ಮಂಗಳೂರು: ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ನಡೆಸಲಾಗುವ ‘ಆಳ್ವಾಸ್ ಪ್ರಗತಿ’ 14ನೇ ಆವೃತ್ತಿಯ ಉದ್ಯೋಗ ಮೇಳ ವಿದ್ಯಾಗಿರಿಯ ಕಾಲೇಜು ಆವರಣದಲ್ಲಿ ಜೂ. 7 ಮತ್ತು 8ರಂದು ನಡೆಯಲಿದೆ.
ಸಂಸ್ಥೆ ವತಿಯಿಂದ ನಡೆಸಿರುವ ಉದ್ಯೋಗ ಮೇಳಗಳಲ್ಲಿ ಒಟ್ಟು 31,896 ಮಂದಿ ಉದ್ಯೋಗ ಪಡೆದಿದ್ದಾರೆ. 55,564 ಅಭ್ಯರ್ಥಿಗಳು ವಿವಿಧ ಕಂಪನಿಗಳಿಗೆ ಶಾರ್ಟ್ ಲಿಸ್ಟ್ ಗೊಂಡಿದ್ದಾರೆ. ಈ ಬಾರಿಯೂ 200ಕ್ಕೂ ಅಧಿಕ ವಿವಿಧ ಕಂಪನಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಲಿದ್ದು, ಈಗಾಗಲೇ 68 ಕಂಪನಿಗಳು ನೋಂದಾಯಿಸಿಕೊಂಡಿವೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಮ್ಯಾನೇಜ್‌ಮೆಂಟ್ ಟ್ರಸ್ಟಿ ವಿವೇಕ್ ಆಳ್ವ ಶನಿವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಬ್ಯಾಂಕಿಂಗ್ ಮತ್ತು ಹಣಕಾಸು, ಐಟಿ, ಐಟಿಎಸ್, ಮ್ಯಾನುಫ್ಯಾಕ್ಚರಿಂಗ್, ಹೆಲ್ತ್‌ಕೇರ್ ಮತ್ತು ಫಾರ್ಮಾ, ಮಾರಾಟ ಮತ್ತು ಚಿಲ್ಲರೆ ವ್ಯಾಪಾರ, ಆಟೋಮೊಬೈಲ್, ಹಾಸ್ಪಿಟಾಲಿಟಿ, ಟೆಲಿಕಾಂ, ಮಾಧ್ಯಮ, ಶಿಕ್ಷಣ ಮತ್ತು ಎನ್‌ಜಿಓಗಳನ್ನು ಪ್ರತಿನಿಧಿಸುವ ಉನ್ನತ ಕಂಪೆನಿಗಳು ಆಳ್ವಾಸ್ ಪ್ರಗತಿಯಲ್ಲಿ ನೇಮಕಾತಿ ನಡೆಸಲಿವೆ. ಈ ಕಂಪೆನಿಗಳು ಪದವಿ ಮತ್ತು ಸ್ನಾತಕೋತ್ತರ ಪದವೀಧರರು, ವೈದ್ಯಕೀಯ ಮತ್ತು ಪ್ಯಾರಾ ಮೆಡಿಕಲ್, ಇಂಜಿನಿಯರಿಂಗ್, ಕಲಾ, ವಾಣಿಜ್ಯ ಹಾಗೂ ಮ್ಯಾನೇಜ್‌ಮೆಂಟ್, ಬೇಸಿಕ್ ಸೈನ್ಸ್, ನರ್ಸಿಂಗ್, ಐಟಿಐ, ಡಿಪ್ಲೊಮಾ, ಪಿಯುಸಿ ಎಸ್‌ಎಸ್‌ಎಲ್‌ಸಿ ಹಾಗೂ ಇತರ ಅರ್ಹ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉದ್ಯೋಗಾವಕಾಶ ಕಲ್ಪಿಸಲಿವೆ.
ಸಂಸ್ಥೆಯು ಈವರೆಗೆ 20 ಉದ್ಯೋಗ ಮೇಳಗಳನ್ನು ಸರ್ಕಾರ ಮತ್ತು ಸಾಮಾಜಿಕ ಸಂಸ್ಥೆಗಳ ಸಹಯೋಗದೊಂದಿಗೆ ಚಿಕ್ಕಬಳ್ಳಾಪುರ, ಮಂಗಳೂರು, ಬೆಳ್ತಂಗಡಿ ಮತ್ತು ಬಂಟ್ವಾಳ ಸೇರಿದಂತೆ ವಿವಿಧ ಸ್ಥಳಗಳಲ್ಲಿ ಆಯೋಜಿಸಿದೆ. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ಇದಕ್ಕಾಗಿ ಈವರೆಗೆ ಸುಮಾರು 5 ಕೋಟಿ ರೂ.ಗಳನ್ನು ವ್ಯಯಿಸಿದೆ. ಕರ್ನಾಟಕ ಸೇರಿದಂತೆ ಕೇರಳ, ತಮಿಳುನಾಡು ಆಂಧ್ರಪ್ರದೇಶ, ತೆಲಂಗಾಣ ರಾಜ್ಯಗಳ ಅಭ್ಯರ್ಥಿಗಳು ಈ ಉದ್ಯೋಗ ಮೇಳದ ಹೆಚ್ಚಿನ ಲಾಭ ಪಡೆದಿದ್ದಾರೆ. ಆಳ್ವಾಸ್ ಪ್ರಗತಿಯಲ್ಲಿ ನಿರುದ್ಯೋಗ ಪರಿಹರಿಸುವ ಪ್ರಭಾವಶಾಲಿ ಪ್ರಯತ್ನವನ್ನು ಫ್ರಾನ್ಸ್ ಟಿವಿ ಸೇರಿದಂತೆ ವಿವಿಧ ಮಾಧ್ಯಮಗಳು ಗಮನ ಸೆಳೆದಿವೆ ಎಂದು ಅವರು ವಿವರಿಸಿದರು.