ಚಿಂಚೋಳಿ: ಚಂದಾಪುರ ಪ್ರದೇಶದ ಭವಾನಿ ನಗರದ ನಾಮಫಲಕದ ಬಳಿ ಗಾಂಧಿ ವೃತ್ತದಿಂದ ಗಂಗನಾಯಕ ರಸ್ತೆಗೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆ ಇದೀಗ ಕಸದ ರಾಶಿಯಿಂದಲೇ ಗುರುತಿಸಿಕೊಳ್ಳುವಂತಾಗಿದೆ. ರಸ್ತೆ ಬದಿಯಲ್ಲಿ ದಿನಗಟ್ಟಲೆ ನತ್ಯಾಜ್ಯ ವಸ್ತುಗಳು ವಿಲೇವಾರಿಯಾಗದೆ ಬಿದ್ದಿರುವುದರಿಂದ ಸ್ಥಳಿಯರು, ಶಾಲಾ ಮಕ್ಕಳು, ಸಾರ್ವಜನಿಕರು ಹಾಗೂ ವಾಹನ ಸವಾರರು ತೀವ್ರ ತೊಂದರೆ ಅನುಭವಿಸುವಂತಾಗಿದೆ.
ನಿತ್ಯ ನೂರಾರು ಶಾಲಾ ಮಕ್ಕಳು, ಸಾರ್ವಜನಿಕರು ಹಾಗೂ ವಾಹನ ಸವಾರರು ಸಂಚರಿಸುವ ಪ್ರಮುಖ ರಸ್ತೆ ಬದಿಯಲ್ಲಿ ತಿಪ್ಪೆ ಹಾಗೂ ಕಸದ ರಾಶಿ ಬಿದ್ದಿದೆ. ಕಸ ಕೊಳೆತು ದುರ್ವಾಸನೆ ಬೀರುತ್ತಿದ್ದು, ಸೊಳ್ಳೆ, ನೊಣಗಳ ಹಾವಳಿಯೂ ಹೆಚ್ಚಾಗಿದೆ. ಇದರಿಂದ ಸಾಂಕ್ರಾಮಿಕ ರೋಗಗಳ ಭೀತಿ ಎದುರಾಗಿದೆ. ಮುಖ್ಯ ರಸ್ತೆಯಲ್ಲಿ ಪೈಪ್ ಒಡೆದು ನೀರು ಹರಿಯುತ್ತಿದ್ದರೂ ಅಧಿಕಾರಿಗಳು ಕಂಡೂ ಕಾಣದಂತೆ ವರ್ತಿಸುತ್ತಿದ್ದಾರೆ.
ರಾಜ್ಯಾದ್ಯಂತ ಸ್ವಚ್ಛತಾ ಅಭಿಯಾನಕ್ಕೆ ಒತ್ತು ನೀಡಲಾಗುತ್ತಿದ್ದರೂ, ತಾಲೂಕು ಕೇಂದ್ರದ ಪ್ರಮುಖ ರಸ್ತೆಯೊಂದರಲ್ಲೆ ಇಂತಹ ಪರಿಸ್ಥಿತಿ ನಿರ್ಮಾಣವಾಗಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಕಸ ತೆರವುಗೊಳಿಸುವಂತೆ ಹಲವು ಬಾರಿ ಗಮನಕ್ಕೆ ತಂದರೂ ಸಂಬಂಧಿಸಿದವರು ಸ್ಪಂದಿಸುತ್ತಿಲ್ಲ ಎಂದು ಸ್ಥಳಿಯರು ದೂರುತ್ತಿದ್ದಾರೆ.
ಪುರಸಭೆ ಆಡಳಿತ ಮಂಡಳಿ ಹಾಗೂ ಮುಖ್ಯಾಧಿಕಾರಿಗಳು ಕೂಡಲೇ ಸ್ಥಳಕ್ಕೆ ಭೇಟಿ ನೀಡಿ, ಜೆಸಿಬಿ ಮೂಲಕ ಕಸದ ರಾಶಿಯನ್ನು ತೆರವುಗೊಳಿಸಬೇಕು. ನಿಯಮಿತವಾಗಿ ಕಸ ವಿಲೇವಾರಿ ಮಾಡುವ ವ್ಯವಸ್ಥೆ ಕಲ್ಪಿಸುವ ಜತೆಗೆ, ರಸ್ತೆ ಬದಿಯಲ್ಲಿ ಕಸ ಹಾಕದಂತೆ ಎಚ್ಚರಿಕೆ ಫಲಕ ಅಳವಡಿಸಬೇಕು ಎಂಬುದು ಸಾರ್ವಜನಿಕರ ಒಕ್ಕೊರಲ ಒತ್ತಾಯವಾಗಿದೆ.
ಭವಾನಿ ನಗರದಲ್ಲಿ ಎಲ್ಲೆಂದರಲ್ಲಿ ಕಸದ ರಾಶಿ ಬಿದ್ದಿದ್ದು, ಸ್ವಚ್ಛತೆ ಮರೀಚಿಕೆಯಾಗಿದೆ. ನಿತ್ಯ ಸಾರ್ವಜನಿಕರು ಮೂಗು ಮುಚ್ಚಿಕೊಂಡು ಸಂಚರಿಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಮುಖ್ಯ ರಸ್ತೆಯಲ್ಲಿ ಪೈಪ್ ಒಡೆದು ನೀರು ಹರಿಯುತ್ತಿದ್ದರೂ ಅಧಿಕಾರಿಗಳು ದುರಸ್ತಿಗೆ ಮುಂದಾಗಿಲ್ಲ. ನಮ್ಮ ಗೋಳು ಕೇಳುವವರೇ ಇಲ್ಲ.> ತುಕ್ಕಪ್ಪ ಬೇಮಳಗಿ, ಗ್ರಾಮಸ್ಥ
ಚಂದಾಪುರದ ಭವಾನಿ ನಗರದಲ್ಲಿನ ಸಮಸ್ಯೆ ನನ್ನ ಗಮನಕ್ಕೆ ಬಂದಿದೆ. ಶೀಘ್ರವೇ ಕಸ ತೆರವು ಕಾರ್ಯಾಚರಣೆ ಕೈಗೊಂಡು ಸ್ವಚ್ಛತೆಗೆ ಆದ್ಯತೆ ನೀಡುತ್ತೇವೆ.> ವಿಜಯಮಹಾಂತೇಶ ಹೂಗಾರ, ಮುಖ್ಯಾಧಿಕಾರಿ, ಪುರಸಭೆ