ಮೈಸೂರು: ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲೂ ಕನ್ನಡ ಲಿಪಿ ಹೆಚ್ಚು ಬಳಕೆ ಆಗುತ್ತಿರುವುದು ಸಂತಸದ ಬೆಳವಣಿಗೆ. ವಿಜ್ಞಾನ- ತಂತ್ರಜ್ಞಾನದ ಜತೆಗೆ ಕನ್ನಡ ಬಳಸಿ, ಬೆಳೆಸಬೇಕಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಹೇಳಿದರು.
ನಗರದ ಓವೆಲ್ ಮೆದಾನದಲ್ಲಿ ಬುಧವಾರ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯಿತಿ ವತಿಯಿಂದ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಆಟೋ, ಟ್ಯಾಕ್ಸಿ ಬಾಡಿಗೆ ಸೇವೆ ನೀಡುವ ಓಲೋ, ಜೊಮಾಟೊದಲ್ಲಿಯೂ ಕನ್ನಡ ಬಳಸಲು ಅವಕಾಶವಿದೆ. ಇಲ್ಲಿ ಕನ್ನಡದಲ್ಲೇ ವ್ಯವಹರಿಸುವ ಮೂಲಕ ನಮ್ಮ ನೆಲೆದ ಭಾಷೆಗೆ ಹೆಚ್ಚಿನ ಪ್ರಾಧಾನ್ಯತೆ ನೀಡಬೇಕು. ಕನ್ನಡವನ್ನು ಯುವಕರು ಒಲವಿನ ಭಾಷೆಯಾಗಿ ಬಳಸಬೇಕು ಎಂದು ಹೇಳಿದರು.
ಕನ್ನಡ ಭಾಷೆಯ ಶ್ರೀಮಂತಗೊಳಿಸುವಿಕೆ ಸೇರಿದಂತೆ ಸಾಹಿತ್ಯ ಹಾಗೂ ಸಂಸ್ಕೃತಿ ಉತ್ತೇಜನಕ್ಕೂ ಸರ್ಕಾರ ಸಾಕಷ್ಟು ಒತ್ತು ನೀಡಿದೆ. ತಂತ್ರಜ್ಞಾನದ ವೇಗದಲ್ಲಿ ಹಾಗೂ ಇಂದಿನ ಡಿಜಿಟಲ್ ಲೋಕದಲ್ಲಿ ಕನ್ನಡ ಹಿಂದುಳಿಯದಂತೆ ಅನೇಕ ಕಾರ್ಯಕ್ರಮ ಜಾರಿಗೊಳಿಸಿದೆ. ಕನ್ನಡದಲ್ಲಿ ಯೂನಿಕೋಡ್ ಅಕ್ಷರ ವಿನ್ಯಾಸ, ಪರಿವರ್ತಕಗಳು, ಚರವಾಣಿ ಹಾಗೂ ಬ್ರೈಲ್ ಲಿಪಿಯಲ್ಲಿ ಕನ್ನಡ ಬಳಕೆ ಮತ್ತಿತರ ತಂತ್ರಾಂಶ ಅಭಿವೃದ್ಧಿಪಡಿಸಿದೆ ಎಂದರು.
ಸಾಹಿತ್ಯ, ಸಂಸ್ಕೃತಿ, ಸಂಗೀತ, ಸದಭಿರುಚಿ, ಸಂಪ್ರದಾಯ, ಸಂಸ್ಕಾರ… ಹೀಗೆ ಯಾವುದೇ ಕ್ಷೇತ್ರದಲ್ಲೂ ಕನ್ನಡಿಗರು ಕಡಿಮೆ ಇಲ್ಲ. ಇಂತಹ ಪವಿತ್ರ ನೆಲದಲ್ಲಿ ಜನಿಸಿದ ನಾವೆಲ್ಲರೂ ಪುಣ್ಯವಂತರು. ಕನ್ನಡ ಪ್ರಾದೇಶಿಕ ಅಸ್ಮಿತೆಯನ್ನು ಉಳಿಸಿಕೊಂಡಿದೆ. ಈ ಮಣ್ಣು, ನುಡಿಗೆ ಸೊಗಸು, ಸೌಂದರ್ಯ, ಬೆಡಗಿದೆ. ಆದ್ದರಿಂದ ಪ್ರಾದೇಶಿಕ ಸಂಸ್ಕೃತಿ ಎತ್ತಿ ಹಿಡಿಯುವ ಕೆಲಸ ಮಾಡಬೇಕಿದೆ. ಪ್ರತಿಯೊಬ್ಬರೂ ತಮ್ಮ ಮಾತೃಭಾಷೆಯನ್ನು ಗೌರವಿಸಬೇಕು. ನಮ್ಮ ನಾಡು, ನುಡಿ, ಸಂಸ್ಕೃತಿಗೆ ಸುಮಾರು 2 ಸಾವಿರ ವರ್ಷಗಳ ಇತಿಹಾಸವಿದೆ ಎಂದರು.
ದೇಶದ ಸಾಹಿತ್ಯ ಮತ್ತು ಭಾಷಾ ಲೋಕದಲ್ಲಿ ಕನ್ನಡ ಹಾಗೂ ಕರ್ನಾಟಕ ಅತ್ಯುನ್ನತವಾಗಿ ಬಣ್ಣಿಸಲ್ಪಟ್ಟಿದೆ. ಕನ್ನಡ ಹಲವು ಜ್ಞಾನಪೀಠ ಪ್ರಶಸ್ತಿ ಪಡೆದಿರುವುದು ನಮ್ಮ ಸಾಹಿತ್ಯ, ಭಾಷಾ ಶ್ರೀಮಂತಿಕೆಯನ್ನು ತೋರಿಸುತ್ತದೆ. ಆಡಳಿತದ ಎಲ್ಲ ಕ್ಷೇತ್ರದಲ್ಲಿಯೂ ಕನ್ನಡ ಬಳಕೆಗೆ ಸರ್ಕಾರ ಪ್ರಾಮುಖ್ಯತೆ ನೀಡಿದೆ. ಇದನ್ನು ಸಂಪೂರ್ಣವಾಗಿ ಜಾರಿಗೊಳಿಸುವಲ್ಲಿ ನಾವೆಲ್ಲರೂ ಮುಂದಾಗಬೇಕಿದೆ ಎಂದು ಹೇಳಿದರು.
ಕರ್ನಾಟಕದ ಏಕೀಕರಣ ಒಂದು ಭವ್ಯ ಇತಿಹಾಸ. 1956ನೇ ಇಸವಿಗೂ ಮೊದಲು ಸುಮಾರು 20 ವಿಭಿನ್ನ ಆಳ್ವಿಕೆಗೆ ಒಳಪಟ್ಟಿದ್ದ ಕರ್ನಾಟಕದ ಭೂ ಪ್ರದೇಶಗಳು ಒಂದುಗೂಡಿ ವಿಶಾಲ ಕರ್ನಾಟಕವಾದದ್ದು ರೋಮಾಂಚನ ಮೂಡಿಸುತ್ತದೆ. ಬ್ರಿಟಿಷರ ಆಳ್ವಿಕೆಗೆ ಒಳಪಟ್ಟಿದ್ದ ಮುಂಬೈ ಪ್ರಾಂತ್ಯ, ಮದ್ರಾಸ್ ಪ್ರಾಂತ್ಯ, ರಾಜಮನೆತನಗಳ ಆಳ್ವಿಕೆಯಲ್ಲಿದ್ದ ಮೈಸೂರು ಪ್ರಾಂತ್ಯ, ನಿಜಾಮರ ಆಳ್ವಿಕೆಯಲ್ಲಿದ್ದ ಹೈದರಾಬಾದ್ ಕರ್ನಾಟಕ ಹಾಗೂ ಕೊಡಗು ಪ್ರಾಂತ್ಯಗಳನ್ನು ಒಳಗೊಂಡ ಏಕೀಕೃತ ಮೈಸೂರು ರಾಜ್ಯ 1956ರಲ್ಲಿ ಉದಯವಾಯಿತು. ಮೈಸೂರು ರಾಜ್ಯವನ್ನು 1973 ನ.1ರಂದು ‘ಕರ್ನಾಟಕ’ ಎಂದು ಮರು ನಾಮಕರಣ ಮಾಡಲಾಯಿತು. ಇದಕ್ಕೆ ಕಾರಣೀಭೂತರಾದ ಅಂದಿನ ಮುಖ್ಯಮಂತ್ರಿ ಡಿ.ದೇವರಾಜ ಅರಸ್ ಅವರನ್ನು ನಮ್ಮ ಸರ್ಕಾರ ಕೃತಜ್ಞತಾ ಪೂರ್ವಕವಾಗಿ ಸ್ಮರಿಸುತ್ತದೆ ಎಂದರು.
ಕನ್ನಡ ರಾಜ್ಯೋತ್ಸವದ ಹಿಂದೆ ನಾಡಿನ ಏಕೀಕರಣಕ್ಕಾಗಿ ಶ್ರಮಿಸಿದ ಮಹನೀಯರ ಹೋರಾಟವಿದೆ. ಸಹಸ್ರಾರು ಕನ್ನಡಿಗರು ಆಡಳಿತಾತ್ಮಕ ಹಾಗೂ ಭಾವನಾತ್ಮಕ ಐಕ್ಯತೆಗಾಗಿ ಹಗಲಿರುಳು ದುಡಿದಿದ್ದಾರೆ. ಆ ಮಹಾನ್ ಚೇತನಗಳನ್ನು ಇಂದು ಕೃತಜ್ಞತೆಯಿಂದ ಸ್ಮರಿಸುತ್ತೇನೆ. ಕನ್ನಡ ಸಾರಸ್ವತ ಲೋಕ 8 ಜ್ಞಾನಪೀಠ ಪ್ರಶಸ್ತಿಯನ್ನು ತನ್ನ ಮುಡಿಗೇರಿಸಿಕೊಂಡಿದೆ. ಕುವೆಂಪು, ಬೇಂದ್ರೆ, ಕಾರಂತ, ಮಾಸ್ತಿ, ಗೋಕಾಕ್ ಅವರಂತಹ ಮಹನೀಯರು ಕನ್ನಡ ಸಾಹಿತ್ಯವನ್ನು ಶ್ರೀಮಂತಗೊಳಿಸಿದ್ದಾರೆ. ಹೀಗೆ ಸಾಹಿತ್ಯ, ಸಂಸ್ಕೃತಿ, ಸಂಗೀತ, ಸದಭಿರುಚಿ, ಸಂಪ್ರದಾಯ, ಸಂಸ್ಕಾರ ಯಾವುದೇ ಕ್ಷೇತ್ರದಲ್ಲೂ ನಾವು ಕಡಿಮೆಯಿಲ್ಲ ಎಂದರು.