ಜಿಲ್ಲೆ

ಕನಕದಾಸರ ಜಯಂತಿ: ಪೂರ್ವಭಾವಿ ಸಭೆ

ಆದರ್ಶ್. ಎಂ.ಕೆ.

ಮಡಿಕೇರಿ: ನಗರದ ಗಾಂಧಿಭವನದಲ್ಲಿ ನ.೧೮ ರಂದು ಜಿಲ್ಲಾ ಮಟ್ಟದ ಕನಕದಾಸರ ಜಯಂತಿ ಆಚರಣೆ ಕಾರ್ಯಕ್ರಮ ನಡೆಯಲಿದ್ದು, ಎಲ್ಲರೂ ಸಹಕರಿಸುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಮನವಿ ಮಾಡಿದರು.

ನ.೧೮ ರಂದು ಕನಕದಾಸರ ಜಯಂತಿ ಆಚರಣೆ ಸಂಬಂಧ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರ ಅಧ್ಯಕ್ಷತೆಯಲ್ಲಿ ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ಕನಕದಾಸರ ಜಯಂತಿಯನ್ನು ನಗರದ ಗಾಂಧಿಭವನದಲ್ಲಿ ಜಿಲ್ಲಾ ಮಟ್ಟದ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ. ಎಲ್ಲರೂ ಸಹಕರಿಸಬೇಕು ಎಂದ ಅವರು, ಎಸ್‌ಎಸ್‌ಎಲ್‌ಸಿ, ಪಿಯುಸಿ, ನೀಟ್, ಜೆಇಇ ಹೀಗೆ ಮತ್ತಿತರ ಕ್ಷೇತ್ರದಲ್ಲಿ ಸಾಧನೆ ಮಾಡಿದವರನ್ನು ಪ್ರೋತ್ಸಾಹಿಸುವಲ್ಲಿ ಅಗತ್ಯ ಮಾಹಿತಿ ನೀಡುವಂತೆ ಸಲಹೆ ಮಾಡಿದರು.

ಸಂಗೋಳ್ಳಿ ರಾಯಣ್ಣ ಕುರುಬರ ಸಂಘದ ಜಿಲ್ಲಾಧ್ಯಕ್ಷ ಡಿ.ಆರ್.ಪ್ರಭಾಕರ್ ಮಾತನಾಡಿ, ಕನಕದಾಸರ ಜಯಂತಿಯನ್ನು ಅರ್ಥಪೂರ್ಣವಾಗಿ ಆಯೋಜಿಸಬೇಕು. ಕುಶಾಲನಗರದಲ್ಲಿಯೂ ಸಹ ತಾಲೂಕು ಮಟ್ಟದಲ್ಲಿ ಕನಕದಾಸರ ಜಯಂತಿಯನ್ನು ಆಚರಿಸಲಾಗುತ್ತಿದೆ. ಕೊಡಗು ಜಿಲ್ಲೆಯಲ್ಲಿ ಕುರುಬ ಸಮಾಜವು ಪರಿಶಿಷ್ಟ ಪಂಗಡ ವ್ಯಾಪ್ತಿಗೆ ಬರಲಿದ್ದು, ಆದಿವಾಸಿ ಮಕ್ಕಳನ್ನು ಪ್ರೋತ್ಸಾಹಿಸುವಂತಾಗಬೇಕು. ಕುಶಾಲನಗರ ತಾಲೂಕು ಮಟ್ಟದಲ್ಲಿ ಕನಕದಾಸರ ಜಯಂತಿಯನ್ನು ತಹಶೀಲ್ದಾರರ ನೇತೃತ್ವದಲ್ಲಿ ಅರ್ಥಪೂರ್ಣವಾಗಿ ಆಯೋಜಿಸಲಾಗುತ್ತದೆ ಎಂದು ತಿಳಿಸಿದರು.

ಕೊಡಗು ಜಿಲ್ಲಾ ಕುರುಬರ ಸಂಘದ ಪ್ರಧಾನ ಕಾರ್ಯದರ್ಶಿ ಬಿ.ಎ.ಗಂಗಾಧರ ಮಾತನಾಡಿ, ಎಸ್‌ಎಸ್‌ಎಲ್‌ಸಿ, ಪಿಯುಸಿ, ನೀಟ್, ಜೆಇಇ ಮತ್ತಿತರ ಕೋರ್ಸ್‌ಗಳಿಗೆ ಪ್ರವೇಶ ಪಡೆದವರನ್ನು ಗೌರವಿಸಬೇಕು ಎಂದು ಹೇಳಿದರು.

ಸಂಗೋಳಿ ರಾಯಣ್ಣ ಕುರುಬ ಸಮಾಜದ ಗೌರವ ಅಧ್ಯಕ್ಷ ಸಿ.ಕೆ.ಉದಯ್ ಕುಮಾರ್ ಮಾತನಾಡಿ, ಕನಕದಾಸ ಜಯಂತಿಯನ್ನು ವ್ಯವಸ್ಥಿತವಾಗಿ ಆಚರಿಸುವುದರ ಜೊತೆಗೆ ಸಮಾಜದ ಅಭಿವೃದ್ಧಿಗೆ ಸಹಕರಿಸಬೇಕು. ಜೊತೆಗೆ ಆದಿವಾಸಿ ಮಕ್ಕಳಿಗೆ ಹೆಚ್ಚಿನ ಪ್ರೋತ್ಸಾಹ ನೀಡುವಂತಾಗಬೇಕು ಎಂದರು.

ಸಭೆಯಲ್ಲಿ ಕುರುಬ ಸಮಾಜದ ಪ್ರಮುಖರಾದ ಬರಮಣ್ಣ ಬೆಟ್ಟಗೇರಿ, ಮಲ್ಲೇಶ್, ರಮೇಶ್, ವಸಂತ, ನಾಗೇಶ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಕುಮಾರ್, ಐಟಿಡಿಪಿ ಇಲಾಖಾ ಅಧಿಕಾರಿ ಹೊನ್ನೇಗೌಡ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ನಟರಾಜ್, ಜಿ.ಪಂ.ಎಂಜಿನಿಯರ್ ಸುರೇಶ್ ಕುಮಾರ್, ತೋಟಗಾರಿಕೆ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಮುತ್ತಪ್ಪ, ಹಿಂದುಳಿದ ವರ್ಗಗಳ ತಾಲ್ಲೂಕು ಅಧಿಕಾರಿ ಮೋಹನ್ ಕುಮಾರ್, ಮಣಜೂರು ಮಂಜುನಾಥ್ ಇತರರು ಇದ್ದರು.