ಕಾರಟಗಿ: ಬಸ್ ಸೌಲಭ್ಯ ಸೇರಿ ವಿದ್ಯಾರ್ಥಿಗಳ ವಿವಿಧ ಬೇಡಿಕೆ ಈಡೇರಿಕೆಗಾಗಿ ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದಿಂದ ಸಚಿವ ಶಿವರಾಜ ತಂಗಡಗಿಗೆ ಪಟ್ಟಣದ ಹೊಸ ಬಸ್‌ನಿಲ್ದಾಣ ಬಳಿ ಶುಕ್ರವಾರ ಮನವಿ ಸಲ್ಲಿಸಲಾಯಿತು.
ಎನ್‌ಎಸ್‌ಯುಐ ಜಿಲ್ಲಾಧ್ಯಕ್ಷ ಶಿವಕುಮಾರಗೌಡ ತೆಕ್ಕಲಕೋಟೆ ಮಾತನಾಡಿ, ಬೂದಗುಂಪಾ, ಹಾಲಸಮುದ್ರ, ತಿಮ್ಮಾಪೂರ, ಯರಡೋಣಾ, ಹುಳ್ಕಿಹಾಳ, ಚಳ್ಳೂರು ಹಾಗೂ ಮರ್ಲಾನಹಳ್ಳಿಗಳಿಂದ ನೂರಾರು ವಿದ್ಯಾರ್ಥಿಗಳು ವಿದ್ಯಾಭ್ಯಾಸಕ್ಕಾಗಿ ನಿತ್ಯ ಪಟ್ಟಣಕ್ಕೆ ಆಗಮಿಸುತ್ತಿದ್ದಾರೆ. ಬೆಳಗ್ಗೆ, ಮಧ್ಯಾಹ್ನ ಮತ್ತು ಸಂಜೆಗೆ ಸರಿಯಾದ ಸಾರಿಗೆ ವ್ಯವಸ್ಥೆ ಇಲ್ಲದಂತಾಗಿದ್ದು ಅನೇಕ ವಿದ್ಯಾರ್ಥಿಗಳು ಕಾಲ್ನಿಡಿಗಿಯಲ್ಲಿಯೇ ಊರು ತಲುಪುತ್ತಿದ್ದಾರೆ.
ವಿದ್ಯಾರ್ಥಿನಿಯರಿಗೆ ತುಂಬಾ ಅನನಾಕೂಲವಾಗುತ್ತಿದೆ. ಹಲವು ಬಾರಿ ಸಾರಿಗೆ ಇಲಾಖೆ ಅಧಿಕಾರಿಗಳ ಗಮನಕ್ಕೆ ತಂದರೂ ಸ್ಪಂದಿಸುತ್ತಿಲ್ಲ. ಜತೆಗೆ ತಾಲೂಕಿನಾದ್ಯಂತ ಮೂರು ಸಾವಿರಕ್ಕೂ ಅಧಿಕಾರ ವಿದ್ಯಾರ್ಥಿಗಳು ಇದ್ದಾರೆ. ತಾಲೂಕು ಕೇಂದ್ರದಲ್ಲಿ ಸುಸಜ್ಜಿತ ಗ್ರಂಥಾಲಯವಿಲ್ಲ. ಹೀಗಾಗಿ ಸರ್ಕಾರಿ ಹುದ್ದೆ ಸೇರಿದಂತೆ ಸ್ಪರ್ಧಾತ್ಮಕ ಪರೀಕ್ಷೆಗೆ ಸಿದ್ಧತೆ ಮಾಡಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಕೂಡಲೇ ಹಳ್ಳಿಗಳಿಗೆ ಸಕಾಲಕ್ಕೆ ಸಾರಿಗೆ ವ್ಯವಸ್ಥೆ ಹಾಗೂ ಸುಸಜ್ಜಿತ ಗ್ರಂಥಾಲಯ ನಿರ್ಮಿಸುವಂತೆ ಸಚಿವ ಶಿವರಾಜ ತಂಗಡಗಿಯಲ್ಲಿ ಮನವಿ ಮಾಡಿಕೊಂಡರು.
ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, ಪಟ್ಟಣದಲ್ಲಿ ಸುಸಜ್ಜಿತ ಗ್ರಂಥಾಲಯ ನಿರ್ಮಾಣಕ್ಕೆ ಜಾಗ ಗುರಿತಿಸಲಾಗಿದೆ. ಶೀಘ್ರವೇ ನೀಲಿನಕ್ಷೆ ತಯಾರಿಸಿ ಟೆಂಡರ್ ಕರೆಯಕಲಾಗುವುದು. ಸಾರಿಗೆ ಇಲಾಖೆ ಅಧಿಕಾರಿಗಳೊಂದಿಗೆ ಮಾತನಾಡಿ ಸಕಾಲದಲ್ಲಿ ಗ್ರಾಮೀಣ ಪ್ರದೇಶಗಳಿಗೆ ಸಾರಿಗೆ ವ್ಯವಸ್ಥೆ ಕಲ್ಪಿಸುವಂತೆ ಸೂಚಿಸುತ್ತೇನೆ ಎಂದು ತಿಳಿಸಿದರು.