oppo_2 
ಜಿಲ್ಲೆ

ನೀರಾವರಿ ಯೋಜನೆಗಳಿಗೆ ಅಧಿಕ ಅನುದಾನ

ಲೋಕೇಶ್ ಮನು. ಡಿ

ಮದ್ದೂರು : ತಾಲೂಕಿನಲ್ಲಿ ನಡೆಯುತ್ತಿರುವ ನೀರಾವರಿ ಯೋಜನೆಗಳಿಗೆ ಈಗಾಗಲೇ ಸರ್ಕಾರದಿಂದ 200 ಕೋಟಿ ರೂ.ಗೂ ಅಧಿಕ ಅನುದಾನ ಬಿಡುಗಡೆಯಾಗಿ ಕಾಮಗಾರಿಗಳು ಪ್ರಗತಿಯಲ್ಲಿದೆ ಎಂದು ಶಾಸಕ ಕೆ.ಎಂ.ಉದಯ್ ಮಾಹಿತಿ ನೀಡಿದರು.


ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸೋಮವಾರ ಆಯೋಜಿಸಿದ್ದ ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿ, ಕೆಮ್ಮಣ್ಣು ನಾಲೆ, ಬೈರನ್ ನಾಲೆ ಸೇರಿದಂತೆ ತಾಲೂಕಿನ ಎಲ್ಲ ನಾಲೆಗಳನ್ನು ಆಧುನೀಕರಿಸಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
ಕೆಆರ್‌ಎಸ್‌ನಿಂದ ನೀರು ಹರಿಸಿದಾಗ ಕೊನೇ ಭಾಗಕ್ಕೆ ಸಮರ್ಪಕವಾಗಿ ನೀರು ಹೋಗದೆ ರೈತರು ಬೆಳೆದ ಬೆಳೆಗಳಿಗೆ ತೊಂದರೆಯಾಗುತ್ತಿತ್ತು. ಮುಂದಿನ ದಿನಗಳಲ್ಲಿ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.
ತಾಲೂಕಿನಲ್ಲಿ ಪ್ರಸ್ತುತ ಕೈಗೊಳ್ಳಬೇಕಾದ ಕಾಮಗಾರಿಗಳ ಬಗ್ಗೆ ಮತ್ತು ಮುಂದೆ ಕೈಗೊಳ್ಳಬೇಕಾದ ನೀರಾವರಿಗೆ ಸಂಬಂಧಿಸಿದ ಅಭಿವೃದ್ಧಿ ಬಗ್ಗೆ ಸಭೆಯಲ್ಲಿ ಅಧಿಕಾರಿಗಳ ಜತೆಯಲ್ಲಿ ಚರ್ಚಿಸಿದ್ದು, ಹಂತ ಹಂತವಾಗಿ ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸುವ ಮೂಲಕ ರೈತರಿಗೆ ಅನುಕೂಲ ಕಲ್ಪಿಸಲಾಗುವುದು ಎಂದು ವಿಶ್ವಾಸ ವ್ಯಕ್ತಪಡಿಸಿದರು.
ತಾಲೂಕಿನಲ್ಲಿರುವ ಕೆರೆಗಳ ಒತ್ತುವರಿಯನ್ನು ತೆರವುಗೊಳಿಸಲು ಈಗಾಗಲೇ ಕ್ರಮ ಕೈಗೊಳ್ಳಲಾಗಿದೆ. ಶ್ರೀ ಮದ್ದೂರಮ್ಮನ ಕೆರೆ, ತೈಲೂರು, ರುದ್ರಾಕ್ಷಿಪುರ ಹಾಗೂ ಕದಲೂರು ಕೆರೆಗಳನ್ನು ಅಭಿವೃದ್ಧಿಪಡಿಸಿ ಪ್ರವಾಸಿತಾಣವನ್ನಾಗಿಸಲು ಯೋಜನೆ ರೂಪಿಸಲಾಗಿದೆ ಎಂದು ತಿಳಿಸಿದರು.
ತಾಲೂಕಿನ ಕೆಲವು ಕೆರೆಗಳಲ್ಲಿ ಅವೈಜ್ಞಾನಿಕ ಮಣ್ಣು ತುಂಬುತ್ತಿರುವ ಬಗ್ಗೆ ದೂರುಗಳು ಬಂದಿದ್ದು, ಮುಂದೆ ಕೆರೆಗಳಲ್ಲಿ ಮಣ್ಣು ತುಂಬದಂತೆ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.
ಕೆಮ್ಮಣ್ಣು ನಾಲೆ 90 ಕೋಟಿ ರೂ., ಬೈರನ್ ನಾಲೆ 50 ಕೋಟಿ ರೂ. ವೆಚ್ಚದಲ್ಲಿ ಆಧುನೀಕರಿಸಲು ಕ್ರಮ ಕೈಗೊಂಡಿದ್ದು, ಶೀಘ್ರವಾಗಿ ಅಭಿವೃದ್ಧಿ ಕಾಮಗಾರಿ ಆರಂಭಿಸಲಾಗುವುದು ಎಂದರು.


ನೀರಾವರಿ ಇಲಾಖೆ ಅಧಿಕಾರಿಗಳು ನಾಲೆಗಳ ಮೇಲೆ ಹೋಗಿ ವೀಕ್ಷಣೆ ಮಾಡುತ್ತಿಲ್ಲ. ರೈತರ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ ಎಂಬ ದೂರುಗಳು ಕೇಳಿ ಬರುತ್ತಿದ್ದು, ಮುಂದೆ ರೈತರಿಂದ ದೂರು ಬಾರದಂತೆ ಅಧಿಕಾರಿಗಳು ಕ್ರಮ ವಹಿಸಬೇಕು ಎಂದು ಸಭೆಯಲ್ಲಿ ಸೂಚಿಸಿದರು.
ಪಟ್ಟಣದ ಪುರಸಭಾ ವ್ಯಾಪ್ತಿಯಲ್ಲಿ ಒಳಚರಂಡಿ ನೀರು ಕೆಮ್ಮಣ್ಣು ನಾಲೆ ಮತ್ತು ಶಿಂಷಾ ನದಿಗೆ ಸೇರದಂತೆ ವಿಶೇಷ ಯೋಜನೆ ರೂಪಿಸಲಾಗಿದೆ ಇದೇ ವೇಳೆ ತಿಳಿಸಿದರು.

ಕಾವೇರಿ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಮಹೇಶ್, ಅಧಿಕ್ಷಕ ಇಂಜಿನಿಯರ್ ರಘುರಾಂ, ಮುಖ್ಯ ಇಂಜಿನಿಯರ್ ಚನ್ನಕೇಶವ, ಕಾರ್ಯಪಾಲಕ ಅಭಿಯಂತರ ನಂಜುಂಡೇಗೌಡ ಇದ್ದರು.