ಜಿಲ್ಲೆ

ಇಂದಿನಿಂದ ಹದಿನೈದು ದಿನ ನಾಲೆಗೆ ನೀರು: ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿಕೆ

ಮಂಡ್ಯ: ಕಳೆದ ಹತ್ತು ದಿನದಿಂದ ಕಾವೇರಿ ಜಲಾನಯನ ಪ್ರದೇಶದಲ್ಲಿ ಉತ್ತಮವಾಗಿ ಮಳೆಯಾಗುತ್ತಿರುವ ಹಿನ್ನಲೆ ಕೆಆರ್‌ಎಸ್ ಅಣೆಕಟ್ಟೆಯಲ್ಲಿ 100 ಅಡಿ ನೀರು ತುಂಬಿದೆ. ಅದರಂತೆ ಜಿಲ್ಲೆಯ ರೈತರು ಹಾಗೂ ಶಾಸಕರ ಒತ್ತಾಯದ ಮೇರೆಗೆ ಜು.8ರ ಸಂಜೆಯಿಂದ ಹತ್ತು ದಿನ ವಿಶ್ವೇಶ್ವರಯ್ಯ ನಾಲೆಗೆ ನೀರು ಹರಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದರು.

ಬೆಂಗಳೂರಿನಲ್ಲಿ ಕೃಷ್ಣರಾಜಸಾಗರ ಜಲಾಶಯದ ಅಚ್ಚುಕಟ್ಟು ಪ್ರದೇಶದ ನೀರಾವರಿ ಸಲಹಾ ಸಮಿತಿ ಸಭೆಯ ನಂತರ ಮಾತನಾಡಿದ ಅವರು, ಸಾಮಾನ್ಯವಾಗಿ ಪ್ರತಿವರ್ಷ ಕೆಆರ್‌ಎಸ್ ಅಣೆಕಟ್ಟಿನಿಂದ ಜುಲೈ ಎರಡನೇ ವಾರದಲ್ಲಿ ನಾಲೆಗೆ ನೀರು ಹರಿಸಲಾಗುತ್ತಿತ್ತು. ಆದರೆ ಈ ಬಾರಿ ಮಾರ್ಚ್‌ನಲ್ಲಿ ನಾಲೆಗೆ ನೀರು ಹರಿಸದ ಹಿನ್ನಲೆಯಲ್ಲಿ ಜು.8ರಿಂದ ನೀರು ಹರಿಸಲಾಗುವುದು ಎಂದು ಹೇಳಿದರು.

ಕೆರೆ ಕಟ್ಟೆ ತುಂಬಿಸಲು ಹಾಗೂ ಜಾನುವಾರುಗಳ ಹಿತದೃಷ್ಟಿಯಿಂದ ನಾಲೆಗೆ ನೀರು ಹರಿಸಲು ಸಭೆಯಲ್ಲಿ ತೀರ್ಮಾನಿಸಲಾಗಿದೆ. ಮುಂದಿನ 10 ದಿನದ ನಂತರ ಮುಂಗಾರು ಮಳೆಯ ಪರಿಸ್ಥಿತಿ ಮತ್ತು ಕೆಆರ್‌ಎಸ್ ಅಣೆಕಟ್ಟಿನ ಒಳಹರಿವು ಗಮನಿಸಿಕೊಂಡು ಬೆಳೆಗಳಿಗೂ ನೀರು ಹರಿಸಲು ತೀರ್ಮಾನ ತೆಗೆದುಕೊಳ್ಳಲಾಗುವುದು. ವಿಶ್ವೇಶ್ವರಯ್ಯ ನಾಲೆಯ 36 ಕಿ.ಮೀ ಕಾಮಗಾರಿ ಈಗಾಗಲೇ ಮುಕ್ತಾಯವಾಗಿದ್ದು, ಬಾಕಿ 16 ಕಿ.ಮೀ ಕಾಮಗಾರಿ ನಾಲೆಗೆ ನೀರು ಹರಿಸುವುದನ್ನು ನಿಲ್ಲಿಸಿದ ನಂತರ ಪೂರ್ಣಗೊಳಿಸಲಾಗುವುದು. ಇನ್ನು ಟ್ರಯಲ್ ಬ್ಲಾಸ್ಟ್ ಬಗ್ಗೆ ಸಿಎಂ ಸಿದ್ದರಾಮಯ್ಯ ಹಾಗೂ ಹೈಕೋರ್ಟ್ ಅಡ್ವೋಕೆಟ್ ಜನರಲ್ ಜತೆ ಚರ್ಚೆ ಮಾಡಿ ಜು.15ರೊಳಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ವಿವರಿಸಿದರು.

ಸಭೆಯಲ್ಲಿ ಶಾಸಕರಾದ ಪಿ.ಎಂ.ನರೇಂದ್ರಸ್ವಾಮಿ, ರಮೇಶ ಬಂಡಿಸಿದ್ದೇಗೌಡ, ಕೆ.ಎಂ.ಉದಯ್, ರವಿಕುಮಾರ್ ಗಣಿಗ, ವಿಧಾನ ಪರಿಷತ್ ಸದಸ್ಯರಾದ ದಿನೇಶ್ ಗೂಳಿಗೌಡ, ಮಧು ಮಾದೇಗೌಡ, ಮಂಜೇಗೌಡ, ಜಿಲ್ಲಾಧಿಕಾರಿ ಡಾ.ಕುಮಾರ ಇತರರಿದ್ದರು.