ಕುಶಾಲನಗರ: ಅಧಿಕಾರಿಗಳು, ಜನಪ್ರತಿನಿಧಿಗಳು ಸೇರಿದಂತೆ ಸಮಾಜವನ್ನು ಸರಿದಾರಿಗೆ ತರುವಲ್ಲಿ ಪತ್ರಿಕೋದ್ಯಮ ಮುಂಚೂಣಿಯಲ್ಲಿ ಕಾರ್ಯನಿರ್ವಹಿಸುತ್ತಿದೆ ಎಂದು ಮಾಜಿ ಸಚಿವ ಅಪ್ಪಚ್ಚು ರಂಜನ್ ಅಭಿಪ್ರಾಯಪಟ್ಟರು.
ಕುಶಾಲನಗರ ಪ್ರೆಸ್ ಕ್ಲಬ್ ಟ್ರಸ್ಟ್ ವತಿಯಿಂದ ಬುಧವಾರ ಆಯೋಜಿಸಿದ್ದ ಪತ್ರಿಕಾ ದಿನಾಚರಣೆ ಮತ್ತು ಸಾಧಕರಿಗೆ ಕಾವೇರಿ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
ಸಂವಿಧಾನದ ನಾಲ್ಕನೇ ಅಂಗ ಎಂಬ ಹೆಗ್ಗಳಿಕೆ ಹೊಂದಿರುವ ಪತ್ರಿಕಾ ಕ್ಷೇತ್ರ 21ನೇ ಶತಮಾನದಲ್ಲಿ ಅತ್ಯಂತ ಕ್ರಿಯಶೀಲವಾಗಿ ಕಾರ್ಯನಿರ್ವಹಿಸುತ್ತಿದೆ. ಸಮಾಜದಲ್ಲಿ ನಡೆಯುವ ಪ್ರತಿಯೊಂದು ವಿಷಯವನ್ನೂ ಬೆಳಕಿಗೆ ತರುವಲ್ಲಿ ಮಳೆ, ಗಾಳಿ, ಬಿಸಿಲು ಎನ್ನದೆ ಪತ್ರಕರ್ತರು ಶ್ರಮಿಸುತ್ತಿದ್ದಾರೆ ಎಂದರು.
ನಿವೃತ್ತ ಚಿತ್ರಕಲಾ ಶಿಕ್ಷಕ ಉ.ರಾ.ನಾಗೇಶ್ ಮಾತನಾಡಿ, ಪತ್ರಕರ್ತರು ನಿರ್ಭೀತಿಯಿಂದ ಆಳುವ ವರ್ಗ, ಅಧಿಕಾರಿ ವರ್ಗದ ತಪ್ಪುಗಳನ್ನು ಹುಡುಕಿ ತೆಗೆದು ಪ್ರಕಟಿಸಿದಾಗ ಮಾತ್ರ ಸಮಾಜದಲ್ಲಿ ಗುರುತಿಸಿಕೊಳ್ಳಲು ಸಾಧ್ಯ. ಪ್ರತಿಯೊಬ್ಬ ಪತ್ರಕರ್ತ ಸೀಮಿತ ಚೌಕಟ್ಟಿನಲ್ಲಿ ನೀತಿ ಸಂಹಿತೆಯನ್ನು ಬಿಟ್ಟು ನಡೆಯಬಾರದು. ಟಿವಿ, ಮೊಬೈಲ್ ಹಾವಳಿಯಿಂದ ಪತ್ರಿಕೆ ಓದುಗರ ಸಂಖ್ಯೆ ಕಡಿಮೆಯಾಗಿದ್ದರೂ ಪತ್ರಿಕೆಯ ಮಹತ್ವ ಮತ್ತು ಪಾವಿತ್ರ್ಯತೆ ಕಡಿಮೆ ಆಗಿಲ್ಲ ಎಂದರು.
ಪೊಲೀಸ್ ವೃತ್ತ ನಿರೀಕ್ಷಕ ರಾಜೇಶ್ ಕೋಟ್ಯಾನ್ ಮಾತನಾಡಿ, ಸಮಾಜದ ಬದಲಾವಣೆಗೆ ಪತ್ರಿಕಾ ರಂಗದ ಕ್ರಾಂತಿ ದೊಡ್ಡದು ಎಂದರು.
ಕುಶಾಲನಗರ ಪ್ರೆಸ್ ಕ್ಲಬ್ ಟ್ರಸ್ಟ್ ಕಾನೂನು ಸಲಹೆಗಾರ ಆರ್.ಕೆ.ನಾಗೇಂದ್ರ ಬಾಬು ಮಾತನಾಡಿ, ಅತ್ಯುನ್ನತ ಹುದ್ದೆಗಳಲ್ಲಿ ಕೆಲಸ ಮಾಡಬೇಕಾದರೆ ಪತ್ರಿಕೆಗಳನ್ನು ಓದಬೇಕು. ಪತ್ರಕರ್ತರು ಸಮಾಜಕ್ಕೆ ಒಳ್ಳೆಯ ಸಂದೇಶವನ್ನು ಕೊಡಬೇಕು ಎಂದರು. ಕೂಡುಮಂಗಳೂರು ಪ್ರೌಢಶಾಲೆ ಮುಖ್ಯೋಪಾಧ್ಯಾಯ ಟಿ.ಜಿ. ಪ್ರೇಮ ಕುಮಾರ್ ಮಾತನಾಡಿದರು. ಕುಶಾಲನಗರ ಪ್ರೆಸ್ ಕ್ಲಬ್ ಟ್ರಸ್ಟ್ ಅಧ್ಯಕ್ಷ ಎಚ್.ಎಂ.ರಘು ಕೋಟಿ ಅಧ್ಯಕ್ಷತೆ ವಹಿಸಿದ್ದರು. ಉದ್ಯಮಿ ಬಿ.ಎಸ್.ಸದಾಶಿವಶೆಟ್ಟಿ, ಕುಶಾಲನಗರ ಯೋಜನಾ ಪ್ರಾಧಿಕಾರ ಅಧ್ಯಕ್ಷ ಕೆ.ಪ್ರಮೋದ್ ಮುತ್ತಪ್ಪ, ದಲಿತ ಸಂಘರ್ಷ ಸಮಿತಿ ಜಿಲ್ಲಾಧ್ಯಕ್ಷ ಎಚ್.ಜೆ.ದಾಮೋದರ್, ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯ ಸಂಚಾಲಕಿ ದೀಪಾ ಪೂಜಾರಿ ಮತ್ತಿತರರು ಇದ್ದರು. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 15 ಸಾಧಕರನ್ನು ಸನ್ಮಾನಿಸಿ, ಗೌರವಿಸಲಾಯಿತು.