ಹೊಸದುರ್ಗ: ಮಹಿಳೆಯರಿಗೆ ಹಾಗೂ ಮಕ್ಕಳಿಗೆ ಪೌಷ್ಟಿಕ ಆಹಾರ ಒದಗಿಸುವ ಮೂಲಕ ಆರೋಗ್ಯ ಕಾಪಾಡಿ ಸದೃಢ ಸಮಾಜ ಕಟ್ಟುವುದು ಎಲ್ಲರ ಜವಾಬ್ದಾರಿಯಾಗಿದೆ ಎಂದು ಹಿರಿಯ ಜೆಎಂಎಫ್‌ಸಿ ನ್ಯಾಯಾಧೀಶೆ ಎಂ.ಎಸ್.ಶಶಿಕಲಾ ಹೇಳಿದರು.
ಪಟ್ಟಣದ ತಾಪಂ ಸಭಾಂಗಣದಲ್ಲಿ ಶನಿವಾರ ಕಾನೂನು ಸೇವಾ ಸಮಿತಿ ಹಮ್ಮಿಕೊಂಡಿದ್ದ ಪೌಷ್ಟಿಕ ಆಹಾರ ಮತ್ತು ರಾಷ್ಟ್ರೀಯ ಪೋಷಣಾ ಮಾಸಾಚರಣೆ ಕುರಿತ ಕಾನೂನು ಅರಿವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಮಕ್ಕಳು ಮತ್ತು ಮಹಿಳೆಯರ ಆರೋಗ್ಯ ಕಾಪಾಡುವ ಸಲುವಾಗಿ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ರಾಷ್ಟ್ರೀಯ ಪೋಷಣಾ-ಪೌಷ್ಟಿಕ ಅಭಿಯಾನ ಜಾರಿಗೊಳಿಸಿವೆ ಎಂದರು.
ಸರ್ಕಾರದ ಈ ಸೌಲಭ್ಯವನ್ನು ಮಹಿಳೆಯರು ಸದುಪಯೋಗ ಪಡಿಸಿಕೊಳ್ಳುವ ಮೂಲಕ ಆರೋಗ್ಯಪೂರ್ಣವಾದ ಬದುಕನ್ನು ಕಟ್ಟಿಕೊಳ್ಳಬೇಕು. ಸೆ.1 ರಿಂದ 30 ರವರಗೆ ಒಂದು ತಿಂಗಳ ಕಾಲ ಅಭಿಯಾನ ನಡೆಯಲಿದೆ.
ಅಪೌಷ್ಟಿಕತೆಯಿಂದ ಬಳಲುತ್ತಿರುವ ಗರ್ಭಿಣಿಯರು, ಬಾಣಂತಿಯರು ಹಾಗೂ ಮಕ್ಕಳು ಯೋಜನೆಯ ಪ್ರಯೋಜನ ಪಡೆಯಬಹುದು ಎಂದು ತಿಳಿಸಿದರು.
ಕಾನೂನು ಸೇವಾ ಸಮಿತಿ ಸದಸ್ಯೆ ಕೆ.ಟಿ.ಮಮತಾ ಮಾತನಾಡಿ, ಗೃಹಿಣಿ ಅರೋಗ್ಯವಾಗಿದ್ದರೆ ಮನೆಯ ಸದಸ್ಯರೆಲ್ಲರನ್ನು ಕ್ಷೇಮವಾಗಿ ನೋಡಿಕೊಳ್ಳಲು ಸಾಧ್ಯ.
ಮನೆಯ ಆಧಾರ ಸ್ಥಂಭವಾದ ಮಹಿಳೆಯರ ಆರೋಗ್ಯ ಸಂರಕ್ಷಣೆ ಕುಟುಂಬದ ಹೊಣೆಯಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಸಿಡಿಪಿಒ ಎ.ಅಭಿಲಾಷ, ವಕೀಲರ ಸಂಘದ ಕಾರ್ಯದರ್ಶಿ ಬಸವಲಿಂಗಪ್ಪ, ವಕೀಲರಾದ ಎಸ್.ಎಂ.ಕನವಳ್ಳಿ, ನವೀನ್ ಕುಮಾರ್ ಇತರರಿದ್ದರು.