ಜಿಲ್ಲೆ

ಲೋಕ, ಶಿಕ್ಷಕರ ಕ್ಷೇತ್ರದ ಚುನಾವಣಗೆ ಕಮಲ ಭರ್ಜರಿ ಸಿದ್ಧತೆ

ಲೋಕಸಭೆ ಹಾಗೂ ದಕ್ಷಿಣ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಗೆ ಬಿಜೆಪಿ ಭರ್ಜರಿ ಸಿದ್ಧತೆ ನಡೆಸುತ್ತಿದೆ. ಈ ಸಂಬಂಧ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅಧ್ಯಕ್ಷತೆಯಲ್ಲಿ ಸೋಮವಾರ ನಗರದ ಪಕ್ಷದ ಕಚೇರಿಯಲ್ಲಿ ಮೈಸೂರು ವಿಭಾಗದ ಪ್ರಮುಖ ಕಾರ್ಯಕರ್ತರು ಹಾಗೂ ಶಿಕ್ಷಕ ಸಂಘಟನೆಯ ಪೂರ್ವಭಾವಿ ಸಭೆ ನಡೆಯಿತು.

ಸಭೆಯಲ್ಲಿ ಎರಡೂ ಚುನಾವಣೆಗಳ ಬಗ್ಗೆ ಚರ್ಚಿಸಲಾಯಿತು. ಜತೆಗೆ ಕಾರ್ಯಕರ್ತರು, ಮುಖಂಡರು ಮತ್ತು ಪ್ರಮುಖರ ಅಭಿಪ್ರಾಯ ಸಂಗ್ರಹಿಸಲಾಯಿತು.
ಕೆ.ಎಸ್.ಈಶ್ವರಪ್ಪ ಮಾತನಾಡಿ, ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ಬಹುಮತ ಬರಲಿದೆ. ನಮ್ಮ ನಾಯಕರಾದ ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಪ್ರಧಾನಮಂತ್ರಿ ಆಗಲಿದ್ದಾರೆ.

ಮೋದಿ ಅವರನ್ನು ಮತ್ತೆ ಪ್ರಧಾನಿ ಮಾಡುವ ನಿಟ್ಟಿನಲ್ಲಿ ಎಲ್ಲ ಕಾರ್ಯಕರ್ತರು ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಬೇಕು. ಈ ಚುನಾವಣೆ ನಿಮಿತ್ತ ಯುವಜನತೆಯ ಹೆಸರನ್ನು ಮತದಾರರ ಪಟ್ಟಿಯಲ್ಲಿ ಸೇರಿಸುವ ನಿಟ್ಟಿನಲ್ಲಿ ಜಾಗೃತಿ ಮೂಡಿಸಬೇಕು. ಇದಕ್ಕೆ ಸಂಬಂಧಿಸಿದಂತೆ ಪ್ರತಿ ಮಂಡಲದಲ್ಲಿ ಕಾರ್ಯಕರ್ತರ ಸಭೆಗಳನ್ನು ಮಾಡಿ, ಆ ಮೂಲಕ ಯುವಕರನ್ನು ಮತದಾರ ಪಟ್ಟಿಯಲ್ಲಿ ತಮ್ಮ ಹೆಸರು ನೋಂದಾಯಿಸಿಕೊಳ್ಳುವಂತೆ ಪ್ರೋತ್ಸಾಹಿಸಬೇಕು ಎಂದರು.


ಈ ಚುನಾವಣೆಯಲ್ಲಿ ನಮ್ಮ ಅಭ್ಯರ್ಥಿಗಳು ನಾಲ್ಕು ಜಿಲ್ಲೆಗಳಲ್ಲಿ ಗೆಲ್ಲುವ ರೀತಿ ಯೋಜನೆ ರೂಪಿಸಬೇಕು. ಕೊಡಗು-ಮೈಸೂರು ಕ್ಷೇತ್ರದಲ್ಲಿ ಸಂಸದ ಪ್ರತಾಪ್ ಸಿಂಹ ಅವರು ನೀಡಿರುವ ಕೊಡುಗೆಗಳುಹಾಗೂ ಜನಪರ ಯೋಜನೆಗಳು ಚುನಾವಣೆಯಲ್ಲಿ ನಮ್ಮ ಪಕ್ಷಕ್ಕೆ ಶ್ರೀರಕ್ಷೆಯಾಗಲಿವೆ. ಈ ಸಂಬಂಧ ನಮ್ಮ ಕಾರ್ಯಕರ್ತರು ಪ್ರಚಾರ ಮಾಡಬೇಕು ಎಂದರು.


ಲೋಕಸಭಾ ಚುನಾವಣೆಯಲ್ಲಿ ನಮ್ಮ ಅಭ್ಯರ್ಥಿಯನ್ನು ಅಧಿಕ ಮತಗಳಲ್ಲಿ ಗೆಲ್ಲಿಸುವಂತೆ ಎಲ್ಲರೂ ಕಾರ್ಯ ಪ್ರವೃತ್ತರಾಗಬೇಕು ಎಂದರು.