂಲಗಳನ್ನು ಬಳಸಿಕೊಂಡು ಉತ್ತಮ ವ್ಯವಸ್ಥಿತ ಶಿಕ್ಷಣ ವ್ಯವಸ್ಥೆ ಒದಗಿಸಲು ಕ್ರಮ ವಹಿಸಬೇಕು ಎಂದರು.

ಆರ್ಥಿಕ ಸ್ವಾವಲಂಬನೆ ಸಾಧಿಸಲು ಶೇ.15 ರಷ್ಟು ಅಲ್ಪಸಂಖ್ಯಾತ ಫಲಾನುಭವಿಗಳಿಗೆ ಸಾಲ-ಸೌಲಭ್ಯ ಒದಗಿಸುವ ಮೂಲಕ ನಿಗದಿತ ಗುರಿ ಸಾಧನೆಗೆ ಲೀಡ್ ಬ್ಯಾಂಕ್ ವ್ಯವಸ್ಥಾಪಕರಿಗೆ ಸೂಚಿಸಿದ ಅವರು, ಅಲ್ಪಸಂಖ್ಯಾತ ನಿಗಮದಿಂದ ಅನುಷ್ಟಾನಗೊಳಿಸುವ ಅರಿವು ಶೈಕ್ಷಣಿಕ ಸಾಲ ಯೋಜನೆ ಸೇರಿದಂತೆ ವಿವಿಧ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಟಾನಗೊಳಿಸಬೇಕು. ಉದ್ಯೋಗ ಮೇಳಗಳನ್ನು ಆಯೋಜಿಸಿ ಅಲ್ಪಸಂಖ್ಯಾತ ನಿರುದ್ಯೋಗಿಗಳಿಗೆ ಉದ್ಯೋಗ ಒದಗಿಸಲು ಕ್ರಮ ವಹಿಸಬೇಕು ಎಂದರು.

ಜಿಪಂ ಉಪ ಕಾರ್ಯದರ್ಶಿ ವಿಜಯಕುಮಾರ ಆಜೂರ, ಮುಖ್ಯ ಯೋಜನಾಧಿಕಾರಿ ಸಿ.ಬಿ. ಕುಂಬಾರ, ಕೃಷಿ ಜಂಟಿ ನಿರ್ದೇಶಕ ಶಿವನಗೌಡ .ಎಸ್ ಪಾಟೀಲ, ಕಾರ್ಮಿಕ ಅಧಿಕಾರಿ ಉಮಾಶ್ರೀ ಕೋಳಿ, ಪ್ರಧಾನಮಂತ್ರಿ 15 ಅಂಶಗಳ ಕಾರ್ಯಕ್ರಮದ ಜಿಲ್ಲಾ ಮಟ್ಟದ ಸಮಿತಿ ಸದಸ್ಯರಾದ ಬಸೀರಅಹ್ಮದ್ ರಿಸಾಲದಾರ, ಎಸ್.ಎಸ್. ತಾಜೀಮತರಕ್, ನೆಲಸನ್ ನೊರಮನ್ ಐಝಾಕ್ಸ್, ಜ್ಯೋತಿಂದ್ರ ಹಣಮಂತ ಆಯತವಾಡ, ಬಂದೇನವಾಜ್ ಮುಲ್ಲಾ, ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಜಿಲ್ಲಾಧಿಕಾರಿ ಪ್ರಶಾಂತ ಪೂಜಾರಿ, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕಿ ಟಿ.ಎಚ್. ಕೊಲ್ಹಾರ ಮತ್ತಿತರರಿದ್ದರು.