ಕಂಪ್ಲಿ: ಧರ್ಮಸ್ಥಳ ಪ್ರಕರಣವನ್ನು ಎನ್‌ಐಎಗೆ ವಹಿಸಬೇಕು ಎಂದು ಜೆಡಿಎಸ್ ಯುವ ಘಟಕದ ರಾಜ್ಯ ಕಾರ್ಯಾಧ್ಯಕ್ಷ ರಾಜು ನಾಯಕ ಒತ್ತಾಯಿಸಿದರು.
ಪಟ್ಟಣದ ಅತಿಥಿಗೃಹ ಆವರಣದಲ್ಲಿ ಶುಕ್ರವಾರ ಆಯೋಜಿಸಿದ್ದ ಜೆಡಿಎಸ್ ಸಭೆಯಲ್ಲಿ ಮಾತನಾಡಿ, ಹಿಂದು ವಿರೋಧಿ ಶಕ್ತಿಗಳು ಧರ್ಮಸ್ಥಳ ವಿರುದ್ಧ ಅಪಪ್ರಚಾರದಲ್ಲಿ ತೊಡಗಿವೆ. ಹಿಂದುಗಳ ಭಾವನೆಗಳನ್ನು ಅಸ್ಥಿರಗೊಳಿಸುವ ಕುತಂತ್ರವನ್ನು ಕಾಂಗ್ರೆಸ್ ಸರ್ಕಾರ ಮಾಡುತ್ತಿದೆ ಎಂದು ದೂರಿದರು.
ತರಾತುರಿಯಲ್ಲಿ ಧರ್ಮಸ್ಥಳ ಪ್ರಕರಣವನ್ನು ಎಸ್‌ಐಟಿಗೆ ಒಪ್ಪಿಸಿದ್ದು ಖಂಡನೀಯ. ಧರ್ಮಸ್ಥಳ ವಿರುದ್ಧ ಅಪಪ್ರಚಾರ ಮಾಡುತ್ತಿರುವ ಹಿಂದು ವಿರೋಧಿಗಳನ್ನು ಕೂಡಲೇ ಬಂಧಿಸಿ ತನಿಖೆಗೊಳಪಡಿಸಬೇಕು.
ಸರ್ಕಾರ ಹಿಂದು ವಿರೋಧಿ ನೀತಿಯನ್ನು ಕೈಬಿಡಬೇಕು. ಇನ್ನು ಮೈಸೂರಿನ ಚಾಮುಂಡೇಶ್ವರಿ ದೇವಸ್ಥಾನ ಕೇವಲ ಹಿಂದುಗಳದಲ್ಲ ಎನ್ನುವ ಹೇಳಿಕೆಯನ್ನು ಡಿಸಿಎಂ ಡಿಕೆಶಿ ವಾಪಸ್ ಪಡೆದು ಹಿಂದುಗಳ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದರು.
ಶ್ರಿ ೀಕ್ಷೇತ್ರ ಧರ್ಮಸ್ಥಳ ವಿರುದ್ಧ ಅಪಪ್ರಚಾರ ಖಂಡಿಸಿ, ಧರ್ಮಸ್ಥಳದಲ್ಲಿ ಆ.31ರಂದು ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ಧರ್ಮಸ್ಥಳ ಸತ್ಯ ಯಾತ್ರೆ ಹಮ್ಮಿಕೊಂಡಿದ್ದು, ರಾಜ್ಯದ ಜೆಡಿಎಸ್ ಕಾರ್ಯಕರ್ತರು, ಮುಖಂಡರು, ಹಿಂದುಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಕರೆ ನೀಡಿದರು.