ತುಮಕೂರು: ಕರೊನಾ ಸೋಂಕು ದೃಢಪಟ್ಟು ಹೋಂ ಕ್ವಾರಂಟೈನ್‌ನಲ್ಲಿರುವ ಸೋಂಕಿತರನ್ನು ಕಡ್ಡಾಯವಾಗಿ ಕೋವಿಡ್ ಕೇರ್ ಸೆಂಟರ್‌ಗೆ ಸ್ಥಳಾಂತರಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದರು.
ಅಧಿಕಾರಿಗಳು ಸಮನ್ವಯ ಸಾಧಿಸುವ ಮೂಲಕ ಕರೊನಾ ನಿಯಂತ್ರಿಸುವ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸಬೇಕು, ಸಮರ್ಪಕ ಚಿಕಿತ್ಸೆ ನೀಡಬೇಕು, ಮಾರ್ಗಸೂಚಿಗಳ ಅನ್ವಯ ಆಕ್ಸಿಜನ್ ಮತ್ತು ರೆಮ್‌ಡೆಸಿವಿರ್ ನೀಡಬೇಕು. ಸೋಂಕಿತರನ್ನು ಹೊರತುಪಡಿಸಿ ಉಳಿದವರನ್ನು (ಮನೆಯವರನ್ನೂ ಸೇರಿ) ಕೋವಿಡ್ ಕೇರ್ ಸೆಂಟರ್ ಪ್ರವೇಶಕ್ಕೆ ಅವಕಾಶ ನೀಡಬಾರದು ಎಂದು ಸೂಚಿಸಿದರು.
ಸಂಸದ ಜಿ.ಎಸ್.ಬಸವರಾಜು ಮಾತನಾಡಿ, ತಾಲೂಕುವಾರು ಕೋವಿಡ್ ನಿಯಂತ್ರಣ ಮತ್ತು ಚಿಕಿತ್ಸಾ ಕ್ರಮಗಳ ಬಗ್ಗೆ ಸವಿಸ್ತಾರವಾಗಿ ಪರಿಶೀಲನೆ ನಡೆಸಿದರು. ಆಕ್ಸಿಜನ್ ಮತ್ತು ರೆಮ್‌ಡೆಸಿವಿರ್ ಪೂರೈಕೆ ಬಗ್ಗೆಯೂ ಸಂಪೂರ್ಣ ವಾಹಿತಿ ಪಡೆದು, ಕೊರತೆಯಾಗದಂತೆ ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ಪೊಲೀಸರ ಸಹಕಾರ ಪಡೆದು ಕೊರೋನಾ ನಿಯಂತ್ರಣ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಗುಬ್ಬಿ ತಾಲೂಕಿನ ಕೆಲವು ಕಡೆ ಜಾತ್ರೆ ಮಾಡಿದರೂ ಕ್ರಮ ಕೈಗೊಂಡಿಲ್ಲ. ಕಡ್ಡಾಯವಾಗಿ ಜಾತ್ರೆ ನಿಷೇಧ ಮಾಡದಿದ್ದರೆ ತಹಸೀಲ್ದಾರ್‌ಗಳನ್ನೇ ನೇರ ಹೊಣೆ ಮಾಡಿ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ಸಂಸದ ಎ.ನಾರಾಯಣಸ್ವಾಮಿ ಮಾತನಾಡಿ, ಹೋಂ ಕ್ವಾರಂಟೈನ್‌ನಲ್ಲಿರುವ ಸೋಂಕಿತರ ಬಗ್ಗೆ ಹೆಚ್ಚು ಕಾಳಜಿ ವಹಿಸಬೇಕು. ಹೋಂ ಕ್ವಾರಂಟೈನ್ ನಲ್ಲಿರುವ ಸೋಂಕಿತರ ಮನೆಯವರೆಲ್ಲರನ್ನೂ ಕೋವಿಡ್ ಪರೀಕ್ಷೆಗೊಳಪಡಿಸಬೇಕು, ಸೋಂಕಿತನಿರುವ ಸುತ್ತಮುತ್ತ ನಾಲ್ಕೈದು ಪ್ರಕರಣಗಳು ಕಂಡುಬಂದರೆ ತಕ್ಷಣವೇ ಆ ಬೀದಿಯಲ್ಲಿರುವವರೆಲ್ಲರನ್ನೂ ಕೋವಿಡ್ ಪರೀಕ್ಷೆಗೊಳಪಡಿಸಬೇಕು ಎಂದರು.
ತಿಪಟೂರು ಶಾಸಕ ಬಿ.ಸಿ.ನಾಗೇಶ್ ಮಾತನಾಡಿ, ತಾಲೂಕಿನಲ್ಲಿ ಸದ್ಯಕ್ಕೆ ಆಕ್ಸಿಜನ್ ಮತ್ತು ರೆಮ್‌ಡಿಸಿವಿರ್ ಸಮಸ್ಯೆಯಿಲ್ಲ ಆದರೆ, ತಾಲೂಕಿಗೆ ಹೆಚ್ಚು ಪ್ರವಾಣದಲ್ಲಿ ಲಸಿಕೆ ಪೂರೈಕೆ ಮಾಡಬೇಕು ಎಂದು ಮನವಿ ವಾಡಿದರು.
ಮಾಜಿ ಶಾಸಕ ಡಾ.ಎಂ.ಆರ್.ಹುಲಿನಾಯ್ಕರ್, ದಿಶಾ ಸಮಿತಿ ಸದಸ್ಯ ಕುಂದರನಹಳ್ಳಿ ರಮೇಶ್, ಜಿಪಂ ಸಿಇಒ ಕೆ.ವಿದ್ಯಾಕುವಾರಿ, ಉಪವಿಭಾಗಾಧಿಕಾರಿ ಅಜಯ್, ಡಿಎಚ್‌ಒ ಡಾ.ನಾಗೇಂದ್ರಪ್ಪ, ಪಾಲಿಕೆ ಆಯುಕ್ತೆ ರೇಣುಕಾ ಇದ್ದರು.
ಜಿಲ್ಲಾ ಉಸ್ತುವಾರಿ ಸಚಿವರ ಸೂಚನೆಯಂತೆ ಹೋಂ ಕ್ವಾರಂಟೈನ್‌ನಲ್ಲಿರುವ ಸೋಂಕಿತರನ್ನು ಕೋವಿಡ್ ಕೇರ್ ಸೆಂಟರ್‌ಗೆ ಸ್ಥಳಾಂತರಿಸಲಾಗುತ್ತಿದೆ. ಹೆಚ್ಚು ಸೋಂಕಿನ ಪ್ರಕರಣಗಳಿರುವ ಪ್ರದೇಶಗಳನ್ನು ಹಾಟ್‌ಸ್ಪಾಟ್‌ಗಳೆಂದು ಗುರುತಿಸಿ ಸೋಂಕಿನ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲಾಗಿದೆ. ಆಕ್ಸಿಜನ್, ರೆಮ್ಡಿಸಿವರ್ ಕೊರತೆಯಾಗದಂತೆ ನಿಗಾವಹಿಸಲಾಗುತ್ತಿದೆ. ವೈ.ಎಸ್.ಪಾಟೀಲ ಜಿಲ್ಲಾಧಿಕಾರಿ