ಬೆಳಗಾವಿ: ಹುಬ್ಬಳ್ಳಿಯಲ್ಲಿ ನಡೆದ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ ಸರ್ಕಾರದೊಂದಿಗೆ ಕೈಗಾರಿಕೆ ಸ್ಥಾಪಿಸಲು ಒಪ್ಪಂದ ಮಾಡಿಕೊಂಡಿರುವ ಕಂಪನಿಗಳಿಗೆ ಶೀಘ್ರ ಜಮೀನು ನೀಡಲಾಗುವುದು ಎಂದು ಕೈಗಾರಿಕಾ ಹಾಗೂ ಬೆಳಗಾವಿ ಮತ್ತು ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್ ಹೇಳಿದರು.
ನಗರದ ಎಸ್.ಜಿ. ಬಾಳೇಕುಂದ್ರಿ ಇಂಜಿನಿಯರಿಂಗ್ ಕಾಲೇಜ್ ಆವರಣದಲ್ಲಿ ಎರಡು ದಿನಗಳ ಕಾಲ ಆಯೋಜಿಸಿರುವ ಬೃಹತ್ ಉದ್ಯೋಗ ಮೇಳ ಉದ್ಘಾಟಿಸಿ ಅವರು ಮಾತನಾಡಿದರು.
ಹುಬ್ಬಳ್ಳಿಯಲ್ಲಿ ನಡೆದ ಹೂಡಿಕೆದಾರರ ಸಮಾವೇಶದಲ್ಲಿ 72 ಸಾವಿರ ಕೋಟಿ ರೂ. ಬಂಡವಾಳ ಹೂಡಿಕೆಗೆ ಕಂಪನಿಗಳು ಒಪ್ಪಂದ ಮಾಡಿಕೊಂಡಿವೆ. ಬೆಳಗಾವಿ ಜಿಲ್ಲೆಯಲ್ಲಿ 1000 ಕೋಟಿ ರೂ. ಹೂಡಿಕೆ ಆಗಲಿದೆ. ಇದರಿಂದ ಸ್ಥಳೀಯರಿಗೆ ಹೆಚ್ಚಿನ ಉದ್ಯೋಗಾವಕಾಶ ಸಿಗಲಿವೆ ಎಂದರು.
ಉ.ಕ.ದಲ್ಲೇ ಉದ್ಯೋಗಾವಕಾಶ: ಹಲವು ದಶಕಗಳಿಂದ ಬೆಂಗಳೂರು ನಗರ ಕೇಂದ್ರೀಕೃತವಾಗಿಟ್ಟುಕೊಂಡು ಬಂಡವಾಳ ಹೂಡಿಕೆದಾರರ ಸಮಾವೇಶ ನಡೆಯುತ್ತಿದ್ದವು. ಜತೆಗೆ ಅಲ್ಲಿಯೇ ವಿವಿಧ ಕಂಪನಿಗಳು ತಮ್ಮ ಕೈಗಾರಿಕೆ ಆರಂಭಿಸುತ್ತಿದ್ದರು. ಉತ್ತರ ಕರ್ನಾಟಕ ಭಾಗದ ಜನರು ಉದ್ಯೋಗಕ್ಕಾಗಿ ಬೆಂಗಳೂರಿಗೆ ಹೋಗುತ್ತಿದ್ದರು. ಅದನ್ನು ತಪ್ಪಿಸುವ ಮತ್ತು ಎರಡು ಮತ್ತು ಮೂರನೇ ಹಂತದ ನಗರಗಳಲ್ಲಿ ಕೈಗಾರಿಕೆ ಸ್ಥಾಪಿಸುವ ಉದ್ದೇಶದಿಂದ ಹುಬ್ಬಳ್ಳಿಯಲ್ಲಿ ಹೂಡಿಕೆದಾರರ ಸಮಾವೇಶ ಆಯೋಜಿಸಲಾಗಿತ್ತು ಎಂದರು.
ಕೈಗಾರಿಕೆ, ವಿವಿಧ ಕ್ಷೇತ್ರದಲ್ಲಿನ ಉದ್ದಿಮೆಗಳನ್ನು ರಾಜ್ಯದ ಎರಡು ಮತ್ತು ಮೂರನೇ ಹಂತದ ನಗರಗಳಿಗೆ ವಿಸ್ತರಿಸಲು 2020-25ನೇ ಸಾಲಿನ ನೂತನ ಕೈಗಾರಿಕಾ ನೀತಿಯಲ್ಲಿ ಆದ್ಯತೆ ನೀಡಲಾಗುತ್ತಿದೆ. ಕೈಗಾರಿಕಾ ಬೆಳವಣಿಗೆ ವಿಕೇಂದ್ರೀಕರಣ ಮಾಡುವ ಮೂಲಕ ಸಮಗ್ರ ಕರ್ನಾಟಕದ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ ಎಂದರು.
ಶಾಸಕ ಅಭಯ ಪಾಟೀಲ, ಜಿಪಂ ಅಧ್ಯಕ್ಷೆ ಆಶಾ ಐಹೊಳೆ, ಪ್ರಾದೇಶಿಕ ಆಯುಕ್ತ ಆಮ್ಲಾನ್ ಆದಿತ್ಯ ಬಿಸ್ವಾಸ್, ಜಿಲ್ಲಾಧಿಕಾರಿ ಡಾ. ಎಸ್.ಬಿ. ಬೊಮ್ಮನಹಳ್ಳಿ ಪೊಲೀಸ್ ಆಯುಕ್ತ ಬಿ.ಎಸ್. ಲೋಕೇಶಕುಮಾರ್, ಜಿಪಂ ಸಿಇಒ ಡಾ. ಕೆ.ವಿ. ರಾಜೇಂದ್ರ, ಎಸ್ಪಿ ಲಕ್ಷ್ಮಣ ನಿಂಬರಗಿ, ಡಿಸಿಪಿ ಸೀಮಾ ಲಾಟ್ಕರ್, ಪಾಲಿಕೆ ಆಯುಕ್ತ ಕೆ.ಎಚ್. ಜಗದೀಶ, ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ ಇತರರಿದ್ದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಶಶಿಕಲಾ ಜೊಲ್ಲೆ ಮಾತನಾಡಿ, ಅಭಿವೃದ್ಧಿಯಲ್ಲಿ ಉತ್ತರ ಕರ್ನಾಟಕಕ್ಕೆ ಅನ್ಯಾಯವಾಗುತ್ತಿದೆ ಎಂಬ ಕೊರಗು ಇತ್ತು. ಅದನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರದಿಂದ ನಿವಾರಣೆಯಾಗುತ್ತಿದೆ. ಕೌಶಲಾಭಿವೃದ್ಧಿ ಇಲಾಖೆ ಆರಂಭಿಸಿ ಉದ್ಯೋಗಾಕಾಂಕ್ಷಿಗಳಿಗೆ ಅಗತ್ಯ ತರಬೇತಿ ನೀಡುವ ಮೂಲಕ ಎಲ್ಲರಿಗೂ ಉದ್ಯೋಗ ಕಲ್ಪಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕ್ರಮ ಕೈಗೊಂಡಿವೆ. ಗ್ರಾಮೀಣ ಮತ್ತು ನಗರ ಪ್ರದೇಶದ ಎಲ್ಲ ಯುವಕ-ಯುವತಿಯರು ಉದ್ಯೋಗ ಮೇಳದ ಪ್ರಯೋಜನ ಪಡೆದುಕೊಂಡು ಜೀವನದಲ್ಲಿ ಯಶಸ್ವಿಯಾಗಬೇಕು ಎಂದು ಸಲಹೆ ನೀಡಿದರು.
ಮುಂದಿನ ದಿನಗಳಲ್ಲಿ ಎಲ್ಲ ಜಿಲ್ಲೆಗಳಲ್ಲಿ ಬಂಡವಾಳ ಹೂಡಿಕೆದಾರರ ಸಮಾವೇಶ ನಡೆಸುವ ಅಗತ್ಯವಿದೆ. ಸ್ವಯಂ ಉದ್ಯೋಗ ಸ್ಥಾಪನೆ ಪ್ರೋತ್ಸಾಹಿಸಲು ಸರ್ಕಾರ ಹತ್ತಾರು ಯೋಜನೆ ಜಾರಿಗೆ ತಂದಿದೆ. ಹೀಗಾಗಿ ಉದ್ಯೋಗಕ್ಕಾಗಿ ಅಲೆದಾಡದೆ ಸ್ವಯಂ ಉದ್ಯೋಗ ಕೈಗೊಳ್ಳಲು ಯುವಕರು ಮುಂದಾಗಬೇಕು.| ಅಣ್ಣಾಸಾಹೇಬ ಜೊಲ್ಲೆ , ಸಂಸದರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಕೇಂದ್ರ ಸರ್ಕಾರದ ನೆರವಿನೊಂದಿಗೆ ಉದ್ಯೋಗ ಮೇಳ ಹಮ್ಮಿಕೊಳ್ಳಲಾಗಿದೆ. ಮೇಳದಲ್ಲಿ ಭಾಗವಹಿಸಿರುವ 162 ಕಂಪನಿಗಳಲ್ಲಿ 9,500 ಉದ್ಯೋಗ ಒದಗಿಸಲು ಅವಕಾಶಗಳಿದ್ದು, ಅಭ್ಯರ್ಥಿಗಳು ಪ್ರಯೋಜನ ಪಡೆದುಕೊಳ್ಳಬೇಕು | ಜಗದೀಶ ಶೆಟ್ಟರ್, ಜಿಲ್ಲಾ ಉಸ್ತುವಾರಿ ಸಚಿವಬೆಳಗಾವಿಯ ಉತ್ಕೃಷ್ಟ ಗುಣಮಟ್ಟದ ತರಕಾರಿಗಳನ್ನು ರಫ್ತು ಮಾಡಲು ಅನುಕೂಲವಾಗುವಂತೆ ಸರಕು ವಿಮಾನ ಸೌಲಭ್ಯ ಕಲ್ಪಿಸಬೇಕು. ಹೆಚ್ಚು ವಿದ್ಯಾವಂತರು ಇರುವ ಈ ಭಾಗದಲ್ಲಿ ಐಟಿ ಪಾರ್ಕ್ ಸ್ಥಾಪಿಸುವ ಅಗತ್ಯತೆಯೂ ಇದೆ.| ಅನಿಲ ಬೆನಕೆ, ಶಾಸಕ