ಜಿಲ್ಲೆ

ಮಹಾರಾಷ್ಟ್ರದಲ್ಲಿ ಕನ್ನಡಿಗರ ಮೇಲೆ ಹಲ್ಲೆ: ಮಂಡ್ಯದಲ್ಲಿ ಕರವೇ ಕಾರ್ಯಕರ್ತರ ಪ್ರತಿಭಟನೆ

ಮಂಡ್ಯ: ಮಹಾರಾಷ್ಟ್ರ ಪುಂಡರು ಕನ್ನಡಿಗರ ಮೇಲಿನ ಹಲ್ಲೆಯನ್ನು ಖಂಡಿಸಿ ಕನ್ನಡ ರಕ್ಷಣಾ ವೇದಿಕೆ(ಕನ್ನಡಪರ ಸಂಘಟನೆಗಳ ಒಕ್ಕೂಟ) ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಸಿಲ್ವರ್ ಜ್ಯೂಬಿಲಿ ಪಾರ್ಕಿನಲ್ಲಿ ಜಮಾಯಿಸಿದ ಕಾರ್ಯಕರ್ತರು, ಮಹಾರಾಷ್ಟ್ರ ಸರ್ಕಾರದ ಸಚಿವರು, ಶಿವಸೇನೆ ಮತ್ತು ಎಂಇಎಸ್ ಮುಖಂಡರ ಪ್ರತಿಕೃತಿ ದಹನ ಮಾಡಿ ಆಕ್ರೋಶ ವ್ಯಕ್ತಪಡಿಸಿದರು.

ಮಹಾರಾಷ್ಟ್ರದ ಒತ್ತಡದಿಂದಲೇ ಕೇಂದ್ರ ಸರ್ಕಾರದಿಂದ ರಚಿಸಲ್ಪಟ್ಟ ಮಹಾಜನ್ ಅವರ ಏಕಸದಸ್ಯ ಆಯೋಗ ಬೆಳಗಾವಿ ಕರ್ನಾಟಕಕ್ಕೆ ಸೇರಬೇಕೆಂದು ತೀರ್ಪು ನೀಡಿದೆ. ಆದರೆ ಇದನ್ನು ಒಪ್ಪದ ಮಹಾರಾಷ್ಟ್ರ ಸರ್ಕಾರ ಮತ್ತು ಅಲ್ಲಿನ ರಾಜಕಾರಣಿಗಳು ಬೆಳಗಾವಿಯಲ್ಲಿ ಕನ್ನಡಿಗರು ಮತ್ತು ಮರಾಠಿಗರ ನಡುವೆ ಸಂಘರ್ಷದ ವಾತಾವರಣವನ್ನು ನಿರ್ಮಿಸಲು ಯತ್ನಿಸುತ್ತಿದ್ದಾರೆ. ಬೆಳಗಾವಿ ವಿವಾದ ಸಧ್ಯ ಸುಪ್ರೀಂ ಕೋರ್ಟಿನಲ್ಲಿ ವಿಚಾರಣೆಯಲ್ಲಿದೆ. ಇಂತಹ ಸಂದರ್ಭದಲ್ಲಿ ನೆಲದ ಕಾನೂನಿಗೆ ಗೌರವ ನೀಡುವ ಬದಲು ಸಂಘರ್ಷ ಮೂಡಿಸಲು ಯತ್ನಿಸಲಾಗುತ್ತಿದೆ. ಇದರ ವಿರುದ್ಧ ಕರವೇ ನಿರಂತರವಾಗಿ ಹೋರಾಟ ನಡೆಸುತ್ತಿದೆ. ಈ ಮಧ್ಯೆ ಮಹಾರಾಷ್ಟ್ರದಲ್ಲಿ ಕನ್ನಡಿಗರ ಮೇಲೆ ವಿನಾಕಾರಣ ದೌರ್ಜನ್ಯ ಎಸಗಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಹಿನ್ನೆಲೆಯಲ್ಲಿ ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ಅಲ್ಲಿನ ಕನ್ನಡಿಗರ ರಕ್ಷಣೆಗೆ ಮಹಾರಾಷ್ಟ್ರದ ಸರ್ಕಾರ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಬೇಕು. ಕೇಂದ್ರ ಸರ್ಕಾರ ಮಧ್ಯಪ್ರವೇಶ ಮಾಡಿ ಕನ್ನಡಿಗರಿಗೆ ರಕ್ಷಣೆ ನೀಡಬೇಕು. ಬೆಳಗಾವಿಯಲ್ಲಿ ಶಾಂತಿ ಕದಡುತ್ತಿರುವ ಮಹಾರಾಷ್ಟ್ರ ಏಕೀಕರಣ ಸಮಿತಿಯನ್ನು ಕೂಡಲೇ ನಿಷೇಧಿಸಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಕರವೇ ರಾಜ್ಯ ಉಪಾಧ್ಯಕ್ಷ ಎಂ.ಎಸ್.ಚಿದಂಬರ್, ಜಿಲ್ಲಾಧ್ಯಕ್ಷ ಕೆ.ಟಿ.ಶಂಕರೇಗೌಡ, ತಾಲೂಕು ಅಧ್ಯಕ್ಷ ಅಶೋಕ್, ಮುಖಂಡರಾದ ಕಾಂತರಾಜು, ನಾಗೇಶ, ಯೋಗೇಶ ಇತರರಿದ್ದರು.