ಕುಷ್ಟಗಿಯಲ್ಲಿ ಸೋಮವಾರ ಏರ್ಪಡಿಸಿದ್ದ ಪತ್ರಿಕಾ ದಿನಾಚರಣೆಯಲ್ಲಿ ವಿವಿಧ ಕ್ಷೇತ್ರಗಳ ಸಾಧಕರನ್ನು ಸನ್ಮಾನಿಸಲಾಯಿತು. ಮದ್ದಾನೇಶ್ವರ ಮಠದ ಕರಿಬಸವ ಶಿವಾಚಾರ್ಯ ಸ್ವಾಮೀಜಿ, ಶಾಸಕ ದೊಡ್ಡನಗೌಡ ಪಾಟೀಲ್, ಮಾಜಿ ಶಾಸಕ ಕೆ.ಶರಣಪ್ಪ, ಕಾರ್ಯನಿರತ ಪತ್ರಕರ್ತರ ಸಂಘದ ತಾಲೂಕು ಅಧ್ಯಕ್ಷ ಅನಿಲ್ ಆಲಮೇಲ್, ಇನ್ನಿರ್‌ವ್ಹೀಲ್ ಕ್ಲಬ್ ಅಧ್ಯಕ್ಷೆ ಶಾರದಾ ಶೆಟ್ಟರ್ ಇತರರು ಇದ್ದರು. 
ಜಿಲ್ಲೆ

ಪತ್ರಕರ್ತರು ಸತ್ಯಾಸತ್ಯತೆ ಪರಾಮರ್ಶಿಸಿ ವರದಿ ಮಾಡಿ: ಶಾಸಕ ದೊಡ್ಡನಗೌಡ ಪಾಟೀಲ್

ಪ್ರವೀಣ ಉದುಸಾ ದಲಬಂಜನ್

ಕುಷ್ಟಗಿ: ಪತ್ರಕರ್ತರು ಸತ್ಯಾಸತ್ಯತೆ ಪರಾಮರ್ಶಿಸಿ ಜಾಗರೂಕತೆಯಿಂದ ವರದಿ ಮಾಡಬೇಕೆಂದು ಶಾಸಕ ದೊಡ್ಡನಗೌಡ ಪಾಟೀಲ್ ಸಲಹೆ ನೀಡಿದರು.

ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಪಟ್ಟಣದ ಮಲ್ಲಿಕಾರ್ಜುನ ಸಮುದಾಯ ಭವನದಲ್ಲಿ ಸೋಮವಾರ ಏರ್ಪಡಿಸಿದ್ದ ಪತ್ರಿಕಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಆಡಳಿತ ವ್ಯವಸ್ಥೆಯ 4ನೇ ಅಂಗವಾಗಿ ಕಾರ್ಯನಿರ್ವಹಿಸುತ್ತಿರುವ ಪತ್ರಿಕಾ ರಂಗ ಸಮಾಜದ ಸ್ವಾಸ್ಥೃ ಕಾಪಾಡುತ್ತಿದೆ. ಇದರಲ್ಲಿ ಪತ್ರಕರ್ತರ ಪಾತ್ರ ಬಹುಮುಖ್ಯ. ಕೋವಿಡ್‌ನಂತಹ ಸಂದಿಗ್ಧ ಪರಿಸ್ಥಿತಿಯಲ್ಲಿಯೂ ಮನೆಯಿಂದ ಹೊರಬಂದು ಕಾರ್ಯನಿರ್ವಹಿಸಿದ ಪತ್ರಕರ್ತರ ಕಾರ್ಯ ಮೆಚ್ಚುವಂಥದ್ದು ಎಂದರು.

ಪತ್ರಕರ್ತರ ಸಮಸ್ಯೆಗಳ ಕುರಿತು ಸದನದಲ್ಲಿ ಧ್ವನಿ ಎತ್ತುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಪಟ್ಟಣದಲ್ಲಿ ಪತ್ರಿಕಾ ಭವನ ನಿರ್ಮಾಣಕ್ಕೆ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

ವಿಜಯವಾಣಿ ದಿನಪತ್ರಿಕೆಯ ಗಂಗಾವತಿ ಆವೃತ್ತಿಯ ಸ್ಥಾನಿಕ ಸಂಪಾದಕ ಜಗನ್ನಾಥ ಆರ್.ದೇಸಾಯಿ ಮಾತನಾಡಿ, ಪತ್ರಿಕಾ ರಂಗ ಹಿಂದೆಂದಿಗಿಂತಲೂ ಪ್ರಗತಿ ಸಾಧಿಸಿದೆ. ಹಲವರಿಗೆ ಉದ್ಯೋಗಾವಕಾಶ ಕಲ್ಪಿಸಿದೆ. ಆಧುನಿಕ ಅವಶ್ಯಕತೆಗಳಿಗೆ ತಕ್ಕಂತೆ ಹೊಂದಿಕೊಂಡು ಬೆಳೆಯುತ್ತಿದೆ. ನಿಖರ, ಸ್ಪಷ್ಟ, ಖಚಿತ ಸುದ್ದಿಗಳ ಮೂಲಕ ಓದುಗರನ್ನು ಹಿಡಿದಿಟ್ಟುಕೊಳ್ಳುವ ಸವಾಲು ಪತ್ರಿಕೋದ್ಯಮದ ಮುಂದಿದೆ ಎಂದು ಹೇಳಿದರು.

ಮಾಜಿ ಶಾಸಕ ಕೆ.ಶರಣಪ್ಪ, ಪ್ರಗತಿಪರ ರೈತ ದೇವೀಂದ್ರಪ್ಪ ಬಳೂಟಗಿ, ತಾಲೂಕು ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿ ಕೆ.ಎಸ್.ರಡ್ಡಿ, ನೌಕರರ ಸಂಘದ ತಾಲೂಕು ಅಧ್ಯಕ್ಷ ಬಾಲಾಜಿ ಬಳಿಗಾರ, ಬಿಜೆಪಿ ಮಂಡಲ ಅಧ್ಯಕ್ಷ ಬಸವರಾಜ ಹಳ್ಳೂರು, ನಿವೃತ್ತ ತಹಸೀಲ್ದಾರ್ ಸಿ.ಎಂ.ಹಿರೇಮಠ, ಇನ್ನರ್‌ವ್ಹೀಲ್ ಕ್ಲಬ್ ಅಧ್ಯಕ್ಷೆ ಶಾರದಾ ಶೆಟ್ಟರ್, ನಿಕಟ ಪೂರ್ವ ಅಧ್ಯಕ್ಷೆ ಸುಮಾ ಬ್ಯಾಳಿ, ಪ್ರಾಂತ ರೈತ ಸಂಘದ ಜಿಲ್ಲಾ ಉಪಾಧ್ಯಕ್ಷ ಆರ್.ಕೆ.ದೇಸಾಯಿ, ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧ್ಯಕ್ಷ ನಜೀರ್‌ಸಾಬ್ ಮೂಲಿಮನಿ, ಪದಾಧಿಕಾರಿ ಮಹಾಂತಮ್ಮ ಪಾಟೀಲ್, ಅಗ್ನಿಶಾಮಕ ಠಾಣಾಧಿಕಾರಿ ರಾಜು ನರಸಪ್ಪ ಇದ್ದರು. ವಿವಿಧ ಕ್ಷೇತ್ರಗಳ ಸಾಧಕರನ್ನು ಸನ್ಮಾನಿಸಲಾಯಿತು.