ಕಮಲಾಪುರ: ಪ್ರತಿ ಮಗುವಿಗೂ ಶಿಕ್ಷಣ, ಸ್ವಾತಂತ್ರ್ಯ, ಆರೋಗ್ಯ ಮತ್ತು ಉತ್ತಮ ಭವಿಷ್ಯ ಕಲ್ಪಿಸುವುದು ನಮ್ಮೆಲ್ಲರ ಕರ್ತವ್ಯ. ಹೀಗಾಗಿ ಬಾಲ್ಯ ವಿವಾಹ ಮುಕ್ತ ಸಮಾಜ ನಿರ್ಮಾಣಕ್ಕೆ ನಾವೆಲ್ಲರೂ ಸಂಕಲ್ಪ ಮಾಡಬೇಕಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯದರ್ಶಿ ಹಾಗೂ ಸಿವಿಲ್ ನ್ಯಾಯಾಧೀಶ ಶ್ರೀನಿವಾಸ ನವಲೆ ಹೇಳಿದರು.
ಕುರಿಕೋಟಾದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ರಕ್ಷಣಾ ಕಾವಲು ಸಮಿತಿ ಹಾಗೂ ಮಾರ್ಗದರ್ಶಿ ಸಂಸ್ಥೆಯಿಂದ ಬುಧವಾರ ಹಮ್ಮಿಕೊಂಡಿದ್ದ ಅಂತಾರಾಷ್ಟ್ರೀಯ ದತ್ತು ಮಾಸಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಬಾಲ್ಯ ವಿವಾಹವನ್ನು ತೊಡೆದುಹಾಕಿ, ಸುಶಿಕ್ಷಿತ ಮತ್ತು ಸಮಾನತೆಯ ಸಮಾಜವನ್ನು ನಿರ್ಮಿಸೋಣ. ಬಾಲ್ಯ ವಿವಾಹ ಸಮಾಜಕ್ಕೆ ಕಂಟಕ, ಕಾನೂನಿನ ಪ್ರಕಾರ ಹೆಣ್ಣು ಮಕ್ಕಳಿಗೆ 18, ಗಂಡಿಗೆ 21 ವರ್ಷ ತುಂಬುವವರೆಗೆ ಯಾವುದೇ ಕಾರಣಕ್ಕೂ ವಿವಾಹ ಮಾಡಬಾರದು ಎಂದು ಸಲಹೆ ನೀಡಿದರು.
ಮಾರ್ಗದರ್ಶಿ ಸಂಸ್ಥೆ ನಿರ್ದೇಶಕ ಆನಂದರಾಜು ಮಾತನಾಡಿದರು.
ಪ್ರಾಥಮಿಕ ಶಾಲೆ ಮುಖ್ಯಗುರು ಮಹಾದೇವಿ ಪ್ರಸನ್, ಗ್ರಾಪಂ ಪಿಡಿಒ ಅಭಿಜಿತ್ ಗಾಯಕವಾಡ, ಪ್ರಮುಖರಾದ ಸುನಂದಾ, ಶಿವಾನಂದ ಡೋಲಿ, ದೇವೇಂದ್ರ, ಸಂತೋಷಕುಮಾರ ಇತರರಿದ್ದರು.