ಹಾಸನ: ರಸ್ತೆ ಅಪಘಾತಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮ ವಹಿಸುವುದರ ಜತೆಗೆ ಅಪಘಾತ ವಲಯಗಳನ್ನು ಗುರುತಿಸಿ ಸೂಚನಾ ಫಲಕಗಳನ್ನು ಅಳವಡಿಸಿ ಎಂದು ಜಿಲ್ಲಾಧಿಕಾರಿ ಲತಾಕುಮಾರಿ ಅಧಿಕಾರಿಗಳಿಗೆ ಸೂಚಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಅಧಿಕಾರಿಗಳು ಅವೈಜ್ಞಾನಿಕವಾಗಿರುವ ರಸ್ತೆಗಳನ್ನು ಗುರುತಿಸಿ ಅಗತ್ಯಕ್ರಮ ಕೈಗೊಳ್ಳಬೇಕು. ಹೆಚ್ಚು ಸಾವು ಸಂಭವಿಸುತ್ತಿರುವುದು ಅಪಘಾತಗಳಿಂದ. ಇದರ ಬಗ್ಗೆ ಯಾರಿಗೂ ಅರಿವಿಲ್ಲ. ಉದಾಸೀನದಿಂದ ವಾಹನ ಚಲಾಯಿಸಿ ಅವಘಡಗಳು ಸಂಭವಿಸುವುದರಿಂದ ಅಮಾಯಕ ಕುಟುಂಬಗಳು ನೋವು ಅನುಭವಿಸುವಂತಾಗಿದೆ ಎಂದರು.
ರಸ್ತೆ ಒತ್ತುವರಿ ತೆರವುಗೊಳಿಸುವುದು, ಮುಖ್ಯ ರಸ್ತೆಗಳಲ್ಲಿನ ಪಾದಚಾರಿ ಮಾರ್ಗವನ್ನು ಮುಕ್ತಗೊಳಿಸುವ ನಿಟ್ಟಿನಲ್ಲಿ ಡಂಗೂರ ಸಾರಿಸುವುದರ ಜತೆಗೆ ನೋಟಿಸ್ ನೀಡಬೇಕು. ಇದರೊಂದಿಗೆ ಪತ್ರಿಕಾ ಪ್ರಕಟಣೆ ನೀಡಿ ನಂತರ ತೆರವುಗೊಳಿಸಲು ಕ್ರಮ ವಹಿಸಬೇಕು ಎಂದು ಸೂಚಿಸಿದರು.
ರಸ್ತೆ ಸುರಕ್ಷತಾ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಕೆಲಸವಾಗಬೇಕು. ದ್ವಿಚಕ್ರ ವಾಹನ ಸವಾರರು ಹೆಲ್ಮೆಟ್ ಧರಿಸಬೇಕು. ಯುವ ಜನತೆ ಇದನ್ನು ಬಹಳ ಲಘುವಾಗಿ ಪರಿಗಣಿಸಬಾರದು. ಇದರಿಂದಾಗುವ ಅವಘಡಗಳನ್ನು ತಡೆಯಲು ಅಧಿಕಾರಿಗಳು ಕ್ರಮವಹಿಸಬೇಕು. 18 ವರ್ಷದೊಳಗಿನ ಮಕ್ಕಳು ದ್ವಿಚಕ್ರ ವಾಹನಗಳನ್ನು ಚಾಲನೆ ಮಾಡಲು ಅವಕಾಶ ನೀಡಬಾರದು. ಯಾವುದೇ ಪದವಿ ಪೂರ್ವ ಕಾಲೇಜುಗಳಿಗೆ ಮಕ್ಕಳು ದ್ವಿಚಕ್ರ ವಾಹನಗಳಲ್ಲಿ ಬರುತ್ತಿದ್ದಲ್ಲಿ ಅಂತಹ ಕಾಲೇಜುಗಳ ಪ್ರಾಂಶುಪಾಲರಿಗೆ ನೋಟಿಸ್ ನೀಡುವಂತೆ ತಿಳಿಸಿದರು.
ಪದವಿ ಕಾಲೇಜುಗಳಿಗೆ ಬರುವ ವಿದ್ಯಾರ್ಥಿಗಳು ಹೆಲ್ಮೆಟ್ ಹಾಕಿಕೊಂಡು ಬರದಿದ್ದಲ್ಲಿ ಕಾಲೇಜು ಆವರಣಕ್ಕೆ ಬರಲು ಅವಕಾಶ ನೀಡಬಾರದು. ಈ ನಿಟ್ಟಿನಲ್ಲಿ ಸಂಬಂಧಿಸಿದ ಕಾಲೇಜು ಪ್ರಾಂಶುಪಾಲರು ನಿಗಾವಹಿಸಿ ಕ್ರಮ ವಹಿಸಬೇಕು. ಶಾಲಾ-ಕಾಲೇಜುಗಳಲ್ಲಿ ಮಾಹಿತಿಗಾಗಿ ರಸ್ತೆ ಸುರಕ್ಷತಾ ಚಿಹ್ನೆಗಳ ಫಲಕ ಅಳವಡಿಸಲು ಸೂಚಿಸಿದರಲ್ಲದೆ, ಸಂಚಾರ ನಿಯಮಗಳ ಕುರಿತು ಶಾಲಾ, ಕಾಲೇಜುಗಳಲ್ಲಿ ಅರಿವು ಕಾರ್ಯಕ್ರಮ ಹಮ್ಮಿಕೊಂಡು ಮಕ್ಕಳಿಗೆ ತಿಳಿವಳಿಕೆ ನೀಡಬೇಕು ಎಂದು ತಿಳಿಸಿದರು.
ನಗರ, ಪಟ್ಟಣ, ಗ್ರಾಮೀಣ ಪ್ರದೇಶಗಳಲ್ಲಿ ಹಾದು ಹೋಗಿರುವ ರಾಜ್ಯ ಹಾಗೂ ರಾಷ್ಟ್ರೀಯ ಹೆದ್ದಾರಿಗಳನ್ನು ಸ್ಥಳೀಯವಾಗಿ ಪರಿಶೀಲಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರಲ್ಲದೆ, ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿ ಟಾಸ್ಕ್‌ಫೋರ್ಸ್ ಕಮಿಟಿ ರಚನೆ ಮಾಡುವಂತೆ ಸೂಚಿಸಿದರು.
ಚಾಲನಾ ಪರವಾನಗಿ ನೀಡುವ ಸಂದರ್ಭದಲ್ಲಿ ಕಟ್ಟುನಿಟ್ಟಾಗಿ ನಿಯಮಗಳನ್ನು ಪಾಲಿಸುವಂತೆ ಪ್ರಾದೇಶಿಕ ಸಾರಿಗೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರಲ್ಲದೆ, ಗ್ರಾಮೀಣ ಪ್ರದೇಶಗಳಲ್ಲಿ ಟ್ರಾೃಕ್ಟರ್‌ಗಳಿಗೆ ರೇಡಿಯನ್ ಟ್ರಿಪ್ ಅಳವಡಿಸಲು ಕ್ರಮವಹಿಸುವುದರ ಜತೆಗೆ ಹೆಚ್ಚು ಜನಸಂದಣಿ ಇರುವ ಪ್ರದೇಶಗಳಲ್ಲಿ ರಸ್ತೆ ಸುರಕ್ಷತೆ ಬಗ್ಗೆ ಅರಿವು ಮೂಡಿಸಿ ಎಂದರು.
ಟ್ರಕ್ ಟರ್ಮಿನಲ್ ನಿರ್ಮಾಣಕ್ಕೆ ನಗರದ ಹೊರವಲಯದಲ್ಲಿ ಜಾಗ ಗುರುತಿಸಬೇಕು. ಶಾಲಾ ವಾಹನ ಚಾಲಕರು ಸಮವಸ್ತ್ರವನ್ನು ಕಡ್ಡಾಯವಾಗಿ ಧರಿಸುವುದರ ಜತೆಗೆ ವಾಹನ ಪರವಾನಗಿ ಹೊಂದಿರಬೇಕು ಎಂದು ತಿಳಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮೊಹಮ್ಮದ್ ಸುಜೀತಾ ಮಾತನಾಡಿ, ರಾತ್ರಿ 9.30 ರ ನಂತರ ಬೀದಿ ದೀಪಗಳು ಇಲ್ಲದಿರುವುದು, ಅವೈಜ್ಞಾನಿಕವಾಗಿ ರಸ್ತೆಗಳಿಗೆ ಉಬ್ಬು ನಿರ್ಮಿಸಿರುವುದು, ರಮ್ಲರ್ಸ್ ಅಳವಡಿಸುವುದು ಅಪಘಾತಕ್ಕೆ ಕಾರಣವಾಗುತ್ತಿದೆ. ಹಾಗಾಗಿ ಆ ವ್ಯಾಪ್ತಿಯ ಸಂಬಂಧಪಟ್ಟ ಅಧಿಕಾರಿ ವಿರುದ್ಧ ಎಫ್‌ಐಆರ್ ದಾಖಲಿಸಲಾಗುತ್ತದೆ. ಅಪಘಾತ ಮಾಡಿದ ವಾಹನ ಚಾಲಕನ ಪರವಾನಗಿಯನ್ನು ರದ್ದುಪಡಿಸಲು ಕ್ರಮವಹಿಸುವಂತೆ ಪ್ರಾದೇಶಿಕ ಸಾರಿಗೆ ಅಧಿಕಾರಿಗಳಿಗೆ ತಿಳಿಸಿದರು.
ನಗರ ಪ್ರದೇಶದಲ್ಲಿ ವಾಣಿಜ್ಯ ಮಳಿಗೆಗಳ ಸೆಲ್ಲಾರ್‌ಗಳನ್ನು ದಾಸ್ತಾನು ಮಾಡಲು ಉಪಯೋಗಿಸಿಕೊಳ್ಳಲಾಗುತ್ತಿದೆ. ವಾಹನಗಳನ್ನು ರಸ್ತೆ ಬದಿಯಲ್ಲಿ ನಿಲ್ಲಿಸುತ್ತಿರುವುದರಿಂದ ಸಂಚಾರಕ್ಕೆ ಅಡಚಣೆ ಆಗುತ್ತಿದೆ. ಆದ್ದರಿಂದ ವಾಣಿಜ್ಯ ಮಳಿಗೆ ನಿರ್ಮಾಣಕ್ಕೆ ಪರವಾನಗಿ ನೀಡುವ ಸಂದರ್ಭದಲ್ಲಿ ವಾಹನ ನಿಲುಗಡೆಗೆ ಅಗತ್ಯ ಸ್ಥಳಾವಕಾಶ ಇದೆಯೇ ಎಂಬುದನ್ನು ಪರಿಶೀಲಿಸಿ ನಂತರ ಪರವಾನಗಿ ನೀಡಬೇಕು ಎಂದು ಸೂಚಿಸಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ.ಆರ್.ಪೂರ್ಣಿಮಾ, ಅಪರ ಜಿಲ್ಲಾಧಿಕಾರಿ ಮಂಜುನಾಥ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ವೆಂಕಟೇಶ್ ನಾಯ್ಡು, ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಇಂಜಿನಿಯರ್ ಗಿರೀಶ್, ಹಿಮ್ಸ್ ನಿರ್ದೇಶಕ ಡಾ.ರಾಜಣ್ಣ, ಪ್ರಾದೇಶಿಕ ಸಾರಿಗೆ ಅಧಿಕಾರಿ ಪ್ರಕಾಶ್, ಮಹಾನಗರಪಾಲಿಕೆ ಆಯುಕ್ತ ಕೃಷ್ಣ ಮೂರ್ತಿ, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ಬಲರಾಂ, ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.