ಮಂಡ್ಯ: ಶಿಕ್ಷಣ, ಉದ್ಯೋಗ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಮಹಿಳೆಯರ ಸಾಧನೆ ನಿಜಕ್ಕೂ ಅಪಾರ. ಪ್ರತಿ ಕ್ಷೇತ್ರದಲ್ಲೂ ತಮ್ಮ ಛಾಪು ಮೂಡಿಸುತ್ತಿರುವುದು ಶ್ಲಾಘನೀಯ ಎಂದು ತಹಸೀಲ್ದಾರ್ ಡಾ.ಶಿವಕುಮಾರ್ ಬಿರಾದಾರ್ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಂಡ್ಯ ತಾಲೂಕು ಪಂಚಾಯಿತಿ, ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ, ಕರ್ನಾಟಕ ಗ್ರಾಮೀಣ ಜೀವನೋಪಾಯ ಸಂವರ್ಧಕ ಸಂಸ್ಥೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಯೋಗದೊಂದಿಗೆ ನಗರದ ನಾಲ್ವಡಿ ಕೃಷ್ಣರಾಜ ಒಡೆಯರ್ ಕಲಾಮಂದಿರದಲ್ಲಿ ಆಯೋಜಿಸಿದ್ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯಲ್ಲಿ ಮಾತನಾಡಿದ ಅವರು, ಸರ್ಕಾರದದಿಂದ ಮಹಿಳೆಯರಿಗೆ ನೀಡಲಾಗುವ ಸವಲತ್ತುಗಳನ್ನು ಸಮರ್ಪಕವಾಗಿ ಬಳಸಿಕೊಂಡು ಶೈಕ್ಷಣಿಕ, ಸಾಮಾಜಿಕ, ರಾಜಕೀಯ ಹಾಗೂ ಇನ್ನಿತರ ಕ್ಷೇತ್ರಗಳಲ್ಲಿ ಯಶಸ್ವಿಯಾಗಿ ಹೆಚ್ಚಿನ ಪ್ರಭಾವ ಬೀರಬೇಕು ಎಂದು ಹೇಳಿದರು.
ಆರ್ಥಿಕವಾಗಿ ಹಿಂದುಳಿದಿರುವ ಮಹಿಳೆಯರು ವಿದ್ಯಾಭ್ಯಾಸವನ್ನು ಪಡೆದುಕೊಂಡು ಸರ್ಕಾರಿ ಹುದ್ದೆ ಅಥವಾ ಖಾಸಗಿ ಉದ್ಯಮಗಳನ್ನು ಪ್ರಾರಂಭಿಸಿ. ಇದರೊಂದಿಗೆ ಆರ್ಥಿಕವಾಗಿ ಸದೃಢರಾಗಿ ಇನ್ನಿತರ ಮಹಿಳೆಯರಿಗೆ ದಾರಿದೀಪವಾಗಬೇಕು ಎಂದರು.
ಸಮಾರಂಭ ಉದ್ಘಾಟಿಸಿದ ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಜಿಲ್ಲಾ ಸಭಾಧ್ಯಕ್ಷೆ ಡಾ.ಮೀರಾ ಶಿವಲಿಂಗಯ್ಯ ಮಾತನಾಡಿ, ಪ್ರತಿ ಕ್ಷೇತ್ರಗಳಲ್ಲೂ ದಾರಿ ಕಂಡುಕೊಂಡು ಸಾಧನೆ ಮಾಡುತ್ತಿರುವ ಮಹಿಳೆಯರು ಇಂದು ಸ್ಪೂರ್ತಿಯ ಸಂಕೇತವಾಗಿದ್ದಾರೆ. ಮಹಿಳೆಯರು ಒಂದಾಗಿ ಸಾಮಾಜಿಕ ಪಿಡುಗುಗಳಾದ ವರದಕ್ಷಿಣೆ, ಬಾಲ್ಯ ವಿವಾಹ ಮತ್ತು ಹೆಣ್ಣು ಭ್ರೂಣಹತ್ಯೆ ವಿರುದ್ಧ ಹೋರಾಡಬೇಕು. ಮಹಿಳೆಯರಿಗೆ ಮಹಿಳೆಯರು ಒತ್ತಾಸೆಯಾಗಿ ನಿಲ್ಲಬೇಕು. ಆಗಿದ್ದಾಗ ಮಾತ್ರ ಮಹಿಳೆಯರ ಮೇಲಿನ ದೌರ್ಜನ್ಯಗಳನ್ನು ತಡೆಗಟ್ಟಲು ಸಾಧ್ಯ ಎಂದು ಕಿವಿಮಾತು ಹೇಳಿದರು.
ಸರ್ಕಾರಿ ನೌಕರರ ಜಿಲ್ಲಾಧ್ಯಕ್ಷ ಕೆ.ನಾಗೇಶ್ ಮಾತನಾಡಿ, ಜಿಲ್ಲೆಯ ಪ್ರತಿ ತಾಲೂಕಿನಲ್ಲೂ ಅಂತಾರಾಷ್ಟ್ರೀಯ ಮಹಿಳಾ ದಿನವನ್ನು ಆಚರಿಸುತ್ತಿರುವುದು ಹೆಮ್ಮೆಯ ಸಂಗತಿ. ಇಂದು ನಾವು ಯಾರಿಗೂ ಕಡಿಮೆ ಇಲ್ಲ ಎನ್ನುವಂತೆ ಎಲ್ಲ ಕ್ಷೇತ್ರದಲ್ಲೂ ಸರಿಸಮಾನವಾಗಿ ಪುರುಷರನ್ನು ಮೀರಿಸುವಂತೆ ಹೆಸರು ಮಾಡುತ್ತಿರುವುದು ದೇಶವೇ ಮೆಚ್ಚುವಂತದ್ದು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಗ್ಯಾರಂಟಿ ಯೋಜನೆ ಮಂಡ್ಯ ತಾಲೂಕು ಅಧ್ಯಕ್ಷ ರುದ್ರಪ್ಪ, ತಾಪಂ ಇಒ ಎಂ.ಎಸ್.ವೀಣಾ, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಾದ ಕುಮಾರಸ್ವಾಮಿ, ಅಂಬಿಕಾ ಇತರರಿದ್ದರು. ಮಹಿಳಾ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ವಿವಿಧ ಕ್ರೀಡಾಕೂಟದಲ್ಲಿ ವಿಜೇತರಾದ ಮಹಿಳೆಯರಿಗೆ ಬಹುಮಾನ ನೀಡಲಾಯಿತು.