ಹುನಗುಂದ: ವಿದ್ಯಾರ್ಥಿಗಳು ಶಿಕ್ಷಣದ ಜತೆಗೆ ಸಂಸ್ಕಾರವನ್ನು ಮೈಗೂಡಿಸಿಕೊಳ್ಳಬೇಕು ಎಂದು ನಿವೃತ್ತ ಶಿಕ್ಷಕ ಎಸ್.ಜಿ. ಆನಂದಪ್ಪನವರು ಹೇಳಿದರು.
ಪಟ್ಟಣದ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ಆಯೋಜಿಸಿದ್ದ 7ನೇ ತರಗತಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಹಾಗೂ ಸತ್ಕಾರ ಸಮಾರಂಭದಲ್ಲಿ ಮಾತನಾಡಿದ ಅವರು, ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿಗಳ ಕಲಿಕೆಗೆ ಪೂರಕ ವಾತಾವರಣ ನಿರ್ಮಾಣವಾಗಿದ್ದು, ಪರಿಶ್ರಮದಿಂದ ಓದಿ ಗುರಿ ತಲುಪಬೇಕು ಎಂದರು.
ರಾಷ್ಟ್ರ ಪ್ರಶಸ್ತಿ ವಿಜೇತ ನಿವೃತ್ತ ಶಿಕ್ಷಕ ನಿಂಗಪ್ಪ ಮೆಣಸಿನಕಾಯಿ ಮಾತನಾಡಿ, ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಶಿಕ್ಷಣ ಜತೆಗೆ ವಿವಿಧ ಚಟುವಟಿಕೆಗಳಲ್ಲಿ ಭಾಗವಹಿಸಿದಾಗ ಮಾತ್ರ ಯಶಸ್ಸು ಸಾಧಿಸಲು ಸಾಧ್ಯ ಎಂದರು.
ಮುಖ್ಯಶಿಕ್ಷಕ ಬಸವರಾಜ ಭಜಂತ್ರಿ ಶಾಲೆಯಲ್ಲಿ ಆಯೋಜಿಸಿದ್ದ ಶೈಕ್ಷಣಿಕ ಕಾರ್ಯಕ್ರಮಗಳ ವಿವರ ನೀಡಿದರು.
ಗ್ರಾಪಂ ಅಧ್ಯಕ್ಷೆ ಹುಲಗವ್ವ ಮಾದರ ಉದ್ಘಾಟಿಸಿದರು. ಎಸ್‌ಡಿಎಂಸಿ ಅಧ್ಯಕ್ಷ ಸಂಗಪ್ಪ ಸಿಂಗಾಡಿ ಅಧ್ಯಕ್ಷತೆ ವಹಿಸಿದ್ದರು. ಗಂಗಮ್ಮ ಹುಚನೂರ, ಅಂದನಗೌಡ ಗೌಡರ, ಗುರಪ್ಪ ಹುಚನೂರ, ಮುತ್ತಪ್ಪ ಬಳಿಗಾರ, ನಿವೃತ್ತ ಶಿಕ್ಷಕ ಸುರೇಶ ನಾಗೂರ ಮತ್ತಿತರರಿದ್ದರು.