ಸಿರಗುಪ್ಪ: ಆರೋಗ್ಯ ಉಚಿತ ತಪಾಸಣಾ ಶಿಬಿರದ ಉಪಯೋಗ ಪಡೆದುಕೊಳ್ಳಬೇಕೆಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಾಲೂಕು ಕೃಷಿ ಮೇಲ್ವಿಚಾರಕ ಪ್ರಭು ಹಿರೇಮಠ ಕರೆ ನೀಡಿದರು.
ತಾಲೂಕಿನ ದೇಶನೂರು ಗ್ರಾಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿ ಮಂಗಳವಾರ ಹಮ್ಮಿಕೊಂಡಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ ಮಾತನಾಡಿದರು.
ಮಕ್ಕಳ ಅಪೌಷ್ಟಿಕ, ಕೌಟುಂಬಿಕ ಸಾಮರಸ್ಯ, ಶಿಕ್ಷಣ, ಮಹಿಳೆಯರ ಆರೋಗ್ಯದಂತಹ ಜ್ವಲಂತ ಸಮಸ್ಯೆಗಳ ಕುರಿತು ಪ್ರತಿ ತಿಂಗಳು ವಿಷಯ ತಜ್ಞರ ಮೂಲಕ ಜ್ಞಾನವಿಕಾಸ ಕೇಂದ್ರದ ಸದಸ್ಯರಿಗೆ ಮಾಹಿತಿ ನೀಡಿ ಪರಿಹಾರ ಕಂಡುಕೊಳ್ಳಬೇಕು. ವೈದ್ಯಾಧಿಕಾರಿಗಳು ಹಾಗೂ ಆರೋಗ್ಯ ಸಹಾಯಕರ ಮೂಲಕ ರಕ್ತದೊತ್ತಡ, ಸಕ್ಕರೆ ಕಾಯಿಲೆ ಹಾಗೂ ಇತರ ಆರೋಗ್ಯ ಸಮಸ್ಯೆಯ ಕುರಿತು ಉಚಿತ ಆರೋಗ್ಯ ತಪಾಸಣೆ ಶಿಬಿರ ಏರ್ಪಡಿಸಲಾಗಿದ್ದು, ಗ್ರಾಮಸ್ಥರು ಉಪಯೋಗವನ್ನು ಪಡೆದುಕೊಳ್ಳಿ ಎಂದರು.
ಬಾಗೇವಾಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ವಂಶಿ ದೈಹಿಕ ಹಾಗೂ ಮಾನಸಿಕ ಆರೋಗ್ಯದ ಕುರಿತು ಸಮಾಲೋಚನೆ ನಡೆಸಿ, ಸೂಕ್ತ ಔಷಧ ಮತ್ತು ಸಲಹೆಗಳನ್ನು ಆರೋಗ್ಯ ಇಲಾಖೆ ಮೂಲಕ ಉಚಿತವಾಗಿ ಒದಗಿಸಲಾಗುತ್ತಿದ್ದು ಸದುಪಯೋಗ ಪಡಿಸಿಕೊಳ್ಳಬೇಕು ಎಂದರು. ಶಿಬಿರದಲ್ಲಿ 126 ಜನರು ಆರೋಗ್ಯ ತಪಾಸಣೆ ಮಾಡಿಸಿಕೊಂಡರು.
ಗ್ರಾಮದ ಪ್ರಮುಖರಾದ ಕಾಸಿಂಸಾಬ್, ಆರೋಗ್ಯ ಸಹಾಯಕಿ ಸರೋಜಾ, ಜ್ಞಾನವಿಕಾಸ ಸಮನ್ವಯಾಧಿಕಾರಿ ಪ್ರಿಯಾ, ಮೇಲ್ವಿಚಾರಕ ಮಾರುತಿ, ಸೇವಾ ಪ್ರತಿನಿಧಿಗಳಾದ ಅನಿತಾ, ನಿಂಗಮ್ಮ , ಜ್ಞಾನವಿಕಾಸ ಕೇಂದ್ರದ ಸದಸ್ಯರು ಇದ್ದರು.