ಜಿಲ್ಲೆ

ಖೋ-ಖೋದಿಂದ ಮಾನಸಿಕ ಸಿದ್ಧತೆ ಹೆಚ್ಚಿಸಲು ಸಾಧ್ಯ: ಡಾ.ಜೆರಾಲ್ಡ್ ಡಿಸೋಜ ಅಭಿಮತ

ಸೌಮ್ಯ ಆರ್

ವಿಜಯವಾಣಿ ಸುದ್ದಿಜಾಲ ಮೂಡುಬಿದಿರೆ

ದೇಸಿ ಕ್ರೀಡೆ ಖೋ-ಖೋ ಎಲ್ಲ ಕ್ರೀಡೆಗಳಿಗೆ ಅಡಿಪಾಯವಿದ್ದಂತೆ. ಈ ಆಟವನ್ನು ಪ್ರೋತ್ಸಾಹಿಸುವ ಮೂಲಕ, ಯುವಜನತೆಯಲ್ಲಿ ಶಾರೀರಿಕ ಹಾಗೂ ಮಾನಸಿಕ ಸಿದ್ಧತೆಯನ್ನು ಹೆಚ್ಚಿಸಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ನಿರ್ದೇಶಕ ಡಾ.ಜೆರಾಲ್ಡ್ ಡಿಸೋಜ ಹೇಳಿದರು.

ಮಂಗಳೂರು ವಿಶ್ವವಿದ್ಯಾಲಯ ಮತ್ತು ಆಳ್ವಾಸ್ ದೈಹಿಕ ಶಿಕ್ಷಣ ಕಾಲೇಜಿನ ಜಂಟಿ ಆಶ್ರಯದಲ್ಲಿ ಅಂತರ್ ಕಾಲೇಜು ಪುರುಷ ಮತ್ತು ಮಹಿಳೆಯರ ಖೋ- ಖೋ ಟೂರ್ನಮೆಂಟ್ ಉದ್ಘಾಟಿಸಿ ಅವರು ಮಾತನಾಡಿದರು.

ಆಳ್ವಾಸ್ ಕಾಲೇಜಿನ ಟ್ರಸ್ಟಿ ವಿವೇಕ್ ಆಳ್ವ ಮಾತನಾಡಿ, ಹಿಂದೆಲ್ಲ ದೇಸಿ ಕ್ರೀಡೆ ಖೋ-ಖೋ ಆಟವು ಗ್ರಾಮೀಣ ಪ್ರದೇಶದ ಶಾಲಾ ವಿದ್ಯಾರ್ಥಿಗಳಿಗೆ ಮೀಸಲಾಗಿತ್ತು. ಆದರೆ ಇಂದು ಕ್ರೀಡೆಯ ಬೆಳವಣಿಗೆ ದೇಸಿ ಕ್ರೀಡೆಯನ್ನು ರಾಷ್ಟ್ರೀಯ ಮಟ್ಟದಲ್ಲಿ ಮನ್ನಣೆ ಗಳಿಸುವತ್ತ ಕೊಂಡೊಯ್ಯುತ್ತಿರುವುದು ಬಹಳ ಹೆಮ್ಮೆಯ ಸಂಗತಿ. ಕ್ರೀಡಾಕ್ಷೇತ್ರಕ್ಕೆ ಮಂಗಳೂರು ವಿಶ್ವವಿದ್ಯಾಲಯ ನೀಡುತ್ತಿರುವ ಪ್ರೋತ್ಸಾಹ, ಸಹಕಾರ ಶ್ಲಾಘನೀಯ. ಮುಂದಿನ ದಿನಗಳಲ್ಲಿ ಮತ್ತಷ್ಟು ಕ್ರೀಡಾಪಟುಗಳಿಗೆ, ಕ್ರೀಡಾ ಪೋಷಕರಿಗೆ ಇನ್ನೂ ಹೆಚ್ಚಿನ ಪ್ರೋತ್ಸಾಹ ದೊರಕುವಂತಾಗಲಿ ಎಂದರು.

ಖೋ-ಖೋ ಕ್ರೀಡೆಯಲ್ಲಿ ರಾಷ್ಟ್ರಮಟ್ಟದಲ್ಲಿ ಸಾಧನೆ ಮಾಡಿದ ಸಂಸ್ಥೆಯ ಪ್ರತಿಭಾನ್ವಿತ ಕ್ರೀಡಾಪಟುಗಳಾದ ಮರಿಯಪ್ಪ, ದಿವ್ಯ ಕೆ.ಆರ್. ಮತ್ತು ನಿಖಿಲ್ ಬಿ. ಅವರನ್ನು ಗೌರವಿಸಲಾಯಿತು. ಮಂಗಳೂರು ವಿವಿ ದೈಹಿಕ ಶಿಕ್ಷಣ ವಿಭಾಗದ ಸಹಾಯಕ ನಿರ್ದೇಶಕ ಪ್ರಸನ್ನ ಕುಮಾರ್ ಬಿ.ಕೆ., ಆಳ್ವಾಸ್ ದೈಹಿಕ ಶಿಕ್ಷಣ ಕಾಲೇಜಿನ ಪ್ರಾಂಶುಪಾಲ ಡಾ.ಮಧು.ಜಿ.ಆರ್. ಇದ್ದರು.

ದೈಹಿಕ ಶಿಕ್ಷಣ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಡಾ.ಉದಯಕುಮಾರ್ ವಂದಿಸಿದರು. ವಿದ್ಯಾರ್ಥಿನಿ ನಿಯಾ ಸೆಬಾಸ್ಟಿಯನ್ ಕಾರ್ಯಕ್ರಮ ನಿರೂಪಿಸಿದರು. ಪುರುಷರ ವಿಭಾಗದಿಂದ 18 ಮತ್ತು ಮಹಿಳೆಯರ ವಿಭಾಗದಿಂದ 18 ತಂಡಗಳು ಭಾಗವಹಿಸಿದ್ದವು.