ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಯಡಿ ನೋಂದಣಿ ಮಾಡಿಕೊಂಡಿರುವ ರೈತರಿಗೆ ಬೆಳೆ ವಿಮೆ ಹಣ ಸಮರ್ಪಕವಾಗಿ ದೊರೆಯುತ್ತಿಲ್ಲ ಎಂಬ ದೂರು ಕೇಳಿಬರುತ್ತಿದ್ದು, ಈ ಕುರಿತು ತಕ್ಷಣ ತನಿಖೆ ನಡೆಸಿ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಹಾಗೂ ಆಳಂದ ಶಾಸಕ ಬಿ.ಆರ್. ಪಾಟೀಲ್ ಆಗ್ರಹಿಸಿದ್ದಾರೆ.
ಈ ಕುರಿತು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ರ್ಖಗೆ ಅವರಿಗೆ ಪತ್ರ ಬರೆದಿರುವ ಅವರು, ತಮ್ಮ ಮತಕ್ಷೇತ್ರದ ರೈತರು ಸರ್ಕಾರದ ಮೇಲೆ ನಂಬಿಕೆ ಇಟ್ಟು ಹೆಚ್ಚಿನ ಸಂಖ್ಯೆಯಲ್ಲಿ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಯಡಿ ನೋಂದಣಿ ಮಾಡಿಕೊಂಡಿದ್ದಾರೆ. ಆದರೆ, ಹಲವು ರೈತರಿಗೆ ಇನ್ನೂ ವಿಮೆ ಹಣ ಜಮೆಯಾಗಿಲ್ಲ ಎಂದು ದೂರಿದ್ದಾರೆ.
ಕೃಷಿ ಅಧಿಕಾರಿಗಳೊಂದಿಗೆ ಈ ಕುರಿತು ಮಾತನಾಡಿದರೆ ಸ್ಪಷ್ಟ ಮಾಹಿತಿ ನೀಡದೆ, ರೈತರ ಬ್ಯಾಂಕ್ ಖಾತೆಗಳಿಗೆ ಹಣ ವರ್ಗಾವಣೆ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ. ಆಳಂದ ತಾಲೂಕಿನ ಖಜೂರಿ, ಧುತ್ತರಗಾಂವ ಸೇರಿ ಹಲವು ಗ್ರಾಮ ಪಂಚಾಯಿತಿಗಳಲ್ಲಿ ಬೆಳೆ ಕಟಾವು ಕುರಿತು ಅರ್ಹತೆ ಇಲ್ಲ ಎಂದು ಹೇಳಲಾಗುತ್ತಿರುವುದು ರೈತರಲ್ಲಿ ಗೊಂದಲಕ್ಕೆ ಕಾರಣವಾಗಿದೆ ತಿಳಿಸಿದ್ದಾರೆ.
ಮಳೆ ಕೊರತೆ ಹಾಗೂ ಬರ ಪರಿಸ್ಥಿತಿಯಿಂದ ರೈತರು ತೀವ್ರ ಆತಂಕದಲ್ಲಿದ್ದು, ವಿಮೆ ಹಣಕ್ಕಾಗಿ ಜಿಲ್ಲಾಧಿಕಾರಿ ಹಾಗೂ ಕೃಷಿ ಇಲಾಖೆ ಕಚೇರಿಗಳಿಗೆ ಅಲೆದಾಡುವ ಪರಿಸ್ಥಿತಿ ನಿಮಾರ್ಣವಾಗಿದೆ. ಅಧಿಕಾರಿಗಳ ರ್ನಿಲಕ್ಷ್ಯದಿಂದ ಸಮಸ್ಯೆ ಉಂಟಾಗಿದ್ದರೆ, ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರನ್ನು ಪತ್ತೆಹಚ್ಚಿ ಕಠಿಣ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ರೈತರ ಪರ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.
ಕಲಬುರಗಿ ಜಿಲ್ಲೆಯಲ್ಲಿ ಮಳೆ ಕೊರತೆಯಿಂದ ರೈತರು ಮತ್ತು ಕಾರ್ಮಿಕರ ಆರ್ಥಿಕ ಪರಿಸ್ಥಿತಿ ಗಂಭೀರವಾಗಿದೆ. ಜಿಲ್ಲೆಯ ಎಲ್ಲ ಗ್ರಾಮ ಪಂಚಾಯಿತಿಗಳಲ್ಲಿ ವಿಬಿ ಜಿ ರಾಮ್ ಜೀ ಉದ್ಯೋಗ ಖಾತ್ರಿ ಯೋಜನೆಯಡಿ ತುರ್ತು ಕಾಮಗಾರಿಗಳನ್ನು ಆರಂಭಿಸಬೇಕು ಎಂದು ಒತ್ತಾಯಿಸಿದ್ದಾರೆ.
ಉದ್ಯೋಗ ಖಾತ್ರಿ ಕಾಮಗಾರಿಗಳನ್ನು ತ್ವರಿತವಾಗಿ ಆರಂಭಿಸುವುದರಿಂದ ರೈತರು ಹಾಗೂ ಗ್ರಾಮೀಣ ಕಾರ್ಮಿಕರಿಗೆ ತಕ್ಷಣದ ಆರ್ಥಿಕ ನೆರವು ದೊರೆಯಲಿದೆ. ಆದ್ದರಿಂದ ಸರ್ಕಾರ ಎರಡು ವಿಷಯಗಳನ್ನು ಗಂಭೀರವಾಗಿ ಪರಿಗಣಿಸಿ, ಎಲ್ಲ ಅರ್ಹ ರೈತರಿಗೆ ಬೆಳೆ ವಿಮೆ ಹಣ ದೊರೆಯುವಂತೆ, ಜಿಲ್ಲೆಯ ಎಲ್ಲ ಪಂಚಾಯಿತಿಗಳಲ್ಲಿ ಉದ್ಯೋಗ ಖಾತ್ರಿ ಕಾಮಗಾರಿಗಳನ್ನು ಕೂಡಲೇ ಪ್ರಾರಂಭಿಸುವಂತೆ ಬಿ.ಆರ್.ಪಾಟೀಲ್ ಆಗ್ರಹಿಸಿದ್ದಾರೆ.