ಜಿಲ್ಲೆ

ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಕೈಜೋಡಿಸಿ: ವೆಂಕಟ್ ರಾಜಾ

ಆದರ್ಶ್. ಎಂ.ಕೆ.

ಮಡಿಕೇರಿ: ೫ ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಪಲ್ಸ್ ಪೋಲಿಯೋ ಹನಿ ಹಾಕುವಂತೆ ಸಂಬಂಧಪಟ್ಟಮ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ನಿರ್ದೇಶನ ನೀಡಿದರು.


ಮಾ.೩ ರಂದು ನಡೆಯುವ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮ ಸಿದ್ಧತೆ ಸಂಬಂಧಿಸಿದಂತೆ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಜಿಲ್ಲಾಧಿಕಾರಿ ವೆಂಕಟ್ ರಾಜಾರವರ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.


೫ ವರ್ಷದೊಳಗಿನ ಮಕ್ಕಳು ಯಾರೂ ಬಿಟ್ಟು ಹೋಗದಂತೆ ಗಮನಹರಿಸಬೇಕು. ಅಂಗನವಾಡಿ, ಶಾಲೆಗಳು, ಪ್ರವಾಸಿ ಸ್ಥಳಗಳು, ಗಡಿ ಪ್ರದೇಶಗಳು ಇತರೆ ಎಲ್ಲೆಡೆ ೫ ವರ್ಷದೊಳಗಿನ ಮಕ್ಕಳಿಗೆ ಪಲ್ಸ್ ಪೋಲಿಯೋ ಹನಿ ಹಾಕಿಸುವಂತೆ ನಿರ್ದೇಶನ ನೀಡಿದರು.


ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಕುಮಾರ್ ಮಾತನಾಡಿ, ಕೊಡಗು ಜಿಲ್ಲೆಯಲ್ಲಿ ೫ ವರ್ಷದೊಳಗಿನ ಒಟ್ಟು ೩೬,೫೯೫ ಮಕ್ಕಳಿದ್ದು, ೪,೩೩೪ ನಗರ ಪ್ರದೇಶದ ಮಕ್ಕಳು ಹಾಗೂ ೩೨,೨೬೧ ಗ್ರಾಮೀಣ ಪ್ರದೇಶದ ಮಕ್ಕಳು ಇದ್ದಾರೆ. ಹಾಗೆಯೇ ೫ ವರ್ಷದೊಳಗಿನ ವಲಸಿಗ ಮಕ್ಕಳು ಸೇರಿದಂತೆ ಪೋಲಿಯೋ ಹನಿ ಹಾಕಲಾಗುತ್ತದೆ ಎಂದು ಮಾಹಿತಿ ನೀಡಿದರು.


ಜಿಲ್ಲೆಯಲ್ಲಿ ಪೋಲಿಯೋ ಹನಿ ಹಾಕುವ ನಿಟ್ಟಿನಲ್ಲಿ ೪೬೪ ಬೂತ್‌ಗಳನ್ನು ಸ್ಥಾಪಿಸಲಾಗಿದೆ. ೩೧ ಸಂಚಾರಿ ಬೂತ್‌ಗಳು, ೦೧ ಮೊಬೈಲ್ ತಂಡಗಳನ್ನು ನಿಯೋಜಿಸಲಾಗುತ್ತದೆ. ಜತೆಗೆ ೧೯೨೦ ಲಸಿಕಾದಾರರು, ೮೬ ಮಂದಿ ಮೇಲ್ವಿಚಾರಕರು, ಹಾಗೆಯೇ ೯೨೮ ಮಂದಿ ಮನೆ ಮನೆಗೆ ಭೇಟಿ ನೀಡುವ ತಂಡವನ್ನು ನಿಯೋಜಿಸಲಾಗುತ್ತದೆ ಎಂದು ತಿಳಿಸಿದರು.


ಪಲ್ಸ್ ಪೋಲಿಯೋ ಕಾರ್ಯಕ್ರಮ ಮಾ.೩ ರಂದು ಬೂತ್ ಮಟ್ಟದಲ್ಲಿ ನಡೆಯಲಿದೆ. ಮಾ.೪, ೫ ಮತ್ತು ೬ ರಂದು ಮೂರು ದಿನಗಳ ಕಾಲ ನಗರ ಮತ್ತು ಪಟ್ಟಣ ಪ್ರದೇಶದಲ್ಲಿ ಹಾಗೂ ಮಾ.೪ ಮತ್ತು ೫ ರಂದು ಎರಡು ದಿನಗಳ ಕಾಲ ಗ್ರಾಮೀಣ ಪ್ರದೇಶದಲ್ಲಿ ಮನೆ ಮನೆಗೆ ತೆರಳಿ ಪೋಲಿಯೋ ಹನಿ ಹಾಕಲಾಗುತ್ತದೆ. ಪಲ್ಸ್ ಪೋಲಿಯೋ ಹನಿ ಹಾಕುವ ದಿನಗಳಂದು ಪಂಚಾಯತ್ ರಾಜ್, ಶಿಕ್ಷಣ, ಪೊಲೀಸ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಪ್ರಾದೇಶಿಕ ಸಾರಿಗೆ ಇಲಾಖೆಗಳು ಅಗತ್ಯ ಸಹಕಾರ ನೀಡುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಕೋರಿದರು.


ಪಲ್ಸ್ ಪೋಲಿಯೋ ಕಾರ್ಯಕ್ರಮ ಸಂದರ್ಭದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಜತೆ ಪಂಚಾಯತ್ ರಾಜ್, ಸಾರ್ವಜನಿಕ ಶಿಕ್ಷಣ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಪ್ರಾದೇಶಿಕ ಸಾರಿಗೆ ಇಲಾಖೆಗಳು ಅಗತ್ಯ ಸಹಕಾರ ನೀಡಬೇಕು. ಶಾಲೆಗಳು, ಬಸ್ ನಿಲ್ದಾಣಗಳಲ್ಲಿ ಹಾಗೂ ಜನ ದಟ್ಟಣೆ ಪ್ರದೇಶಗಳಲ್ಲಿ ೫ ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಪಲ್ಸ್ ಪೋಲಿಯೋ ಹನಿ ಹಾಕಲು ಸಹಕಾರ ನೀಡಬೇಕು. ಪ್ರಾದೇಶಿಕ ಸಾರಿಗೆ ಇಲಾಖೆಯಿಂದ ಅಗತ್ಯ ವಾಹನ ನಿಯೋಜಿಸುವಂತೆ ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು.


ಪಲ್ಸ್ ಪೋಲಿಯೋ ಕಾರ್ಯಕ್ರಮ ದಿನದಂದು ವಿದ್ಯುತ್ ಸಂಪರ್ಕವನ್ನು ನಿರಂತರವಾಗಿ ಕಲ್ಪಿಸಬೇಕು. ಪಲ್ಸ್ ಪೋಲಿಯೋ ಕಾರ್ಯಕ್ರಮ ಯಶಸ್ಸುಗೊಳಿಸುವ ನಿಟ್ಟಿನಲ್ಲಿ ರೋಟರಿ, ಲಯನ್ಸ್, ರೆಡ್‌ಕ್ರಾಸ್ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಸಹಕಾರ ಪಡೆಯುವಂತೆ ಜಿಲ್ಲಾಧಿಕಾರಿ ಸಲಹೆ ಮಾಡಿದರು.


ಪ್ರವಾಸಿ ಸ್ಥಳಗಳು, ಬಸ್ ನಿಲ್ದಾಣಗಳಲ್ಲಿ ಪೋಲಿಯೋ ಬೂತ್ ತೆರೆಯಲು ಅವಕಾಶ ಮಾಡಬೇಕು. ಕಾರ್ಮಿಕರ ಮಕ್ಕಳು, ಕೊಳಗೇರಿ ಪ್ರದೇಶದಲ್ಲಿನ ಮಕ್ಕಳಿಗೆ ಪಲ್ಸ್ ಪೋಲಿಯೋ ಹನಿ ಹಾಕಲು ಸಹಕರಿಸುವಂತೆ ಕೋರಿದರು.


ಸಭೆಯಲ್ಲಿ ಪಲ್ಸ್ ಪೋಲಿಯೋ ಕಾರ್ಯಕ್ರಮದ ಭಿತ್ತಿಪತ್ರವನ್ನು ಜಿಲ್ಲಾಧಿಕಾರಿ ವೆಂಕಟ್ ರಾಜಾ ಬಿಡುಗಡೆಗೊಳಿಸಿದರು. ಆರ್‌ಸಿಎಚ್ ಅಧಿಕಾರಿ ಡಾ.ಮಧುಸೂದನ, ಜಿಲ್ಲಾ ಸರ್ಜನ್ ಡಾ.ನಂಜುಂಡಯ್ಯ, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ನಿರ್ದೇಶಕ ಡಾ.ವಿಶಾಲ್ ಕುಮಾರ್, ತಾಲೂಕು ವೈದ್ಯಾಧಿಕಾರಿ ಡಾ.ಚೇತನ್, ಡಾ.ಯತಿರಾಜು, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಪುಟ್ಟರಾಜು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ನಟರಾಜು, ನಗರಸಭೆ ಎಂಜಿನಿಯರ್ ಸೌಮ್ಯ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪ ಯೋಜನಾ ಸಮನ್ವಯಾಧಿಕಾರಿ ಎಂ.ಕೃಷ್ಣಪ್ಪ, ಇತರರು ಇದ್ದರು.