ಮೈಸೂರು: ಕೃಷಿ ಪಂಪ್‌ಸೆಟ್‌ಗಳಿಗೆ ಹಗಲಿನ ವೇಳೆಯೇ ಸಮರ್ಪಕ ವಿದ್ಯುತ್ ಪೂರೈಸುವ ನಿಟ್ಟಿನಲ್ಲಿ ಜಾರಿಗೊಳಿಸಿರುವ ಕುಸುಮ್-ಸಿ ಯೋಜನೆಯನ್ನು ತ್ವರಿತ ಹಾಗೂ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು ಎಂದು ಇಂಧನ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಗೌರವ್‌ಗುಪ್ತ ಸೂಚನೆ ನೀಡಿದರು.
ವಿಜಯನಗರ 2ನೇ ಹಂತದಲ್ಲಿರುವ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಗಮಿತ (ಸೆಸ್ಕ್) ಕಚೇರಿಯಲ್ಲಿ ಶುಕ್ರವಾರ ಆಯೋಜಿಸಿದ್ದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.
ರೈತರ ಕೃಷಿ ಪಂಪ್ ಸೆಟ್‌ಗಳಿಗೆ ಹಗಲಿನ ವೇಳೆಯಲ್ಲಿ 7 ಗಂಟೆ ವಿದ್ಯುತ್ ಪೂರೈಕೆ ಮಾಡಲು ಕುಸುಮ್-ಸಿ ಯೋಜನೆ ಅತ್ಯಂತ ಸಹಕಾರಿಯಾಗಲಿದೆ. ಆದ್ದರಿಂದ ಕುಸುಮ್-ಸಿ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಮೂಲಕ ರಾಜ್ಯದಲ್ಲಿ ಮುಂಚೂಣಿಯಲ್ಲಿ ನಿಲ್ಲಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಯೋಜನೆ ಸಮರ್ಪಕವಾಗಿ ಅನುಷ್ಠಾನಗೊಂಡರೆ ಮುಂದಿನ ಕೆಲವೇ ತಿಂಗಳಲ್ಲಿ ರೈತರ ವಿದ್ಯುತ್ ಸಮಸ್ಯೆ ಪರಿಹಾರವಾಗಲಿದೆ. ಈ ನಿಟ್ಟಿನಲ್ಲಿ ನಿಗಮದ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು ಎಂದರು.
ಕುಸುಮ್-ಸಿ ಯೋಜನೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಿರುವ ರಾಜ್ಯದ ನಂಬರ್ ಒನ್ ಎಸ್ಕಾಂ ಎಂಬ ಖ್ಯಾತಿ ಪಡೆಯುವಂತೆ ಮಾಡಲು ಸೆಸ್ಕ್ ಅಧಿಕಾರಿಗಳು ಹೆಚ್ಚಿನ ಪರಿಶ್ರಮದಿಂದ ಕೆಲಸ ಮಾಡಬೇಕಿದೆ ಎಂದು ಪ್ರೋತ್ಸಾಹಿಸಿದರು.
ಸೆಸ್ಕ್ ವ್ಯಾಪ್ತಿಯಲ್ಲಿ ಈಗಾಗಲೇ ಕುಸುಮ್-ಸಿ ಯೋಜನೆಯನ್ನು ಅನುಷ್ಠಾನಗೊಳಿವಲ್ಲಿ ಉತ್ತಮ ರೀತಿಯಲ್ಲಿ ಕೆಲಸ ಮಾಡಲಾಗುತ್ತಿದೆ. ಜತೆಗೆ ಎಲ್ಲೆಲ್ಲಿ ಭೂಮಿ ಸಮಸ್ಯೆಗಳಿವೆ ಅವುಗಳನ್ನು ಬಗೆಹರಿಸಬೇಕಿದ್ದು, ಈ ನಿಟ್ಟಿನಲ್ಲಿ ಉದ್ಯಮಿಗಳು ಹಾಗೂ ರೈತರ ಜತೆಗೆ ಮಾತುಕತೆ ನಡೆಸಿ ಯೋಜನೆ ಅನುಷ್ಠಾನಕ್ಕೆ ಅಗತ್ಯ ಇರುವ ಭೂಮಿಯನ್ನು ಪಡೆಯಲು ಪ್ರಯತ್ನಿಸಬೇಕು ಎಂದು ಸೂಚಿಸಿದರು.
ಸಮಸ್ಯೆಗಳಿಗೆ ಶೀಘ್ರವೇ ಸ್ಪಂದಿಸಿ:
ನಿಗಮ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುವ ಸಹಾಯಕ ಕಾರ್ಯಪಾಲಕ ಇಂಜಿನಿಯರ್‌ಗಳು ಚುರುಕಾಗಿ ಕೆಲಸ ಮಾಡುವುದರ ಜತೆಗೆ ಸಮಸ್ಯೆಗಳು ಕಂಡು ಬಂದಲ್ಲಿ ಶೀಘ್ರವೇ ಸ್ಪಂದಿಸಬೇಕು. ಇಲ್ಲದಿದ್ದಲ್ಲಿ ಜನರ ಆಕ್ರೋಶಕ್ಕೆ ಗುರಿಯಾಗುತ್ತೇವೆ. ಹಾಗಾಗಿ ಜವಾಬ್ದಾರಿ ಅರಿತು ಕೆಲಸ ಮಾಡಬೇಕು ಎಂದು ಸಲಹೆ ನೀಡಿದರು.
ಬಿಲ್ಲಿಂಗ್, ಮೀಟರ್ ರೀಡಿಂಗ್, ಮೀಟರ್‌ಗಳ ಪರಿಶೀಲನೆ, ಅಕ್ರಮ ವಿದ್ಯುತ್ ಸಂಪರ್ಕಗಳು ಸೇರಿದಂತೆ ಇನ್ನಿತರ ವಿಷಯಗಳಲ್ಲಿ ಮತ್ತಷ್ಟು ಪರಿಣಾಮಕಾರಿಯಾಗಿ ಕೆಲಸ ಆಗಬೇಕು. ಮುಖ್ಯವಾಗಿ ಗ್ರಾಹಕರಿಗೆ ಯಾವುದೇ ರೀತಿಯ ತೊಂದರೆ ಆಗದಂತೆ ನಿಗಾ ವಹಿಸಬೇಕು ಎಂದು ಸಲಹೆ ನೀಡಿದರು.
ಸೆಸ್ಕ್ ವ್ಯವಸ್ಥಾಪಕ ನಿರ್ದೇಶಕ ಕೆ.ಎಂ. ಮುನಿಗೋಪಾಲ್ ರಾಜು ಮಾತನಾಡಿ, ಕುಸುಮ್-ಸಿ ಯೋಜನೆ ಸಮರ್ಪಕ ಅನುಷ್ಠಾನಕ್ಕೆ 153 ಸಬ್ ಸ್ಟೇಷನ್‌ಗಳಿಂದ 842.16 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆಗೆ ಕಾರ್ಯಾದೇಶ ಪತ್ರ ನೀಡಲಾಗಿದೆ. 100 ಸಬ್ ಸ್ಟೇಷನ್‌ಗಳಿಂದ 566.3 ಮೆಗಾ ವ್ಯಾಟ್ ಉತ್ಪಾದನೆಗೆ ಪಿಪಿಎ ಕಾರ್ಯಗತ ಮಾಡಲಾಗಿದೆ. ಇದರಲ್ಲಿ ಎಲ್ಲ ವಿಭಾಗದ ಇಇ ಗಳಿಗೆ ಮೂರು ತಿಂಗಳಲ್ಲಿ ಕನಿಷ್ಠ 5 ಮೆಗಾ ವ್ಯಾಟ್ ವಿದ್ಯುತ್ ಉತ್ಪಾದನೆ ಆಗಬೇಕು ಎಂದು ಟಾರ್ಗೆಟ್ ನೀಡಲಾಗಿದೆ ಎಂದು ತಿಳಿಸಿದರು.
ಗಂಗಾ ಕಲ್ಯಾಣ ಯೋಜನೆ, ಕುಡಿಯುವ ನೀರು ಸರಬರಾಜು ಯೋಜನೆ, ಪಿಎಂ ಜನಮನ್, ಹಾಡಿಗಳ ವಿದ್ಯುತೀಕರಣ ಯೋಜನೆಗಳ ಪ್ರಗತಿ ಹಾಗೂ ನಿಗಮ ವ್ಯಾಪ್ತಿಯಲ್ಲಿ ಮಾಡಲಾಗಿರುವ ಫೀಡರ್ ನಿರ್ವಹಣೆ, ಟ್ರಾನ್ಸ್‌ಫಾರ್ಮರ್‌ಗಳ ನಿರ್ವಹಣೆ, ಐಪಿ ಸೆಟ್‌ಗಳ ನೋಂದಣಿ ಇನ್ನಿತರ ವಿಷಯಗಳ ಮಾಹಿತಿ ನೀಡಿದರು.
ಸೆಸ್ಕ್ ತಾಂತ್ರಿಕ ನಿರ್ದೇಶಕ ಡಿ.ಜೆ. ದಿವಾಕರ್, ಮುಖ್ಯ ಆರ್ಥಿಕ ಅಧಿಕಾರಿ ಜಿ.ರೇಣುಕಾ, ಮುಖ್ಯ ಪ್ರಧಾನ ವ್ಯವಸ್ಥಾಪಕಿ ಶರಣಮ್ಮ ಎಸ್.ಜಂಗಿನ, ಆಡಳಿತ ಮತ್ತು ಮಾನವ ಸಂಪನ್ಮೂಲ ಶಾಖೆಯ ಪ್ರಧಾನ ವ್ಯವಸ್ಥಾಪಕಿ ಬಿ.ಆರ್. ರೂಪಾ ಇತರರು ಇದ್ದರು.