ಬಳ್ಳಾರಿ ನಗರದ ಡಾ.ರಾಜ್‌ಕುಮಾರ್ ರಸ್ತೆಯ ಪದವಿ ಪೂರ್ವ ಕಾಲೇಜು ಮೈದಾನದ ಆವರಣದಲ್ಲಿ ಜಿಲ್ಲಾಡಳಿತ ವತಿಯಿಂದ ಬುಧವಾರ ಆಯೋಜಿಸಲಾಗಿದ್ದ 68ನೇ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಬಿ.ನಾಗೇಂದ್ರ ಉದ್ಘಾಟಿಸಿದರು. ಶಾಸಕ ನಾರಾ ಭರತ್‌ರೆಡ್ಡಿ, ಪಾಲಿಕೆ ಮೇಯರ್ ಡಿ.ತ್ರಿವೇಣಿ, ಐಜಿಪಿ ಬಿ.ಎಸ್.ಲೋಕೇಶ್ ಕುಮಾರ್, ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು, ಜಿಪಂ ಸಿಇಒ ರಾಹುಲ್ ಶರಣಪ್ಪ ಸಂಕನೂರ ಇತರರಿದ್ದರು.  
ಜಿಲ್ಲೆ

ಗಣಿನಾಡಿನಲ್ಲಿ ಮೊಳಗಿದ ಕನ್ನಡ ಡಿಂಡಿಮ

Bellari - Heera Nayak

ಬಳ್ಳಾರಿ : ಕರ್ನಾಟಕ ಏಕೀಕರಣದ ಸಮಯದಲ್ಲಿ ಹೋರಾಡಿದ ಮಹನೀಯರ ಹೆಸರನ್ನು ನಗರದ ಪ್ರಮುಖ ರಸ್ತೆ ಹಾಗೂ ವೃತ್ತಗಳಿಗೆ ನಾಮಕರಣ ಮಾಡಲಾಗುವುದು ಎಂದು ಯುವ ಸಬಲೀಕರಣ, ಕ್ರೀಡೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ನಾಗೇಂದ್ರ ಹೇಳಿದರು.

ನಗರದ ಡಾ.ರಾಜ್‌ಕುಮಾರ್ ರಸ್ತೆಯ ಪದವಿ ಪೂರ್ವ ಕಾಲೇಜು ಮೈದಾನದ ಆವರಣದಲ್ಲಿ ಜಿಲ್ಲಾಡಳಿತ ವತಿಯಿಂದ ಬುಧವಾರ ಆಯೋಜಿಸಲಾಗಿದ್ದ 68ನೇ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ರಾಷ್ಟ್ರಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.

ಕರ್ನಾಟಕವನ್ನು ಒಗ್ಗೂಡಿಸಲು ಮತ್ತು ಏಕೀಕರಣಕ್ಕೆ ಶ್ರಮಿಸಿದ ನಾಯಕರನ್ನು ಸ್ಮರಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ. ಈ ನಿಟ್ಟಿನಲ್ಲಿ ಜಿಲ್ಲಾಡಳಿತ, ಮಹಾನಗರ ಪಾಲಿಕೆಯಿಂದ ಅವರ ಹೆಸರನ್ನು ರಸ್ತೆಗಳಿಗೆ, ವೃತ್ತಗಳಿಗೆ ನಾಮಕರಣಗೊಳಿಸಲು ಕ್ರಮ ವಹಿಸಬೇಕು ಎಂದು ಸೂಚಿಸಿದರು.

ಕರುನಾಡಿನ ಏಕೀಕರಣಕ್ಕೆ ಬಲಿದಾನಗೈದ ಮಹಾವೀರ ಪಿಂಜಾರ್ ಪೈಲ್ವಾನ್ ರಂಜಾನ್ ಸಾಬ್ ಅವರು ಬಳ್ಳಾರಿಯವರು. ಅಂದಿಗೆ ರಾಜ್ಯಾದ್ಯಂತ ನಡೆಯುತ್ತಿದ್ದ ಕರ್ನಾಟಕ ಏಕೀಕರಣಕ್ಕೆ ಮೊದಲ ಜಯ ಸಿಕ್ಕಿದ್ದು ಬಳ್ಳಾರಿಯಲ್ಲೇ. ಕನ್ನಡಿಗರ ಸತತ ಹೋರಾಟದ ಫಲವಾಗಿ ಬಳ್ಳಾರಿಯನ್ನು 1953ರ ಅ.1 ರಂದು, ಅಂದಿನ ಮೈಸೂರು ರಾಜ್ಯದಲ್ಲಿ ವಿಲೀನಗೊಳಿಸುವ ತೀರ್ಮಾನ ತೆಗೆದುಕೊಳ್ಳಲಾಗಿತ್ತು. ಇದರೊಂದಿಗೆ ಏಕೀಕರಣದ ಪ್ರಕ್ರಿಯೆ ಬಳ್ಳಾರಿಯಿಂದಲೇ ಆರಂಭ ಆಗಿತ್ತು ಎಂದು ತಿಳಿಸಿದರು.
ಕನ್ನಡ ಹೋರಾಟಗಾರ ಎಂ.ರಾಮಮೂರ್ತಿ ಅವರು ಹಳದಿ ಹಾಗೂ ಕೆಂಪು ಬಣ್ಣವನ್ನು ಬಳಸಿ ಕನ್ನಡದ ಬಾವುಟ ಸಿದ್ದಪಡಿಸಿದ್ದರು. ಹಳದಿ ಬಣ್ಣವು ಶಾಂತಿ ಮತ್ತು ಸೌಹಾರ್ದತೆ ಸೂಚಿಸಿದರೆ, ಕೆಂಪು ಬಣ್ಣವು ಕ್ರಾಂತಿಯ ಸಂಕೇತವಾಗಿದೆ. ಹಾಗೆಯೇ ಇದು ನಮ್ಮ ಕನ್ನಡಾಂಬೆ ಭುವನೇಶ್ವರಿಯ ಅರಿಶಿಣ ಕುಂಕುಮದ ಸಂಕೇತವಾಗಿದೆ. ದೇಶದಲ್ಲಿ ಎಂಟು ಜ್ಞಾನಪೀಠ ಪ್ರಶಸ್ತಿಗಳು ನಮ್ಮ ಕನ್ನಡ ಸಾಹಿತ್ಯಕ್ಕೆ ಲಭಿಸಿರುವುದು ಹೆಮ್ಮೆಯ ವಿಷಯವಾಗಿದೆ ಎಂದು ಸಂತಸ ವ್ಯಕ್ತಪಡಿಸಿದರು.

ಮೈಸೂರು ರಾಜ್ಯವು ‘ಕರ್ನಾಟಕ’ ಎಂದು ಮರುನಾಮಕರಣವಾಗಿ 1ನೇ ನ.2023ಕ್ಕೆ 50 ವರ್ಷ ಪೂರ್ಣಗೊಂಡ ಈ ಶುಭ ಸಂದರ್ಭದಲ್ಲಿ ರಾಜ್ಯ ಸರ್ಕಾರವು ‘ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ’ ಎಂಬ ಹೆಸರಿನಲ್ಲಿ ಇಡೀ ವರ್ಷ ಕರ್ನಾಟಕ ಇತಿಹಾಸ, ಕಲೆ, ಸಾಹಿತ್ಯ, ಸಂಸ್ಕೃತಿ ಹಾಗೂ ನಾಡು ನುಡಿಗೆ ಸಂಬಂಧಿಸಿದಂತೆ ಮತ್ತು ಯುವ ಜನತೆಯಲ್ಲಿ ಕನ್ನಡ-ಕನ್ನಡಿಗ-ಕರ್ನಾಟಕದ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.

ಇಂಗ್ಲಿಷ್ ವ್ಯಾಮೋಹಕ್ಕೆ ಒಳಗಾಗಿ ಅತ್ತ ಇಂಗ್ಲಿಷ್ ಕಲಿಯದೆ ಇತ್ತ ಕನ್ನಡವನ್ನೂ ಅರಿಯದೆ ಕಂಗ್ಲಿಷ್‌ಗಳಾಗುವುದು ಬೇಡ. ಅತ್ಯಂತ ಶಕ್ತಿ ಶಾಲಿಯಾದ ಹಾಗೂ ಅಗಾದ ಜ್ಞಾನ ಮತ್ತು ಪರಂಪರೆಯನ್ನು ಹೊಂದಿರುವ ನಮ್ಮ ಕನ್ನಡ ಭಾಷೆಯನ್ನು ಬಳಸಿ ಉಳಿಸೋಣ. ದೇಶದ ಅತ್ಯಂತ ಪ್ರಮುಖ ಪರೀಕ್ಷೆಗಳಲ್ಲಿ ಒಂದಾದ ಅಖಿಲ ಭಾರತ ಸೇವೆಯ ಹುದ್ದೆಗಳ ಪರೀಕ್ಷೆಗಳನ್ನು ಈಗ ಕನ್ನಡ ಮಾಧ್ಯಮದಲ್ಲಿ ಬರೆಯುವುದಕ್ಕೆ ಅವಕಾಶ ಇರುವುದರಿಂದ ನಮ್ಮ ಭಾಷೆಯ ಬಗ್ಗೆ ನಮಗೆ ಹೆಮ್ಮೆ ಇರುವುದು ಅವಶ್ಯವಾಗಿದೆ. ಎರಡು ಸಾವಿರ ವರ್ಷದ ಇತಿಹಾಸ ಇರುವ ನಮ್ಮ ಹೆಮ್ಮೆಯ ಭಾಷೆಗೆ ಶಾಸ್ತ್ರೀಯ ಸ್ಥಾನಮಾನ ದೊರೆತಿದೆ ಅದನ್ನು ಸದುಪಯೋಗಪಡಿಸಿಕೊಂಡು ನಾಡು ನುಡಿಯನ್ನು ಮತ್ತಷ್ಟು ಎತ್ತರಕ್ಕೆ ಬೆಳೆಸೋಣ ಎಂದರು.

ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಕರ್ನಾಟಕದಲ್ಲಿ ಜನಿಸಿದ ನಾವೆಲ್ಲರೂ ಧನ್ಯರು. ಕೊನೆ ಉಸಿರುವವ ತನಕ ಕನ್ನಡಿಗರಾಗಿಯೇ ಇರೋಣ ಮತ್ತು ಬಾಳೋಣ ಎಂದು ತಿಳಿಸಿದರು.

ಮೊಟ್ಟ ಮೊದಲ ಬಾರಿಗೆ ನಗರದ ಕೋಟೆಯಲ್ಲಿ ಕನ್ನಡ ಧ್ವಜವನ್ನು ಹಾರಿಸಲಾಗಿದೆ, ಮುಂಬರುವ ಕನ್ನಡ ರಾಜ್ಯೋತ್ಸವ ಸಂಭ್ರಮದಲ್ಲಿ ನಗರದ ಕೋಟೆ ಮೇಲೆ ಅಚ್ಚುಕಟ್ಟಾಗಿ ಧ್ವಜಾರೋಹಣ ನೆರವೇರಿಸಲು ಧ್ವಜಸ್ತಂಭ ಹಾಗೂ ಇತರ ವ್ಯವಸ್ಥೆಯನ್ನು ಶಾಸಕರ ಅನುದಾನದಲ್ಲಿ ನಿರ್ಮಿಸಿಕೊಡಲಾಗುವುದು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಕನ್ನಡ ನಾಡಿನ ಹೆಸರಾಂತ ಕವಿಗಳಾದ ಹುಯಿಲಗೋಳು ನಾರಾಯಣರಾಯರು ರಚಿಸಿದ ‘ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು’, ರಾಷ್ಟ್ರ ಕವಿ ಕುವೆಂಪು ವಿರಚಿತ ‘ಎಲ್ಲಾದರೂ ಇರು ಎಂತಾದರೂ ಇರು ನೀ ಎಂದೆಂದಿಗೂ ಕನ್ನಡವಾಗಿರು’, ರಾಷ್ಟ್ರ ಕವಿ ದ.ರಾ.ಬೇಂದ್ರೆ ಅವರ ‘ಒಂದೇ ಒಂದೇ ಕರ್ನಾಟಕ ಒಂದೇ’, ಸಿದ್ದಯ್ಯ ಪುರಾಣಿಕ ಅವರ ‘ಹೊತ್ತಿತೋ ಹೊತ್ತಿತು ಕನ್ನಡದ ದೀಪ’, ಚನ್ನವೀರ ಕಣವಿ ಅವರ ‘ಹೆಸರಾಯಿತು ಕರ್ನಾಟಕ ಉಸಿರಾಗಲು ಕನ್ನಡ’ ಎಂಬ ಗೀತೆಗಾಯನ ನಡೆಯಿತು.

ಪಾಲಿಕೆ ಮೇಯರ್ ಡಿ.ತ್ರಿವೇಣಿ, ಐಜಿಪಿ ಬಿ.ಎಸ್.ಲೋಕೇಶ್ ಕುಮಾರ್, ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು, ಜಿಪಂ ಸಿಇಒ ರಾಹುಲ್ ಶರಣಪ್ಪ ಸಂಕನೂರ, ಸಹಾಯಕ ಆಯುಕ್ತ ಹೇಮಂತ್ ಕುಮಾರ್, ಹೆಚ್ಚುವರಿ ಜಿಲ್ಲಾಧಿಕಾರಿ ಮೊಹಮ್ಮದ್ ಜುಬೇರ ಸೇರಿದಂತೆ ಜಿಲ್ಲಾಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ, ಶಾಲೆ ಮಕ್ಕಳು, ವಿವಿಧ ಕನ್ನಡ ಪರ ಸಂಘಟನೆಗಳು, ಇನ್ನಿತರರು ಉಪಸ್ಥಿತರಿದ್ದರು.