ಜಿಲ್ಲೆ

೨ನೇ ಅತ್ಯುತ್ತಮ ಚಿತ್ರ ಪ್ರಶಸ್ತಿ ಮುಡಿಗೇರಿಸಿಕೊಂಡ ಕಂದೀಲು

ಮಡಿಕೇರಿ: ಸ್ವಸ್ತಿಕ್ ಎಂಟರ್ಟೈನ್ಮೆಂಟ್ ಬ್ಯಾನರ್ ಅಡಿಯಲ್ಲಿ ಕೊಟ್ಟುಕತ್ತೀರ ಯಶೋಧ ಪ್ರಕಾಶ್ ನಿರ್ಮಾಣ ಮತ್ತು ನಿರ್ದೇಶನದ ಕನ್ನಡ ಚಲನಚಿತ್ರ ಕಂದೀಲು, ಬೆಂಗಳೂರಿನ ಒರಿಯನ್ ಮಾಲ್‌ನಲ್ಲಿ ನಡೆದ ೧೫ನೇ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಅಂತಿಮ ಘಟ್ಟದಲ್ಲಿ ೨ನೇ ಅತ್ಯುತ್ತಮ ಚಿತ್ರ ಪ್ರಶಸ್ತಿಯನ್ನು ತನ್ನ ಮುಡಿಗೇರಿಸಿಕೊಂಡಿದೆ.


ಕನ್ನಡ ಸಿನಿಮಾ ಸ್ಪರ್ಧಾತ್ಮಕ ವಿಭಾಗದಲ್ಲಿ ಆಯ್ಕೆಗೊಂಡು ೧೨ ಸಿನಿಮಾಗಳಲ್ಲಿ ಸ್ಥಾನ ಪಡೆದುಕೊಂಡು ಅಂತಿಮ ಘಟ್ಟದಲ್ಲಿ ಪ್ರಶಸ್ತಿ ಪಡೆದಿದೆ. ಸಮಾರೋಪ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಕನ್ನಡದ ಖ್ಯಾತ ನಟ, ಚಲನಚಿತ್ರೋತ್ಸವದ ರಾಯಭಾರಿ ಡಾಲಿ ಧನಂಜಯ ಹಾಗೂ ಕನ್ನಡ ಚಲನಚಿತ್ರ ಅಕಾಡೆಮಿಯ ನೂತನ ಅಧ್ಯಕ್ಷ ಖ್ಯಾತ ಸಂಗೀತ ನಿರ್ದೇಶಕ ಸಾಧು ಕೋಕಿಲ ಮತ್ತು ಹಿರಿಯ ನಟಿ ಹಾಗೂ ಮಾಜಿ ಸಚಿವೆ ಉಮಾಶ್ರೀ ಅವರಿಂದ ಕಂದೀಲು ಚಿತ್ರದ ನಿರ್ದೇಶಕಿ ಹಾಗೂ ನಿರ್ಮಾಪಕಿ ಕೊಟ್ಟುಕತ್ತಿರ ಯಶೋಧ ಪ್ರಕಾಶ್, ಪತಿ ಪ್ರಕಾಶ್ ಕಾರ್ಯಪ್ಪ ಹಾಗೂ ಕ್ಯಾಮರಾಮೆನ್ ಪಿ.ವಿ.ಆರ್ ಸ್ವಾಮಿ ಅವರೊಂದಿಗೆ ಪ್ರಶಸ್ತಿ ಸ್ವೀಕರಿಸಿದರು.


ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ಕಾರ್ಯದರ್ಶಿ ಮತ್ತು ಚಿತ್ರೋತ್ಸವ ಸಮಿತಿ ಅಧ್ಯಕ್ಷ ಡಾ.ತ್ರಿಲೋಕ್ ಚಂದ್ರ ಐಎಎಸ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತ ಹೇಮಂತ್ ನಿಂಬಾಳ್ಕರ್, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಎನ್.ಎಂ.ಸುರೇಶ್, ಚಿತ್ರೋತ್ಸವದ ಕಲಾತ್ಮಕ ನಿರ್ದೇಶಕ ಎನ್.ವಿದ್ಯಾಶಂಕರ್, ಖ್ಯಾತ ನಟ ಜೈ ಜಗದೀಶ್, ನಟಿಯರಾದ ಭಾವನಾ, ಪೂಜಾ ಗಾಂಧಿ, ಭವ್ಯ ಹಾಗೂ ಜೀವಮಾನ ಸಾಧನೆ ಪ್ರಶಸ್ತಿ ಪಡೆದ ಹಿರಿಯ ನಿರ್ದೇಶಕ ಪದ್ಮಶ್ರೀ ಎಂ.ಎಸ್.ಸತ್ಯು, ಚಿತ್ರದ ನಾಯಕ ನಟ ಪ್ರಭಾಕರ್ ಬಿ.ಕುಂದರ್, ನಟಿ ಈರಮಂಡ ಹರಿಣಿ ವಿಜಯ್ ಉತ್ತಯ್ಯ, ಕಥೆ-ಸಂಕಲನಕಾರ ನಾಗೇಶ್ ಹಾಗೂ ವಿಜಯ್ ಉತ್ತಯ್ಯ ಹಾಜರಿದ್ದರು.