ಗುಂಡ್ಲುಪೇಟೆ: ನಾಡು ನುಡಿ ರಕ್ಷಣೆಗೆ ಎಲ್ಲರೂ ಕೈಜೋಡಿಸಬೇಕು ಎಂದು ಕಬ್ಬಹಳ್ಳಿ ಸರ್ಕಾರಿ ಪ್ರೌಢಶಾಲೆ ಮುಖ್ಯ ಶಿಕ್ಷಕ ಸಿದ್ದರಾಜಪ್ಪ ಹೇಳಿದರು.
ಪಟ್ಟಣದ ಡಿ.ದೇವರಾಜ ಅರಸು ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಅವರು ಮುಖ್ಯ ಭಾಷಣ ಮಾಡಿದರು. ಕನ್ನಡ ಅತ್ಯಂತ ಪುರಾತನ ಹಾಗೂ ಶ್ರೀಮಂತ ಭಾಷೆ. ಅತಿ ಹೆಚ್ಚು ಜ್ಞಾನಪೀಠ ಪ್ರಶಸ್ತಿಗಳನ್ನು ಪಡೆದುಕೊಂಡಿದೆ. ಆದರೆ ನೆರೆರಾಜ್ಯಗಳ ಜನರಲ್ಲಿರುವ ಮಾತೃಭಾಷಾ ಪ್ರೇಮ ನಮ್ಮಲ್ಲಿ ಇಲ್ಲದಿರುವುದರಿಂದ ಪಾಲಕರು ತಮ್ಮ ಮಕ್ಕಳನ್ನು ಕನ್ನಡ ಶಾಲೆಗಳ ಬದಲು ಆಂಗ್ಲ ಮಾಧ್ಯಮಶಾಲೆಗಳಿಗೆ ಸೇರಿಸುತ್ತಿದ್ದಾರೆ. ಇತ್ತೀಚಿನ ದಿನಗಳಲ್ಲಿ ಮಾತೃಭಾಷೆ ಬಳಕೆ ಕಡಿಮೆಯಾಗುತ್ತಿರುವುದರಿಂದ ಕನ್ನಡ ಭಾಷೆ ಬೆಳವಣಿಗೆಗೆ ಅಡ್ಡಿಯಾಗಿದೆ. ಆದ್ದರಿಂದ ಇನ್ನಾದರೂ ಕನ್ನಡ ಮಾಧ್ಯಮದಲ್ಲಿ ಶಿಕ್ಷಣ ಸೇರಿದಂತೆ ಆಡಳಿತದ ಎಲ್ಲಾ ಹಂತಗಳಲ್ಲಿಯೂ ಕನ್ನಡ ಬಳಕೆ ಕಡ್ಡಾಯಗೊಳಿಸುವಂತಾಗಬೇಕು ಎಂದು ಹೇಳಿದರು.