ಜಿಲ್ಲೆ

ಮನಬಂದಂತೆ ಥಳಿಸಿ ಕೊಲೆ

ವೀರೇಶ ಸೌದ್ರಿ

ಹಾನಗಲ್ಲ: ಮಹಿಳೆಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದಾನೆಂದು ವಿದ್ಯುತ್ ಕಂಬಕ್ಕೆ ಕಟ್ಟಿಹಾಕಿ ಮನಬಂದಂತೆ ಥಳಿಸಿದ ಪರಿಣಾಮ ವ್ಯಕ್ತಿಯೊಬ್ಬ ಮೃತಪಟ್ಟ ಅಮಾನವೀಯ ಘಟನೆ ತಾಲೂಕಿನ ಕೊಪ್ಪರಸಿಕೊಪ್ಪ ಗ್ರಾಮದಲ್ಲಿ ಗುರುವಾರ ನಡೆದಿದೆ.

ಪ್ರಕಾಶ ಓಲೇಕಾರ(35) ಕೊಲೆಗೀಡಾದ ವ್ಯಕ್ತಿ. ಇದೇ ಗ್ರಾಮದ ಮಹಿಳೆಯೊಂದಿಗೆ ಹಲವು ದಿನಗಳಿಂದ ಅನೈತಿಕ ಸಂಬಂಧ ಹೊಂದಿದ್ದಾನೆಂದು ಆರೋಪಿಸಿ ಗ್ರಾಮದ ಏಳೆಂಟು ಜನ ಪ್ರಕಾಶನ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.

ಗ್ರಾಮದ ವಿದ್ಯುತ್ ಕಂಬಕ್ಕೆ ಕಟ್ಟಿಹಾಕಿ ಹೊಡೆದಿರುವುದರಿಂದ ಪ್ರಕಾಶ ತೀವ್ರ ಗಾಯಗೊಂಡಿದ್ದ. ಆತನನ್ನು ಪೊಲೀಸರು ರಕ್ಷಿಸಿ ಆಸ್ಪತ್ರೆಗೆ ದಾಖಲಿಸುವಷ್ಟರಲ್ಲಿ ಮೃತಪಟ್ಟಿರುವುದಾಗಿ ಪೊಲೀಸ್ ಮೂಲಗಳು ತಿಳಿಸಿವೆ. ಇದೇ ಘಟನೆಯಲ್ಲಿ ಮಹಿಳೆಯ ಮೇಲೂ ಹಲ್ಲೆ ನಡೆದಿದ್ದು, ಗಾಯಗೊಂಡಿರುವ ಮಹಿಳೆಯನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಗೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ಬಂಧಿಸಿರುವುದಾಗಿ ಪೊಲೀಸ್ ಮೂಲಗಳು ತಿಳಿಸಿವೆ. ಘಟನಾ ಸ್ಥಳಕ್ಕೆ ಎಎಸ್‌ಪಿ ಲಕ್ಷ್ಮಣ ಶಿರಕೋಳ ಭೇಟಿ ನೀಡಿ ಪರಿಶೀಲಿಸಿದ್ದಾರೆ.