ಮಡಿಕೇರಿ: ಶಾಲಾ ಕಾಲೇಜು ವಿದ್ಯಾರ್ಥಿಗಳಲ್ಲಿ ಕುಷ್ಠರೋಗದ ಬಗ್ಗೆ ಹೆಚ್ಚಿನ ಅರಿವು ಮೂಡಿಸುವುದು ಅಗತ್ಯ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಎಂ.ಕೆ.ಸತೀಶ್ ಕುಮಾರ್ ಹೇಳಿದರು.
ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಸ್ಪರ್ಶ್ ಕುಷ್ಠರೋಗ ಜಾಗೃತಿ ಆಂದೋಲನಾ ಕಾರ್ಯಕ್ರಮ ಅನುಷ್ಠಾನದ ಬಗ್ಗೆ ನಡೆದ ಸಭೆಯಲ್ಲಿ ಕರಪತ್ರ ಬಿಡುಗಡೆ ಮಾಡಿ ಮಾತನಾಡಿದರು.
ಕುಷ್ಠರೋಗದ ಬಗ್ಗೆ ಸಾರ್ವಜನಿಕರಲ್ಲಿ ಹೆಚ್ಚಿನ ಅರಿವು ಮೂಡಿಸುವ ಸಲುವಾಗಿ ವಿವಿಧ ಕಾರ್ಯಕ್ರಮ ನಡೆಸಲಾಗಿದೆ. ಆದರೂ, ಶಾಲಾ ಕಾಲೇಜು ವಿದ್ಯಾರ್ಥಿಗಳಲ್ಲಿ ಕುಷ್ಠರೋಗದ ಬಗ್ಗೆ ಹೆಚ್ಚಿನ ಅರಿವು ಮೂಡಿಸುವುದು ಅಗತ್ಯ ಎಂದು ತಿಳಿಸಿದರು.
ಜಿಲ್ಲಾ ಕುಷ್ಠರೋಗ ನಿರ್ಮೂಲನಾ ಕಾರ್ಯಕ್ರಮ ಅಧಿಕಾರಿ ಡಾ.ಎನ್.ಆನಂದ್ ಮಾತನಾಡಿ, ಜ.೩೦ ರಿಂದ ಫೆ.೧೩ ರವರೆಗೆ ಜಿಲ್ಲಾದ್ಯಂತ ಸ್ಪರ್ಶ್ ಕುಷ್ಠರೋಗ ಜಾಗೃತಿ ಅಭಿಯಾನ ಕಾರ್ಯಕ್ರಮ ನಡೆಯಲಿದೆ. ಪ್ರತಿ ಗ್ರಾಮಗಳಲ್ಲಿ ಹಾಗೂ ನಗರ ಪ್ರದೇಶಗಳಲ್ಲಿ ಈ ಬಗ್ಗೆ ಅರಿವು ಮೂಡಿಸಲಾಗುತ್ತಿದೆ. ಜಿಲ್ಲೆಯ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ರಸಪ್ರಶ್ನೆ ಕಾರ್ಯಕ್ರಮ ಹಮ್ಮಿಕೊಂಡು ವಿದ್ಯಾರ್ಥಿಗಳಲ್ಲಿ ಕುಷ್ಠರೋಗದ ಬಗ್ಗೆ ಅರಿವು ಮೂಡಿಸಲಾಗುವುದು ಎಂದರು.
ಕೊಡಗು ಜಿಲ್ಲೆಯಲ್ಲಿ ಒಟ್ಟು ೫ ಎಂ.ಬಿ ಪ್ರಕರಣಗಳಿದ್ದು ಇವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಸೆಲ್ಫ್‌ಕೇರ್ ಕಿಟ್ ಹಾಗೂ ಎಂ.ಸಿ.ಆರ್ ಫೂಟ್‌ವೇರ್‌ಗಳನ್ನು ಸಹ ನೀಡಲಾಗಿದೆ. ವ್ಯಾಪಕ ಪ್ರಚಾರ ಕೈಗೊಳ್ಳಲು ಆರೋಗ್ಯ ಇಲಾಖೆಯ ಪ್ರಾಥಮಿಕ ಆರೋಗ್ಯ ಸುರಕ್ಷಣಾಧಿಕಾರಿಗಳು, ಸಮುದಾಯ ಆರೋಗ್ಯಾಧಿಕಾರಿಗಳು ಹಾಗೂ ಆಶಾ ಕಾರ್ಯಕರ್ತೆಯರಿಗೆ ಮಾಹಿತಿ ನೀಡಲಾಗುತ್ತದೆ ಎಂದು ತಿಳಿಸಿದರು.
ಕುಷ್ಠರೋಗ ಸಾಂಕ್ರಾಮಿಕ ರೋಗವಾಗಿದ್ದು, ಸಾರ್ವಜನಿಕರು ಇದಕ್ಕೆ ಭಯ ಪಡುವ ಅಗತ್ಯವಿಲ್ಲ. ಈ ಜಾಗೃತಿ ಅಭಿಯಾನದ ಸಂದರ್ಭದಲ್ಲಿ ಶಾಲಾ ಮಕ್ಕಳ ತಪಾಸಣೆ, ಉಪ ಆರೋಗ್ಯ ಕೇಂದ್ರ ಮೂಲಕ ಗ್ರಾಮದಲ್ಲಿ ಜಾಗೃತಿ ಮೂಡಿಸುವುದಲ್ಲದೇ, ಕುಷ್ಠರೋಗ ನಿರ್ಮೂಲನೆಯ ಕುರಿತು ಎಲ್ಲರಿಗೂ ಪ್ರತಿಜ್ಞಾ ವಿಧಿ ಭೋದಿಸಲಾಗುವುದು ಎಂದರು.
ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಜಿ.ಧನರಾಜು, ಆರೋಗ್ಯ ಇಲಾಖೆ ಸಿಬ್ಬಂದಿಗಳು ಹಾಜರಿದ್ದರು.