ಜಿಲ್ಲೆ

ಸ್ಥಾನಮಾನಕ್ಕೆ ಸ್ಫೂರ್ತಿಯಾಗಲಿ ಸಾಧಕಿಯರು: ಶಾಸಕ ಶಾಮನೂರು ಶಿವಶಂಕರಪ್ಪ ಹೇಳಿಕೆ

ದಾವಣಗೆರೆ : ಮಹಿಳೆಯರು ಇಂದು ಎಲ್ಲ ಕ್ಷೇತ್ರಗಳಲ್ಲಿ ಪುರುಷರಿಗಿಂತಲೂ ಹೆಚ್ಚಿನ ಸಾಧನೆ ಮಾಡಿದ್ದಾರೆ. ಅವರಿಂದ ಸ್ಫೂರ್ತಿ ಪಡೆದು ಉತ್ತಮ ಸ್ಥಾನಮಾನ ಪಡೆಯುವತ್ತ ನಿರಂತರವಾಗಿ ಶ್ರಮಿಸಬೇಕು ಎಂದು ಶಾಸಕ ಡಾ.ಶಾಮನೂರು ಶಿವಶಂಕರಪ್ಪ ಹೇಳಿದರು.

ರಾಜನಹಳ್ಳಿ ಸೀತಮ್ಮ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ಶುಕ್ರವಾರ, ರಾಜ್ಯ ಬಂಡವಾಳ ವೆಚ್ಚದಲ್ಲಿ ನಿರ್ಮಿಸಲಾದ ನೂತನ ಕಟ್ಟಡ ಉದ್ಘಾಟಿಸಿ ಮಾತನಾಡಿದರು.

ಪ್ರಸ್ತುತ ದಿನಮಾನಗಳಲ್ಲಿ ಎಲ್ಲ ಕ್ಷೇತ್ರಗಳಲ್ಲೂ ಸಾಕಷ್ಟು ಸ್ಪರ್ಧೆ ಇದೆ. ವಿದ್ಯಾರ್ಥಿಗಳು ಆಸಕ್ತಿಯಿಂದ ಓದಿ ಹೆಚ್ಚಿನ ಅಂಕ ಗಳಿಸುವ ಮೂಲಕ ತಮ್ಮ ಕನಸುಗಳನ್ನು ಸಾಕಾರಗೊಳಿಸಿಕೊಳ್ಳಬೇಕು ಎಂದರು.

ಪಾಲಿಕೆ ಮಾಜಿ ಮೇಯರ್ ಎಸ್.ಟಿ.ವೀರೇಶ್ ಮಾತನಾಡಿ, ಸರ್ಕಾರಿ ಶಾಲೆ-ಕಾಲೇಜುಗಳು ಎಂದರೆ ಮೂಗು ಮುರಿಯುವ ಆಧುನಿಕ ಕಾಲದಲ್ಲಿ ಹಲವಾರು ವಿದ್ಯಾರ್ಥಿಗಳು ಸರ್ಕಾರಿ ಕಾಲೇಜಿನಲ್ಲಿ ಅಭ್ಯಾಸ ಮಾಡುತ್ತಿರುವುದು ಸ್ವಾಗತಾರ್ಹ ಬೆಳವಣಿಗೆ. ಸತತ ತ್ಯಾಗ, ಪರಿಶ್ರಮದಿಂದ ಯಶಸ್ಸು ಕಾಣಬಹುದು ಎಂದರು.

ಮೇಯರ್ ಆರ್. ಜಯಮ್ಮ, ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಕೆ.ಜಿ ಶಿವಕುಮಾರ್, ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಶಿವರಾಜು ಎಂ, ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಬಿ.ಪಾಲಾಕ್ಷಿ, ನಿರ್ಮಿತಿ ಕೇಂದ್ರದ ಯೋಜನಾ ವ್ಯವಸ್ಥಾಪಕ ಎಸ್.ಒ ರವಿ, ಸೀತಮ್ಮ ಕಾಲೇಜಿನ ಪ್ರಾಚಾರ್ಯ ಟಿ.ಎ. ಕುಸಗಟ್ಟಿ, ಪಾಲಿಕೆ ಸದಸ್ಯ ಎ.ನಾಗರಾಜ್, ದಿನೇಶ್.ಕೆ ಶೆಟ್ಟಿ ಇತರರಿದ್ದರು.

ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿದ ಪ್ರತಿಭಾವಂತರನ್ನು ಸನ್ಮಾನಿಸಲಾಯಿತು.