ಕಲಬುರಗಿಯಲ್ಲಿ ಬುಧವಾರ ಜರುಗಿದ ಸಭೆಯಲ್ಲಿ ಶಾಸಕ ಅಲ್ಲಮಪ್ರಭು ಪಾಟೀಲ್​ ಮಾತನಾಡಿದರು. ಚಂದ್ರಿಕಾ ಪರಮೇಶ್ವರ,ಮಾನಪ್ಪ ಕಟ್ಟಿಮನಿ ಇದ್ದರು. 
ಕಲಬುರಗಿ

ಕುಡಿವ ನೀರಿನ ತೊಂದರೆ ಆಗದಂತೆ ನೋಡಿಕೊಳ್ಳಿ

ಕಲಬುರಗಿ: ಕಲಬುರಗಿ ದಕ್ಷಿಣ ವಿಧಾನಸಭಾ ಕ್ಷೇತ್ರದ ವಿವಿಧ ಹಳ್ಳಿಗಳಲ್ಲಿ ಹಾಗೂ ನಗರದ ಕೆಲ ಪ್ರದೇಶಗಳಲ್ಲಿ ಎದುರಾಗುತ್ತಿರುವ ಕುಡಿಯುವ ನೀರಿನ ಸಮಸ್ಯೆಯನ್ನು ಕೂಡಲೇ ಪರಿಹರಿಸಬೇಕು ಎಂದು ಶಾಸಕ ಅಲ್ಲಮಪ್ರಭು ಪಾಟೀಲ್​ ಸೂಚಿಸಿದರು.

ನಗರದ ತಾಲೂಕು ಪಂಚಾಯಿತಿ ಕಚೇರಿಯಲ್ಲಿ ಬುಧವಾರ ತಾಲೂಕಿನ ಪಂಚಾಯತ್​ ಅಭಿವೃದ್ಧಿ ಅಧಿಕಾರಿಗಳ (ಪಿಡಿಒ) ಸಭೆ ನಡೆಸಿದ ಅವರು, ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿದ್ದು ಸಮಸ್ಯೆ ಪರಿಹರಿಸಬೇಕು ಎಂದು ತಿಳಿಸಿದರು.

ಕ್ಷೇತ್ರದ ಜನರಿಗೆ ಸಮರ್ಪಕವಾಗಿ ಕುಡಿಯುವ ನೀರು ಪೂರೈಸುವ ಕುರಿತು ಚರ್ಚಿಸಿದರು.ನೀರಿನ ಸಮಸ್ಯೆ ಇರುವ ಪ್ರದೇಶಗಳನ್ನು ಗುರುತಿಸಿ, ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಮತ್ತು ಸಮಗ್ರವಾದ ಕ್ರಿಯಾ ಯೋಜನೆ ರೂಪಿಸಲು ಅಧಿಕಾರಿಗಳಿಗೆ ಸಲಹೆ ನೀಡಿದರು.

ಹಳ್ಳಿಗಳಲ್ಲಿ ಕೊಳವೆ ಬಾವಿಗಳಲ್ಲಿ ನೀರಿನ ಒರತೆ ಬತ್ತುತ್ತಿರುವುದರಿಂದ ಅವು ಕೆಲಸ ಮಾಡುತ್ತಿಲ್ಲ. ಅವುಗಳ ಕಡೆಗೆ ಗಮನ ಹರಿಸಿ ಎಂದು ಸೂಚಿಸಿದರು. ಜನರ ಮೂಲಭೂತ ಸಮಸ್ಯೆಗಳಿಗೆ ಸ್ಪಂದಿಸಿ, ಶಾಶ್ವತ ಪರಿಹಾರ ಕಲ್ಪಿಸಲು ಆದ್ಯತೆ ಮೇರೆಗೆ ಕೆಲಸ ಮಾಡಲು ತಾಕೀತು ಮಾಡಿದರು. ಗ್ಯಾರಂಟಿ ಸಮಿತಿ ಜಿಲ್ಲಾಧ್ಯಕ್ಷೆ ಚಂದ್ರಿಕಾ ಪರಮೇಶ್ವರ, ತಾಪಂ ಇಒ ಮಾನಪ್ಪ ಕಟ್ಟಿಮನಿ ಇತರರು ಇದ್ದರು.