ತಾಲೂಕಿನ ಮಧುವನಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಗುರುವಾರ ಆಯೋಜಿಸಿದ್ದ ಮಹಿಳಾ ದೌರ್ಜನ್ಯ ಮತ್ತು ರಾಷ್ಟ್ರೀಯ ಲೋಕ ಅದಾಲತ್ ಕಾನೂನು ಅರಿವು ಕಾರ್ಯಕ್ರಮದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶೆ ಸುನೀತಾ ಮಾತನಾಡಿದರು. 
ಜಿಲ್ಲೆ

ಮಹಿಳೆಯರ ಮೇಲಿನ ದೌರ್ಜನ್ಯ ತಡೆಗೆ ಕೈಜೋಡಿಸಿ

ರವಿಕುಮಾರ್ ಪಿ. ಕೆ

ಕೊಳ್ಳೇಗಾಲ: ಮಹಿಳೆಯರ ಮೇಲಿನ ದೌರ್ಜನ್ಯ ಸಮಾಜಕ್ಕೆ ಕಳಂಕವಾಗಿದ್ದು, ಇದರ ತಡೆಗೆ ಎಲ್ಲರೂ ಕೈಜೋಡಿಸಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶೆ ಸುನೀತಾ ತಿಳಿಸಿದರು.

ತಾಲೂಕಿನ ಮಧುವನಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ತಾಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ, ಪೊಲೀಸ್ ಇಲಾಖೆ, ತಾಲೂಕು ಪಂಚಾಯಿತಿ, ಸಾರ್ವಜನಿಕ ಶಿಕ್ಷಣ ಇಲಾಖೆ, ಮಧುವನಹಳ್ಳಿ ರೋಟರಿ ಸಮುದಾಯದಳ, ಮಧುವನಹಳ್ಳಿ ಗ್ರಾಮ ಪಂಚಾಯಿತಿ ಸಹಯೋಗದಲ್ಲಿ ಗುರುವಾರ ಆಯೋಜಿಸಿದ್ದ ಮಹಿಳಾ ದೌರ್ಜನ್ಯ ಮತ್ತು ರಾಷ್ಟ್ರೀಯ ಲೋಕ ಅದಾಲತ್ ಕಾನೂನು ಅರಿವು ಕಾರ್ಯಕ್ರಮದಲ್ಲಿ ಮಾತನಾಡಿದರು.

ಮಹಿಳೆಯರ ಮನಸ್ಥಿತಿ ಅರಿಯದೆ ದೈಹಿಕವಾಗಿ, ಮಾನಸಿಕವಾಗಿ, ಭಾವನಾತ್ಮಕವಾಗಿ ಹಾಗೂ ಲೈಂಗಿಕವಾಗಿ ಹಿಂಸಿಸುವುದು ದೌರ್ಜನ್ಯವಾಗಿದೆ. ಮಹಿಳೆಯರು ಸಂಘಟಿತರಾಗಿ ಮೂಲದಲ್ಲಿ ದೌರ್ಜನ್ಯ ತಡೆ ಹಿಡಿಯುವ ಮೂಲಕ ದೌರ್ಜನ್ಯದ ಪ್ರಮಾಣವನ್ನು ತಪ್ಪಿಸಬಹುದಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಸೆ.14 ರಂದು ನ್ಯಾಯಾಲಯದ ಆವರಣದಲ್ಲಿ ಬೃಹತ್ ಲೋಕ ಅದಾಲತ್ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ನ್ಯಾಯಾಲಯದಲ್ಲಿ ಬಾಕಿ ಇರುವ ರಾಜಿಯಾಗಬಹುದಾದ ಪ್ರಕರಣಗಳನ್ನು ಕಕ್ಷಿದಾರರು ಪರಸ್ಪರ ರಾಜಿ ಸಂಧಾನದ ಮೂಲಕ ಬಗೆಹರಿಸಿಕೊಳ್ಳಲು ಮುಂದಾಗಬೇಕು ಎಂದು ತಿಳಿಸಿದರು.

ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಟಿ.ಸಿ.ಶ್ರೀಕಾಂತ್, ಹಿರಿಯ ವಕೀಲ ಡಿ.ವೆಂಕಟಾಚಲ, ಚಿನ್ನರಾಜು, ಪಿ.ಸಿದ್ದಪ್ಪ, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎಂ.ಶಿವಪ್ರಕಾಶ್, ವಕೀಲ ಸಂಘದ ಉಪಾಧ್ಯಕ್ಷೆ ನಿರ್ಮಲಾ, ಗ್ರಾಮ ಪಂಚಾಯಿತಿ ಪಿಡಿಒ ಶೋಭಾರಾಣಿ, ಮುಖ್ಯಶಿಕ್ಷಕಿ ಜಯಮ್ಮ ಇದ್ದರು.