ಅಶ್ಲೀಲ ವಿಡಿಯೋ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಆಗ್ರಹಿಸಿ ಜೆಡಿಎಸ್ ಕಾರ್ಯಕರ್ತರು ಶಿವಮೊಗ್ಗ ಡಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಕಡಿದಾಳ್ ಗೋಪಾಲ್, ಶಾರದಾ ಪೂರ‌್ಯಾನಾಯ್ಕಾ, ಶಾರದಾ ಅಪ್ಪಾಜಿಗೌಡ, ಕೆ.ಬಿ.ಪ್ರಸನ್ನಕುಮಾರ್, ನರಸಿಂಹ ಗಂಧದಮನೆ, ದೀಪಕ್ ಸಿಂಗ್, ಗೀತಾ ಸತೀಶ್, ಸಂಜಯ್ ಕಶ್ಯಪ್, ರಾಮಕೃಷ್ಣ ಇದ್ದರು. 
ಜಿಲ್ಲೆ

ಪೆನ್‌ಡ್ರೈವ್ ಪ್ರಕರಣ ಸಿಬಿಐಗೆ ವಹಿಸಲು ಒತ್ತಾಯಿಸಿ ಜೆಡಿಎಸ್ ಪ್ರತಿಭಟನೆ

ಶಿವಮೊಗ್ಗ: ಅಶ್ಲೀಲ ವಿಡಿಯೋ ಮತ್ತು ಪೆನ್‌ಡ್ರೈವ್ ಹಂಚಿಕೆ ಪ್ರಕರಣದ ತನಿಖೆಯನ್ನು ಸಿಬಿಐಗೆ ಹಸ್ತಾಂತರಿಸಬೇಕು ಹಾಗೂ ಪೆನ್‌ಡ್ರೈವ್ ಹಂಚಿಕೆ ಕೈವಾಡದಲ್ಲಿ ಆರೋಪವಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸಬೇಕು ಎಂದು ಒತ್ತಾಯಿಸಿ ಶಿವಮೊಗ್ಗ ಜಿಲ್ಲಾ ಜೆಡಿಎಸ್ ಕಾರ್ಯಕರ್ತರು ಬುಧವಾರ ಪ್ರತಿಭಟನೆ ನಡೆಸಿದರು.

ಜಿಲ್ಲಾ ಜೆಡಿಎಸ್ ಕಚೇರಿಯಿಂದ ಪ್ರತಿಭಟನಾ ಮೆರವಣಿಗೆ ನಡೆಸಿದ ಕಾರ್ಯಕರ್ತರು, ಅಶ್ಲೀಲ ವಿಡಿಯೋ, ಪೆನ್‌ಡ್ರೈವ್ ವ್ಯಾಪಕ ಹಂಚಿಕೆ ಪ್ರಕರಣದಿಂದ ಮಹಿಳೆಯರ ಮಾನ ಮತ್ತು ಗೌರವಕ್ಕೆ ಧಕ್ಕೆಯಾಗಿದೆ. ಇದು ಅತ್ಯಂತ ಖಂಡನೀಯವಾಗಿದ್ದು, ಪೈಶಾಚಿಕ ಕೃತ್ಯ. ಇಡೀ ನಾಗರಿಕ ಸಮಾಜ ತಲೆ ತಗ್ಗಿಸುವಂತಾಗಿದೆ ಎಂದು ಕಿಡಿಕಾರಿದರು.
ರಾಜ್ಯ ಸರ್ಕಾರ ಘಟನೆಗೆ ಸಂಬಂಧಿಸಿ ವಿಶೇಷ ತನಿಖಾ ತಂಡ ರಚಿಸಿದ್ದು, ಸರ್ಕಾರದ ಹಿತಕ್ಕೆ ತಕ್ಕಂತೆ ಕೆಲಸ ಮಾಡುತ್ತಿದೆ. ಪಾರದರ್ಶಕ ಹಾಗೂ ನಿಷ್ಪಕ್ಷಪಾತ ತನಿಖೆ ನಡೆಸುತ್ತಿಲ್ಲ. ಇಡೀ ಪ್ರಕರಣವನ್ನು ದಿಕ್ಕು ತಪ್ಪಿಸುವ ರೀತಿಯಲ್ಲಿ ಕಾರ್ಯ ನಿರ್ವಹಿಸುತ್ತಿದೆ. ಎಸ್‌ಐಟಿಯಿಂದ ಪ್ರಕರಣದ ನ್ಯಾಯಯುತ ತನಿಖೆ ಸಾಧ್ಯವಿಲ್ಲ ಎಂದು ದೂರಿದರು.
ಮಹಿಳೆಯರ ಮಾನ ಹರಾಜಿಗೆ ಕಾರಣವಾಗಿರುವ ಅಶ್ಲೀಲ ವಿಡಿಯೋಗಳ ಹಂಚಿಕೆ ಮಾಡುವುದನ್ನು ತಡೆಯಲು ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಪ್ರಕರಣದಲ್ಲಿ ನೊಂದಿರುವ ಮಹಿಳೆಯರಿಗೆ ಇದರಿಂದ ಆಘಾತವಾಗಿದೆ. ಅಶ್ಲೀಲ ವಿಡಿಯೋಗಳನ್ನು ಪೆನ್‌ಡ್ರೈವ್‌ಗಳ ಮೂಲಕ ಹಂಚಿಕೆ ಮಾಡಿರುವ ಹಿಂದೆ ಡಿ.ಕೆ.ಶಿವಕುಮಾರ್ ಅವರ ಕೈವಾಡವಿದ್ದು, ಪೆನ್‌ಡ್ರೈವ್‌ಗಳನ್ನು ಹಂಚಿಕೆ ಮಾಡಿರುವ ಕಿಡಿಗೇಡಿಗಳನ್ನು ಬಂಧಿಸುವಂತೆ ನಿರ್ದೇಶನ ನೀಡಬೇಕು ಮತ್ತು ಆರೋಪವಿರುವ ಡಿ.ಕೆ.ಶಿವಕುಮಾರ್ ಅವರನ್ನು ಸಂಪುಟದಿಂದ ವಜಾಗೊಳಿಸುವ ನಿಟ್ಟಿನಲ್ಲಿ ಕೂಡಲೇ ಮಧ್ಯೆ ಪ್ರವೇಶಿಸುವಂತೆ ರಾಜ್ಯಪಾಲರಿಗೆ ಜಿಲ್ಲಾಧಿಕಾರಿ ಕಚೇರಿ ಮೂಲಕ ಒತ್ತಾಯಿಸಿದರು.
ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹಾಗೂ ಜೆಡಿಎಸ್ ಪಕ್ಷದ ವರ್ಚಸ್ಸು ಹಾಳು ಮಾಡಲು ಎಸ್‌ಐಟಿ ಬಳಕೆ ಮಾಡಿಕೊಳ್ಳಲಾಗುತ್ತಿದೆ. ಹಾಗಾಗಿ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಆಗ್ರಹಿಸಿದರು.
ಜಿಲ್ಲಾಧ್ಯಕ್ಷ ಕಡಿದಾಳ್ ಗೋಪಾಲ್, ಶಾಸಕಿ ಶಾರದಾ ಪೂರ‌್ಯಾನಾಯ್ಕಾ, ರಾಜ್ಯ ಕಾರ್ಯದರ್ಶಿ ಶಾರದಾ ಅಪ್ಪಾಜಿಗೌಡ, ಮಾಜಿ ಶಾಸಕ ಕೆ.ಬಿ.ಪ್ರಸನ್ನಕುಮಾರ್, ಪ್ರಮುಖರಾದ ನರಸಿಂಹ ಗಂಧದಮನೆ, ದೀಪಕ್ ಸಿಂಗ್, ಗೀತಾ ಸತೀಶ್, ಸಂಜಯ್ ಕಶ್ಯಪ್, ರಾಮಕೃಷ್ಣ, ಎಚ್.ಎಂ.ಸಂಗಯ್ಯ, ಎಚ್.ಆರ್.ತ್ಯಾಗರಾಜ್, ರಾಜಣ್ಣ, ಎಸ್.ಸಿದ್ದೇಶ್, ಲೋಹಿತ್, ಎಸ್.ಟಿ.ಪುಷ್ಪಾವತಿ, ಎಂ.ಗೋಪಿ, ಎಚ್.ಕೆ.ಮೂರ್ತಿ ಮತ್ತಿತರರು ಪ್ರತಿಭಟನೆಯಲ್ಲಿದ್ದರು.